ಶನಿವಾರ, ಜೂನ್ 6, 2020
27 °C

ರೈತರ ಲಾಕ್‌ಡೌನ್ ಸಂಕಷ್ಟ: ಶೀಘ್ರ ಸರ್ಕಾರದ ನಿಲುವು ಪ್ರಕಟ– ಸಿಎಂ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್ 19 ತಡೆಯಲು ಲಾಕ್‌ಡೌನ್ ಘೋಷಿಸಿದ್ದರಿಂದ ರೈತರು ಅನುಭವಿಸುತ್ತಿರುವ ಸಂಕಷ್ಟ ಪರಿಸ್ಥಿತಿಯ ಬಗ್ಗೆ ಅಹವಾಲು ಆಲಿಸಲು ಮತ್ತು ಸರ್ಕಾರದ ಕ್ರಮಗಳನ್ನು ವಿವರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ರೈತ ಮುಖಂಡರೊಂದಿಗೆ ಸಭೆ ನಡೆಸಿದರು.

ಸರ್ಕಾರದ ಇತಿಮಿತಿಯಲ್ಲಿ ರೈತರಿಗೆ ಎಲ್ಲ ರೀತಿಯಲ್ಲೂ ಬೆಂಬಲ ನೀಡಲಾಗುವುದು. ಶೀಘ್ರದಲ್ಲೇ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಲಾಗುವುದು ಎಂದು ತಿಳಿಸಿದರು.

ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ಲಾಕ್‌ಡೌನ್ ಘೋಷಣೆಯಾದ ನಂತರವೂ ಕೃಷಿ ಮತ್ತು ಪೂರಕ ಚಟುವಟಿಕೆಗಳು ಯಾವುದೇ ಅಡಚಣೆ ಇಲ್ಲದೆ ಮುಂದುವರೆಸಲು ಅನುಮತಿ ನೀಡಲಾಗಿದೆ. ಮುಂಗಾರು ಹಂಗಾಮಿನ ಚಟುವಟಿಕೆಗಳು ಅವ್ಯಾಹತವಾಗಿ ನಡೆದಿವೆ. ಕೃಷಿ ಇಲಾಖೆ ಕಚೇರಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ಬಾಡಿಗೆ ಆಧಾರಿತ ಯಂತ್ರೋಪಕರಣಗಳ ಸೇವಾ ಕೇಂದ್ರಗಳು, ಕೃಷಿ ಪರಿಕರ ಮಾರಾಟ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ ಎಂದರು.


ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಬೆಂಗಳೂರಿನಲ್ಲಿ ರೈತ ಮುಖಂಡರ ಸಭೆ ನಡೆಸಿದರು.

ಹಿಂಗಾರು / ಬೇಸಿಗೆ ಹಂಗಾಮಿನ ಬೆಳೆಗಳ ಕಟಾವು ಕಾರ್ಯ ಪ್ರಗತಿಯಲ್ಲಿದ್ದು, ಶೇ.80ರಷ್ಟು ಕಟಾವು ಪೂರ್ಣಗೊಂಡಿದೆ. ಇದಕ್ಕೆ ಬೇರೆ ರಾಜ್ಯಗಳಿಂದ ಕಟಾವು ಯಂತ್ರಗಳನ್ನು ತರಿಸಲು ವ್ಯವಸ್ಥೆ ಮಾಡಲಾಗಿದೆ. ರೈತರ ಸಮಸ್ಯೆಗಳನ್ನು ಬಗೆಹರಿಸಲು ಅಗ್ರಿ ವಾರ್ ರೂಂ ಸ್ಥಾಪಿಸಲಾಗಿದೆ ಎಂದರು. ಈ ಬಗ್ಗೆ ರೈತ ಮುಖಂಡರು ಮೆಚ್ಚುಗೆ ವ್ಯಕ್ತಪಡಿಸಿದರು.

ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಲಭ್ಯವಿದೆ. ರಾಜ್ಯದಲ್ಲಿ ಬೆಳೆಯುವ ಹೂವು ಹಣ್ಣು ತರಕಾರಿಗಳನ್ನು ಇತರ ರಾಜ್ಯಗಳಿಗೆ ಸಾಗಿಸಲು ಅವಕಾಶ ಮಾಡಿಕೊಡಲಾಗಿದೆ. ಹಾಪ್‌ಕಾಮ್ಸ್ ಮೂಲಕ  ಹಣ್ಣು, ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ರೈತ ಉತ್ಪಾದನಾ ಸಂಸ್ಥೆಗಳ ಮೂಲಕ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಅನುವು ಮಾಡಿಕೊಡಲಾಗಿದೆ ಎಂದರು.

ರಾಯಚೂರು, ಕೊಪ್ಪಳ,ಬಳ್ಳಾರಿ ಮೊದಲಾದ ಜಿಲ್ಲೆಗಳಲ್ಲಿ ಇತ್ತೀಚೆಗೆ ಅಕಾಲಿಕ ಮಳೆಯಿಂದ ನಾಶವಾಗಿರುವ ಭತ್ತದ ಬೆಳೆಗೆ ಪರಿಹಾರ ನೀಡಲು ಕ್ರಮ ವಹಿಸಲಾಗಿದೆ. ಕೇಂದ್ರ ಸರ್ಕಾರದ ಪಿಎಂ-ಕಿಸಾನ್ ಯೋಜನೆಯಡಿ ವಿವಿಧ ಕಂತುಗಳಲ್ಲಿ ₹ 50.77 ಲಕ್ಷ ರೈತರಿಗೆ ಒಟ್ಟು ₹3755.16 ಕೋಟಿ ಆರ್ಥಿಕ ನೆರವು ನೀಡಲಾಗಿದೆ.  2020-21ನೇ ಸಾಲಿನಲ್ಲಿ 47.81 ಲಕ್ಷ ರೈತರಿಗೆ ತಲಾ ₹ 2000ದಂತೆ ಒಟ್ಟು ₹ 956.32 ಕೋಟಿ ವರ್ಗಾಯಿಸಲಾಗಿದೆ ಎಂದರು.

ರಾಜ್ಯ ಸರ್ಕಾರದ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಈ ವರೆಗೆ 44.67 ಲಕ್ಷ ರೈತರಿಗೆ ₹893.95 ಕೋಟಿ ಆರ್ಥಿಕ ನೆರವು ಒದಗಿಸಲಾಗಿದೆ. ಮೆಕ್ಕೆಜೋಳ ಖರೀದಿಗೆ ಕೆಎಂಎಫ್‌ಗೆ ಸೂಚಿಸಲಾಗಿದೆ ಎಂದು ವಿವರಿಸಿದರು.

ಸಭೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ, ತೋಟಗಾರಿಕೆ ಸಚಿವ ನಾರಾಯಣಗೌಡ, ಕಂದಾಯ ಸಚಿವ ಆರ್. ಅಶೋಕ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮಾ ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು