ಭಾನುವಾರ, ಆಗಸ್ಟ್ 25, 2019
20 °C
ಐದು ಜಿಲ್ಲೆಗಳಲ್ಲಿ ಪ್ರವಾಹ ಸಂಕಷ್ಟ: ವಿಡಿಯೋ ಸಂವಾದದ ಮೂಲಕ ಪರಿಸ್ಥಿತಿ ಅವಲೋಕಿಸಿದ ಸಿಎಂ

ನೆರೆ: ತ್ವರಿತ ಪರಿಹಾರಕ್ಕೆ ಸೂಚನೆ

Published:
Updated:

ಬೆಂಗಳೂರು: ಪ್ರವಾಹ ಹಾಗೂ ಭಾರಿ ಮಳೆಯಿಂದ ಸಂಕಷ್ಟಕ್ಕೆ ಒಳಗಾಗಿರುವ ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಸಮರೋಪಾದಿಯಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯವನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭಾನುವಾರ ಆಯಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿಗಳ ಜತೆ ವಿಡಿಯೊ ಸಂವಾದ ನಡೆಸಿದ ಅವರು, ಪ್ರವಾಹ ಪೀಡಿತ ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದರು.

ಇದನ್ನೂ ಓದಿ: ಕೃಷ್ಣಾ ನದಿ ತೀರದಲ್ಲಿ ಹೈಅಲರ್ಟ್‌

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಹಲವು ಗ್ರಾಮಗಳು ಮುಳುಗಡೆಯಾಗಿದ್ದು, ಬೆಳೆಗಳಿಗೆ ನಷ್ಟವಾಗಿದೆ. ಸಾರ್ವಜನಿಕರ ಆಸ್ತಿಗಳಿಗೆ ಹಾನಿಯಾಗಿದೆ. ಜನ ಮತ್ತು ಜಾನುವಾರುಗಳೂ ತೊಂದರೆಗೆ ಸಿಲುಕಿರುವುದನ್ನು ಜಿಲ್ಲಾ ಕಾರ್ಯದರ್ಶಿಗಳು ಮತ್ತು ಜಿಲ್ಲಾಧಿಕಾರಿಗಳು ಮುಖ್ಯಮಂತ್ರಿ ಗಮನಕ್ಕೆ ತಂದರು.

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಜಿಲ್ಲಾಡಳಿತ ತುರ್ತು ಪರಿಹಾರ ಕಾರ್ಯ ಕೈಗೊಂಡು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು. ಸಂಪರ್ಕ ಕಡಿತಗೊಂಡು ಗ್ರಾಮಗಳು ನಡುಗಡ್ಡೆಗಳಾಗಿವೆ. ಹಲವು ಕಡೆಗಳಲ್ಲಿ ಮನೆಗಳನ್ನು ಕಳೆದುಕೊಂಡವರಿಗೆ ಪುನರ್ವಸತಿ ಕಾರ್ಯ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ನಿರಾಶ್ರಿತರಿಗೆ ಆಹಾರ, ಔಷಧ, ವಸ್ತ್ರ, ಹೊದಿಕೆ ಇತ್ಯಾದಿ ಒದಗಿಸಬೇಕು. ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಮಾಡಬೇಕು. ಪುನರ್ವಸತಿ ಕೇಂದ್ರಗಳಲ್ಲಿ ಉತ್ತಮ ಆಹಾರ, ಹಾಲು, ಶುದ್ಧ ಕುಡಿಯುವ ನೀರನ್ನು ಆದ್ಯತೆ ಮೇರೆಗೆ ಒದಗಿಸಬೇಕು ಎಂದೂ ಯಡಿಯೂರಪ್ಪ ಹೇಳಿದರು.

ರಕ್ಷಣಾ ಕಾರ್ಯಕ್ಕೆ ಚುರುಕು: ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಸೇನೆಯ ನೆರವು ಪಡೆದುಕೊಂಡು ರಕ್ಷಣಾ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎನ್‌ಡಿಆರ್‌ಎಫ್‌ನ ಮೂರು ತಂಡಗಳು ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕಾರ್ಯೋನ್ಮುಖವಾಗಿವೆ. ಅಗತ್ಯವಿದ್ದರೆ ಇನ್ನು ಹೆಚ್ಚಿನ ತಂಡಗಳನ್ನು ನಿಯೋಜಿಸಿಕೊಳ್ಳಬಹುದು ಎಂದರು.

Post Comments (+)