ADVERTISEMENT

ಅವಧಿ ಮೀರಿದ ದಿನಸಿ ವಿತರಣೆ: ಆರೋಪ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2021, 13:08 IST
Last Updated 20 ಸೆಪ್ಟೆಂಬರ್ 2021, 13:08 IST

ಬೆಳಗಾವಿ: ‘ಅವಧಿ ಮುಗಿದ ಆಹಾರ ಕಿಟ್‌ಗಳನ್ನು ಬಿಜೆಪಿ ಕಾರ್ಯಕರ್ತರು ಅಕ್ರಮವಾಗಿ ಸಾರ್ವಜನಿಕರಿಗೆ ವಿತರಣೆ ಮಾಡುತ್ತಿದ್ದಾರೆ’ ಎಂದು ಆರೋಪಿಸಿರುವ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರದೀಪ ಎಂ.ಜೆ., ‘ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು’ ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಬಗ್ಗೆ ಸೋಮವಾರ ಪ್ರಕಟಣೆ ನೀಡಿರುವ ಅವರು, ‘ಸುಪ್ರೀಂ ಕೋರ್ಟ್‌ ಆದೇಶದಂತೆ ಲಾಕ್‌ಡೌನ್ ಅವಧಿಯಲ್ಲಿ ಕಟ್ಟಡ ಕಾರ್ಮಿಕರಿಗೆ ವಿತರಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 2,500 ದಿನಸಿ ಕಿಟ್‌ಗಳನ್ನು ಕಾರ್ಮಿಕ ಕಲ್ಯಾಣ ಮಂಡಳಿ ಕಳುಹಿಸಿದೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಅಥವಾ ಶಾಸಕರು ವಿತರಿಸಬೇಕಾದ ಕಿಟ್‌ಗಳನ್ನು ನಗರದಲ್ಲಿನ ಬಿಜೆಪಿ ಕಾರ್ಯಕರ್ತರು ವಿತರಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.

‘ಎರಡು ತಿಂಗಳ ಹಿಂದೆ ಬಂದಿರುವ ಕಿಟ್‌ಗಳನ್ನು ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಶಾಸಕರು ಹಂಚಿಕೆ ಮಾಡದೆ ತಮ್ಮ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದರು. ಅವುಗಳನ್ನು ಕಾರ್ಯಕರ್ತರ ಮೂಲಕ ತಮ್ಮ ಬೆಂಬಲಿಗರಿಗೆ ಮಾತ್ರ ಈಗ ಹಂಚಿಕೆ ಮಾಡಿಸುತ್ತಿದ್ದಾರೆ. ಈ ಬಗ್ಗೆ ಸಮಾಜಸೇವಕರು ಪ್ರಶ್ನಿಸಿದಾಗ ಅವರಿಗೆ ಬೆದರಿಕೆ ಹಾಕಿ ಹಲ್ಲೆಗೆ ಮುಂದಾಗಿದ್ದಾರೆ. ಸುಳ್ಳು ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡುತ್ತಿದ್ದಾರೆ’ ಎಂದು ದೂರಿದ್ದಾರೆ.

ADVERTISEMENT

‘ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಸೇವಿಸಿದವರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾದರೆ ಅದಕ್ಕೆ ಜನಪ್ರತಿನಿಧಿಗಳೇ ಹೊಣೆ ಆಗಬೇಕಾಗುತ್ತದೆ’ ಎಂದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆಗೆ ಶಾಸಕ ಅಭಯ ಪಾಟೀಲ ಲಭ್ಯವಾಗಲಿಲ್ಲ.

ಪ್ರಕರಣ ದಾಖಲು:

ದಕ್ಷಿಣ ಮತಕ್ಷೇತ್ರದ ವಡಗಾವಿಯಲ್ಲಿ ಅವಧಿ ಮುಗಿದ ದಿನಸಿ ಕಿಟ್‌ಗಳನ್ನು ಅಕ್ರಮವಾಗಿ ವಿತರಣೆ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತೆ ಸರಳಾ ಸಾತಪುಟೆ ಅವರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸರಳಾ ಅವರು ಶಹಾಪುರ ಠಾಣೆಯಲ್ಲಿ ಐವರ ವಿರುದ್ಧ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.