ADVERTISEMENT

ಸಚಿವ ಸ್ಥಾನದ ಬೇಡಿಕೆ ಇಟ್ಟಿಲ್ಲ: ಅಭಯ ಪಾಟೀಲ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2021, 11:55 IST
Last Updated 12 ಸೆಪ್ಟೆಂಬರ್ 2021, 11:55 IST
ಅಭಯ ಪಾಟೀಲ
ಅಭಯ ಪಾಟೀಲ   

ಬೆಳಗಾವಿ: ‘ಸಚಿವ ಸ್ಥಾನಕ್ಕಾಗಿ ನಾನು ಬೇಡಿಕೆ ಇಟ್ಟಿಲ್ಲ. ಮುಖ್ಯಸಚೇತಕ ಅಥವಾ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸ್ಥಾನ ಕೊಟ್ಟರೆ ಒಪ್ಪಿಕೊಳ್ಳುವುದಿಲ್ಲ ಎಂದು ಪಕ್ಷದ ವರಿಷ್ಠರಿಗೆ ಹೇಳಿದ್ದೆ. ಈ ವಿಚಾರದಲ್ಲಿ ನನ್ನ ನಿಲುವಿಗೆ ಈಗಲೂ ಬದ್ಧವಾಗಿದ್ದೇನೆ’ ಎಂದು ದಕ್ಷಿಣ ಮತಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ ತಿಳಿಸಿದರು.

ಇಲ್ಲಿ ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ‘ಮಹಾನಗರಪಾಲಿಕೆ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎನ್ನುವ ಬಗ್ಗೆ ಚುನಾವಣೆಗೆ ಅಧಿಸೂಚನೆ ಪ್ರಕಟವಾದ ನಂತರ ಚರ್ಚಿಸುತ್ತೇವೆ’ ಎಂದರು.

‘ಬಿಜೆಪಿಯವರೇ ಮೇಯರ್, ಉಪ ಮೇಯರ್ ಆಗುತ್ತಾರೆ’ ಎಂದು ಹಾಸ್ಯಚಟಾಕಿ ಹಾರಿಸಿದರು.

ADVERTISEMENT

‘ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿದ್ದೆ. ಆಗ, ಮೇಯರ್ ವಿಚಾರ ಪ್ರಸ್ತಾಪಿಸಿಲ್ಲ. ಯಾವ ಸಮುದಾಯಕ್ಕೆ ನೀಡಬೇಕು ಎನ್ನುವ ಬಗ್ಗೆಯೂ ಚರ್ಚೆಯಾಗಿಲ್ಲ. ನಗರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದೇ ನನ್ನ ಗುರಿ’ ಎಂದರು.

‘ಅಭಯ ಪಾಟೀಲ ಅವರಿಗೆ ಸಚಿವ ಸ್ಥಾನ ನೀಡದರುವುದಕ್ಕೆ ನನಗೂ ಅಸಮಾಧಾನವಿದೆ’ ಎಂದು ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಹೇಳಿದರು.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘5 ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಮೂರು ಬಾರಿ ಗೆದ್ದಿದ್ದಾರೆ. ಅವರ ಉಸ್ತುವಾರಿಯಲ್ಲೇ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಿದೆ. ಬೆಳಗಾವಿ ತಾಲ್ಲೂಕಿನಲ್ಲಿ ಯಾರಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಅಭಯ ಅವರಿಗೆ ನೀಡುವುದು ಸೂಕ್ತ. ಈ ವಿಷಯದಲ್ಲಿ ಮುಖ್ಯಮಂತ್ರಿ ಗಮನವನ್ನೂ ಸೆಳೆಯುತ್ತೇನೆ’ ಎಂದರು.

‘ಈ ಹಿಂದಿನ ಸಂಪುಟದಲ್ಲಿ ಮರಾಠಾ ಸಮುದಾಯಕ್ಕೆ ಸಚಿವ ಸ್ಥಾನ ನೀಡಲಾಗಿತ್ತು. ಈಗ ಸ್ಥಾನ ಸಿಕ್ಕಿಲ್ಲ. ನಮ್ಮ ಸಮಾಜಕ್ಕೆ ಆದ್ಯತೆ ಕೊಡಬೇಕು ಎಂದು ಮುಖ್ಯಮಂತ್ರಿಯನ್ನು ಕೋರುತ್ತೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.