ಮಂಗಳವಾರ, ಏಪ್ರಿಲ್ 13, 2021
30 °C
‘ಜಲಶಕ್ತಿ ಅಭಿಯಾನ’ ಸಭೆಯಲ್ಲಿ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಪಂಕಜ್‌ಕುಮಾರ್ ಸೂಚನೆ

ಜಲ ಸಂರಕ್ಷಣೆ; ಅರಿವು ಮೂಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ‘ಮಳೆಯ ಪ್ರತಿ ಹನಿ ನೀರನ್ನು ಸಂಗ್ರಹಿಸುವ ಮೂಲಕ ಜೀವಜಲವನ್ನು ಮುಂದಿನ ಪೀಳಿಗೆಗಾಗಿ ಸಂರಕ್ಷಿಸಬೇಕಿದೆ. ಈ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಅಧಿಕಾರಿಗಳು ವ್ಯಾಪಕವಾಗಿ ಮಾಡಬೇಕು’ ಎಂದು ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಪಂಕಜ್‌ಕುಮಾರ್ ಹೇಳಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಗುರುವಾರ ನಡೆದ ‘ಜಲಶಕ್ತಿ ಅಭಿಯಾನ’ ಸಭೆಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಲಶಕ್ತಿ ಅಭಿಯಾನ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ನೀರನ್ನು ಇಂಗಿಸುವ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಪ್ರತಿ ಮನೆ ಮನೆಯಲ್ಲೂ ಅವಶ್ಯಕತೆಗಿಂತ ಹೆಚ್ಚಾಗಿ ನೀರು ಪೋಲಾಗುವುದು ತಡೆಯಬೇಕು’ ಎಂದು ತಿಳಿಸಿದರು.

‘ಕೆರೆಗಳಲ್ಲಿ ಹೂಳೆತ್ತುವ ಕಾರ್ಯ ಸಮರ್ಪಕವಾಗಿ ನಡೆಯಬೇಕು. ಕಲ್ಯಾಣಿಗಳನ್ನು ಶುದ್ಧೀಕರಣಗೊಳಿಸಬೇಕು. ಬಹು ಕಮಾನಿನ ಅಣೆಕಟ್ಟುಗಳನ್ನು ನಿರ್ಮಾಣ ಮಾಡಿ ನೀರನ್ನು ತಡೆಹಿಡಿಯಬೇಕು. ನೀರು ರಕ್ಷಣೆಯ ಬಗ್ಗೆ ಮಹಿಳೆಯರು ಹಾಗೂ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ. ಆ ನಿಟ್ಟಿನಲ್ಲಿ ಪ್ರತಿ ತಿಂಗಳಿಗೊಮ್ಮೆ ಸಭೆಗಳನ್ನು ನಡೆಸಬೇಕು’ ಎಂದರು.

‘ಮಳೆ ನೀರು ಸಂಗ್ರಹ ವ್ಯವಸ್ಥೆ ಬಹುಮುಖ್ಯ. ಈ ಸಂಬಂಧ ಎಲ್ಲಾ ಪಿಡಿಒಗಳು ನಿರಂತರವಾಗಿ ಶ್ರಮಿಸಬೇಕು. ಮನೆ ಬಳಕೆ ನೀರನ್ನು ಮರುಬಳಕೆ ಮಾಡುವ ನಿಟ್ಟಿನಲ್ಲಿ ಕೂಡ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸಗಳಾಗಬೇಕು’ ಎಂದು ಹೇಳಿದರು.

ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುದತ್ ಹೆಗಡೆ ಅವರು ಜಿಲ್ಲೆಯ ಅಂತರ್ಜಲ ಮಟ್ಟದ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.

ಸಭೆಯಲ್ಲಿ ಕೇಂದ್ರ ಆಯುಷ್ ಸಚಿವಾಲಯದ ನಿರ್ದೇಶಕ ಶಶಿರಂಜನ್ ಕುಮಾರ್, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ನಿರ್ದೇಶಕರಾದ ಮನೋಜ್ ಕುಮಾರ್ ಗಂಗೇಯಾ, ಕೇಂದ್ರ ಅಂತರ್ಜಲ ಮಂಡಳಿಯ ತಾಂತ್ರಿಕ ಅಧಿಕಾರಿ ಯು.ಆರ್.ರಾಕಿ, ಎಂಜಿನಿಯರ್ ದಿಲೀಪ್ ಹಾಗೂ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.