ಮಂಗಳವಾರ, ಅಕ್ಟೋಬರ್ 15, 2019
29 °C

ರಾಜ್ಯದಲ್ಲಿ ಬಾಂಗ್ಲಾ ವಲಸಿಗರ ಸಂಖ್ಯೆ ಹೆಚ್ಚಳ ಆರೋಪ: ಕೇಂದ್ರಕ್ಕೆ ನೋಟಿಸ್‌

Published:
Updated:

ಬೆಂಗಳೂರು: ‘ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ನಿರ್ದೇಶಿಸಬೇಕು’ ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ವಕೀಲ ಕೆ.ಬಿ.ವಿಜಯಕುಮಾರ್‌ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ಹಾಗೂ ನ್ಯಾಯಮೂರ್ತಿ ಎಸ್‌.ಆರ್.ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದೆ. ಇದೇ 25ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಲಾಗಿದೆ.

ಅರ್ಜಿಯಲ್ಲೇನಿದೆ?: ‘ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಹೆಚ್ಚಾಗಿದೆ. ಅವರು, ನಕಲಿ ದಾಖಲೆಗಳನ್ನು ಸೃಷ್ಟಿಸಿ ಆ ಮೂಲಕ ಆಧಾರ್, ಮತದಾನದ ಗುರುತಿನ ಚೀಟಿಗಳನ್ನು ಪಡೆಯುತ್ತಿದ್ದಾರೆ. ಅಪರಾಧ ಕೃತ್ಯ, ಮಾದಕ ದ್ರವ್ಯ ಕಳ್ಳಸಾಗಣೆ ಹಾಗೂ ನಕಲಿ ನೋಟು ಚಲಾವಣೆಯಂಥ ದಂಧೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ’ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ಪ್ರಜೆಗಳನ್ನು ಪತ್ತೆ ಹಚ್ಚಿ, ಗಡಿಪಾರು ಮಾಡುವ ನಿಟ್ಟಿನಲ್ಲಿ ತಕ್ಷಣ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶಿಸಬೇಕು’ಎಂಬುದು ಅರ್ಜಿದಾರರ ಕೋರಿಕೆ.

Post Comments (+)