ADVERTISEMENT

ಪಟಾಕಿ ಸಿಡಿಸಿ ವಿಜಯೋತ್ಸವ

ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನಕ್ಕೆ ಸರ್ಕಾರದ ಆದೇಶ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2018, 10:05 IST
Last Updated 15 ಮಾರ್ಚ್ 2018, 10:05 IST
ಸರ್ಕಾರ ಆದೇಶ ಹೊರಡಿಸಿದ ಕ್ರಮ ಸ್ವಾಗತಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ವಿಜಯೋತ್ಸವ ಆಚರಿಸಿದರು
ಸರ್ಕಾರ ಆದೇಶ ಹೊರಡಿಸಿದ ಕ್ರಮ ಸ್ವಾಗತಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ವಿಜಯೋತ್ಸವ ಆಚರಿಸಿದರು   

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಕ್ರಮವನ್ನು ಸ್ವಾಗತಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ನಗರದಲ್ಲಿ ಬುಧವಾರ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ವಿಜಯೋತ್ಸವ ಆಚರಿಸಿದರು.

ಪಟಾಕಿ ಸಿಡಿಸಿ ಸಂಭ್ರಮಿಸಿದ ಸದಸ್ಯರು ರಾಜ್ಯ ಸರ್ಕಾರದ ಪರ ಘೋಷಣೆ ಕೂಗಿ, ‘ಹಲವು ವರ್ಷಗಳ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ’ ಎಂದು ಸಂತಸ ವ್ಯಕ್ತಪಡಿಸಿದರು.

‘ಗ್ರಾಮ ಪಂಚಾಯಿತಿ ನೌಕರರಿಗೆ ತಿಂಗಳಿಗೆ ₹ 18 ಸಾವಿರ ಕನಿಷ್ಠ ವೇತನ ನಿಗದಿಪಡಿಸುವಂತೆ ಒತ್ತಾಯಿಸಿ ಹಲವು ಬಾರಿ ಧರಣಿ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೆವು. ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ ಕೆಲ ನೌಕರರಿಗೆ ₹ 12 ಸಾವಿರ ವೇತನ ನೀಡಲು ಆದೇಶಿಸಿದೆ. ಈ ಕ್ರಮ ಸ್ವಾಗತಿಸುತ್ತೇವೆ’ ಎಂದು ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ನಾರಾಯಣಸ್ವಾಮಿ ಹೇಳಿದರು.

ADVERTISEMENT

ಸಚಿವರ ಭರವಸೆ: ‘ನೌಕರರ ವೇತನವನ್ನು ₹ 18 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದೆವು. ಆದರೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಸಚಿವರು ಹಂತ ಹಂತವಾಗಿ ವೇತನ ಹೆಚ್ಚಿಸುವ ಭರವಸೆ ನೀಡಿ ಆದೇಶ ಹೊರಡಿಸಿದ್ದಾರೆ. ಭವಿಷ್ಯದಲ್ಲಿ ನೌಕರರಿಗೆ ಭವಿಷ್ಯ ನಿಧಿ, ಗ್ರಾಚ್ಯುಟಿ ಮತ್ತು ವಿಮಾ ಸವಲತ್ತು ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

ಜಿಲ್ಲೆಯ ಮುಳಬಾಗಿಲು ನಗರದಲ್ಲೂ ಸಂಘದ ಸದಸ್ಯರು ಸಿಹಿ ಹಂಚಿ ಸಂಭ್ರಮಿಸಿದರು. ಜಿಲ್ಲಾ ಘಟಕದ ಸಂಘಟನಾ ಕಾರ್ಯ ದರ್ಶಿ ಬಿ.ಎಲ್.ಕೇಶವರಾಜ್, ಖಜಾಂಚಿ ವೆಂಕಟ ರಾಮೇಗೌಡ, ಶ್ರೀನಿವಾಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.