ADVERTISEMENT

ಬೆಳಗಾವಿ: ಸರ್ಕಾರದ ವಿರುದ್ಧ ರೈತರ ಆಕ್ರೋಶ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2021, 12:08 IST
Last Updated 13 ಸೆಪ್ಟೆಂಬರ್ 2021, 12:08 IST

ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಸಂಘಟನೆ ನೇತೃತ್ವದಲ್ಲಿ ಮುಖಂಡರು ಹಾಗೂ ರೈತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಧರಣಿ ನಡೆಸಿದರು.

‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ವಿರೋಧಿ ಕಾನೂನುಗಳನ್ನು ವಾಪಸ್ ಪಡೆಯಬೇಕು. ಸಾರ್ವಜನಿಕರಿಗೆ ಮಾರಕವಾಗಿರುವ ವಿದ್ಯುತ್ ಖಾಸಗೀಕರಣ ಕೈಬಿಡಬೇಕು. ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಮತ್ತು ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯನ್ನು ಬೆಳಗಾವಿಗೆ ಸ್ಥಳಾಂತರಿಸಬೇಕು’ ಎಂದು ಒತ್ತಾಯಿಸಿದರು.

‘2021-22ನೇ ಸಾಲಿನ ಕಬ್ಬು ದರ ನಿಗದಿಪಡಿಸಬೇಕು. ಕಳಸಾ-ಬಂಡೂರಿ, ಮಹದಾಯಿ ಯೋಜನೆ ಅನುಷ್ಠಾನಕ್ಕೆ ಕೂಡಲೇ ಕ್ರಮ ವಹಿಸಬೇಕು. ರೈತರ ಕಂದಾಯ ವ್ಯಾಜ್ಯಗಳಿಗೆ ಪ್ರತ್ಯೇಕ ನ್ಯಾಯಾಲಯ ರಚಿಸಬೇಕು. ರೈತರ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಮೀಟರ್ ಅಳವಡಿಕೆ ಕೈಬಿಡಬೇಕು’ ಎಂದು ಆಗ್ರಹಿಸಿದರು.

ADVERTISEMENT

ಸಂಘಟನೆಯ ಅಧ್ಯಕ್ಷ ಸಿದಗೌಡ ಮೋದಗಿ ಮಾತನಾಡಿ, ‘ಕೋವಿಡ್-19, ನೆರೆ ಹಾವಳಿಯಿಂದ ರೈತರು ತತ್ತರಿಸಿದ್ದಾರೆ. ಹಲವು ಸಂಕಷ್ಟಗಳನ್ನು ಎದುರಿಸುತ್ತಿರುವ ಅವರು ಜೀವನ ನಿರ್ವಹಣೆಗೆ ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರವು ನಮ್ಮ ನೆರವಿಗೆ ಕೂಡಲೇ ಧಾವಿಸಬೇಕು. ಬೆಳೆ ಹಾನಿ ಸಮೀಕ್ಷೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಪರಿಹಾರ ವಿತರಿಸಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಜಿಲ್ಲಾಧಿಕಾರಿ ಕಚೇರಿಗೆ ನೀಡುತ್ತಿರುವ ಮನವಿಗಳನ್ನು ಕಸದ ಡಬ್ಬಿಗೆ ಹಾಕಲಾಗುತ್ತಿದೆ. ರೈತರಿಗೆ ಪರಿಹಾರ ಕಲ್ಪಿಸುವ ಕೆಲಸ ನಡೆಯುತ್ತಿಲ್ಲ. ಹೀಗಾಗಿ, ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದೇವೆ. ವಿಧಾನಮಂಡಲ ಅಧಿವೇಶನದಲ್ಲಿ ನಮ್ಮ ಸಮಸ್ಯೆಗಳ ಬಗ್ಗೆ ಚರ್ಚಿಸಿ ಕ್ರಮ ವಹಿಸಬೇಕು. 2019ರಲ್ಲಿ ಪ್ರವಾಹ ಹಾಗೂ ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ಸರ್ಕಾರವೇ ಘೋಷಿಸಿದಂತೆ ತಲಾ ₹5 ಲಕ್ಷವನ್ನು ಒದಗಿಸಬೇಕು. ಯಶಸ್ವಿನಿ ವಿಮಾ ಯೋಜನೆಯನ್ನು ಮತ್ತೆ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.

‘ಪೆಟ್ರೋಲ್, ಡೀಸೆಲ್‌ ಹಾಗೂ ಅಡುಗೆ ಅನಿಲ ಸಿಲಿಂಡರ್‌ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ಈ ವಿಷಯದಲ್ಲಿ ಸರ್ಕಾರದಿಂದ ಸ್ಪಷ್ಟ ಉತ್ತರವನ್ನು ಬಯಸುತ್ತೇವೆ’ ಎಂದು ಒತ್ತಾಯಿಸಿದರು.

ಕಳಸಾ ಬಂಡೂರಿ ಹೋರಾಟಗಾರ ವಿಜಯ ಕುಲಕರ್ಣಿ ಮಾತನಾಡಿ, ‘ಕಳಸಾ ಬಂಡೂರಿ ಯೋಜನೆ ಅನುಷ್ಠಾನದ ವಿಷಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ. ಅವರು ಕಾಮಗಾರಿ ಪೂರ್ಣಗೊಳಿಸಿದರೆ ನಾಲ್ಕು ಜಿಲ್ಲೆಗಳ ಜನರು ಅಭಿನಂದನೆ ಸಲ್ಲಿಸುತ್ತೇವೆ. ನಿರ್ಲಕ್ಷ್ಯ ವಹಿಸಿದರೆ ಮುಖ್ಯಮಂತ್ರಿ ವಿರುದ್ಧ ಹೋರಾಟಕ್ಕೆ ಸಜ್ಜಾಗಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಶಿವಪ್ಪ ಕರಲಿಂಗಣ್ಣವರ, ಬಿ.ಡಿ. ದನದಮನಿ, ಬಿ.ಜಿ. ತೋಲಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.