ADVERTISEMENT

‘ಕೋವಿಡ್ ನೆಗೆಟಿವ್ ವರದಿ ಇಲ್ಲದಿದ್ದರೆ ಪ್ರವೇಶವಿಲ್ಲ’

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2021, 13:57 IST
Last Updated 20 ಸೆಪ್ಟೆಂಬರ್ 2021, 13:57 IST

ಬೆಳಗಾವಿ: ‘ಸರ್ಕಾರದ ಮಾರ್ಗಸೂಚಿ ಪ್ರಕಾರ, ಮಹಾರಾಷ್ಟ್ರದಿಂದ ರಾಜ್ಯದ ಗಡಿ ಪ್ರವೇಶಿಸುವ ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಆದ್ದರಿಂದ ನೆಗೆಟಿವ್ ವರದಿ ಹೊಂದಿದವರಿಗೆ ಮಾತ್ರ ಅವಕಾಶ ನೀಡಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸಿಬ್ಬಂದಿಗೆ ತಾಕೀತು ಮಾಡಿದರು.

ಜಿಲ್ಲೆಯ ಮಂಗಸುಳಿ, ಕೊಗನೊಳ್ಳಿ ಹಾಗೂ ಕಾಗವಾಡ ಚೆಕ್‌ಪೋಸ್ಟ್‌ಗಳಿಗೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

‘ನೆರೆಯ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದರಿಂದ ರಾಜ್ಯದ ಗಡಿಯಲ್ಲಿ ವಿಶೇಷ ಸರ್ವೇಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಮಹಾರಾಷ್ಟ್ರದಿಂದ ಬರುವವರು 72 ಗಂಟೆ ಒಳಗೆ ಪಡೆದಿರುವ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ವರದಿ ನೆಗೆಟಿವ್ ಹೊಂದಿರುವುದು ಕಡ್ಡಾಯವಾಗಿದೆ. ಮಾರ್ಗಸೂಚಿಯಲ್ಲಿ ತಿಳಿಸಿರುವಂತೆ ಬಸ್ ಮೂಲಕ ಬರುವವರನ್ನೂ ಪರಿಶೀಲಿಸಬೇಕು’ ಎಂದು ಸೂಚಿಸಿದರು.

ADVERTISEMENT

‘ಖಾಸಗಿ ವಾಹನಗಳಲ್ಲಿ ಬರುವ ಎಲ್ಲ ವಾಹನಗಳನ್ನು ಗಡಿ ಭಾಗದಲ್ಲೆ ಪರಿಶೀಲಿಸಬೇಕು. ಕೋವಿಡ್ ನೆಗೆಟಿವ್ ವರದಿ ಇಲ್ಲದಿದ್ದರೆ ಪ್ರವೇಶ ಕೊಡಬಾರದು. ವಾಹನಗಳ ಪರಿಶೀಲನೆಗೆ‌ ಸಂಬಂಧಿಸಿದಂತೆ ದಾಖಲೆಗಳನ್ನು ಕೂಡ ನಿರ್ವಹಿಸಬೇಕು’ ಎಂದು ಚೆಕ್‌ ಪೋಸ್ಟ್‌ಗಳಲ್ಲಿ ನಿಯೋಜಿತ ಆರೋಗ್ಯ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗೆ ನಿರ್ದೇಶನ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.