ಮಂಗಳವಾರ, ನವೆಂಬರ್ 19, 2019
24 °C

ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್‌

Published:
Updated:
Prajavani

ಬೆಂಗಳೂರು: ‘ಖಾಸಗಿ ಸ್ವತ್ತುಗಳಲ್ಲಿ ಕಾನೂನು ಬಾಹಿರ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡುವ ಅಧಿಕಾರಿಗಳಿಗೆ ವಿಧಿಸಲಾಗುವ ಶಿಕ್ಷೆ ಏನು ಎಂಬುದರ ಬಗ್ಗೆ ಈತನಕ ಕ್ರಮ ಕೈಗೊಂಡಿಲ್ಲ’ ಎಂದು ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ಅತೃಪ್ತಿ ವ್ಯಕ್ತಪಡಿಸಿದೆ.

‘ಈ ಸಂಬಂಧ ನಿಮ್ಮನ್ನು ಏಕೆ ನ್ಯಾಯಾಂಗ ನಿಂದನೆಗೆ ಒಳಪಡಿಸಬಾರದು’ ಎಂದು ಪ್ರಶ್ನಿಸಿ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದೆ.

ಈ ಕುರಿತಂತೆ ವಕೀಲ ಎಸ್‌.ಉಮಾಪತಿ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್.ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಂ.ನವಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ‘ಇದೇ 17ರೊಳಗೆ ಈ ಕುರಿತಂತೆ ಪ್ರಮಾಣಪತ್ರದ ಮೂಲಕ ವಿವರಣೆ ಸಲ್ಲಿಸಿ’ ಎಂದು ಸರ್ಕಾರಕ್ಕೆ ತಾಕೀತು ಮಾಡಿತು. ಇದೇ 17ಕ್ಕೆ ವಿಚಾರಣೆ ಮುಂದೂಡಲಾಗಿದೆ.

ಏನಿದು ಅರ್ಜಿ?: ‘ಅಕ್ರಮ ಕಟ್ಟಡ ನಿರ್ಮಾಣಕ್ಕೆ ಕಾರಣವಾಗುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಿ ಕರ್ನಾಟಕ ಪೌರಾಡಳಿತ ಕಾಯ್ದೆ (ಕೆಎಂಸಿ) ಕಾಯ್ದೆ-1976ಕ್ಕೆ 2000ನೇ ಇಸ್ವಿಯಲ್ಲಿ ತಿದ್ದುಪಡಿ ತರಲಾಗಿದೆ. ಆದರೆ, ಈತನಕ ಯಾವೊಬ್ಬ ಅಧಿಕಾರಿಗೂ ಶಿಕ್ಷೆಯಾಗಿಲ್ಲ’ ಎಂಬುದು ಅರ್ಜಿದಾರರ ಆಕ್ಷೇಪ.

‘ಶಿಕ್ಷೆ ಯಾವ ರೀತಿ ಇರಬೇಕು ಎಂಬ ಬಗ್ಗೆ ಸರ್ಕಾರ ಮಾರ್ಗಸೂಚಿ ಹೊರಡಿಸಿಲ್ಲ’ ಎಂದು ಅರ್ಜಿದಾರರು ದೂರಿದ್ದಾರೆ.

ಪ್ರತಿಕ್ರಿಯಿಸಿ (+)