ADVERTISEMENT

ಹಲ್ಲೆ: ಮಾಜಿ ಶಾಸಕನ ಮಗನ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 20:16 IST
Last Updated 16 ಸೆಪ್ಟೆಂಬರ್ 2021, 20:16 IST

ಬೆಂಗಳೂರು: ವಸಂತನಗರದ ಎಂಬೆಸ್ಸಿ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ಪಾರ್ಕಿಂಗ್ ವಿಚಾರವಾಗಿ ಗಲಾಟೆ ಆಗಿದ್ದು, ಹಟ್ಟಿ ಗಣಿ ನಿಗಮದ ಅಧ್ಯಕ್ಷರೂ ಆಗಿರುವ ಮಾಜಿ ಶಾಸಕ ಮಾನಪ್ಪ ವಜ್ಜಲ್ ಅವರ ಮಗ ಆಂಜನೇಯ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

‘ಆಂಜನೇಯ ವಜ್ಜಲ್ ಹಾಗೂ ಆತನ ಮೂವರು ಸ್ನೇಹಿತರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ’ ಎಂದು ಆರೋಪಿಸಿ ಉದ್ಯಮಿ ವಿಕ್ರಮ ರೈ ದೂರು ನೀಡಿದ್ದಾರೆ. ಅದರನ್ವಯ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಹಲ್ಲೆಯ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆರೋಪಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಬೇಕಿದೆ’ ಎಂದೂ ತಿಳಿಸಿವೆ.

ADVERTISEMENT

‘ದೂರುದಾರ ವಿಕ್ರಮ್, ಕುಟುಂಬದ ಜೊತೆ ಎಂಬೆಸ್ಸಿ ಅಪಾರ್ಟ್‌ಮೆಂಟ್ ಸಮುಚ್ಚಯದ ಫ್ಲ್ಯಾಟೊಂದರಲ್ಲಿ ವಾಸವಿದ್ದಾರೆ. ಮತ್ತೊಂದು ಫ್ಲ್ಯಾಟ್‌ನಲ್ಲಿ ಆಂಜನೇಯ ಸಹ ನೆಲೆಸಿದ್ದಾರೆ. ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಕಾರು ಪಾರ್ಕಿಂಗ್ ಮಾಡುವ ವಿಚಾರವಾಗಿ ನೆಲ ಮಹಡಿಯಲ್ಲಿ ವಿಕ್ರಮ್ ಹಾಗೂ ಆಂಜನೇಯ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಸಂಗತಿ ದೂರಿನಲ್ಲಿದೆ.’

‘ಪರಿಸ್ಥಿತಿ ವಿಕೋಪಕ್ಕೆ ಹೋಗಿ ಆಂಜನೇಯ ಹಾಗೂ ಅವರ ಸ್ನೇಹಿತರು, ವಿಕ್ರಮ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಗಾಯಗೊಂಡ ವಿಕ್ರಮ್ ಚಿಕಿತ್ಸೆ ಪಡೆದು, ಠಾಣೆಗೆ ದೂರು ನೀಡಿದ್ದಾರೆ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.

ಘಟನೆ ಬಗ್ಗೆ ಪ್ರತಿಕ್ರಿಯೆ ಪಡೆಯಲು ಆಂಜನೇಯ ವಜ್ಜಲ್ ಲಭ್ಯರಾಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.