
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೋವಿಡ್–19 ಎರಡನೇ ಅಲೆ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿ.ಶಿಖಾ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೋವಿಡ್–19 ಎರಡನೇ ಅಲೆ ಕಾಣಿಸಿಕೊಂಡಿದೆ.ಜಿಲ್ಲೆಯಲ್ಲಿ ಜನರು ಮುಖಗವಸು ಧರಿಸದೆ ಓಡಾಡುತ್ತಿರುವುದು ಕಂಡು ಬರುತ್ತಿದೆ. ಮುಖಗವಸು ಧರಿಸದವರಿಗೆ ದಂಡ ವಿಧಿಸಬೇಕು. ಮದುವೆ, ಸಾಮಾಜಿಕ, ಧಾರ್ಮಿಕ ಆಚರಣೆಗಳಲ್ಲಿ ಸರ್ಕಾರದ ಮಾರ್ಗಸೂಚಿ ಕಡ್ಡಾಯವಾಗಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕು. ಮುಖಗವಸು, ಅಂತರ ಪಾಲನೆಗೆ ಒತ್ತು ನೀಡಬೇಕು ಎಂದು ಹೇಳಿದರು.
ಕೋವಿಡ್–19 ದೃಢಪಟ್ಟವರ ಸಂಪರ್ಕದಲ್ಲಿದ್ದವರನ್ನು ಪತ್ತೆ ಮಾಡಬೇಕು. ಅವರ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ಮಾಡಿಸಬೇಕು.45 ವರ್ಷ ತುಂಬಿದವರಿಗೆ ಲಸಿಕೆ ಹಾಕಬೇಕು. ಜನರಿಗೆ ಎರಡನೇ ಅಲೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.
ಉಪವಿಭಾಗಾಧಿಕಾರಿ ಡಾ.ಎಚ್.ಎಲ್.ನಾಗರಾಜ್ ಮಾತನಾಡಿ, ಜಿಲ್ಲೆಯಲ್ಲಿ 50 ಗ್ರಾಮಗಳನ್ನು ಪೋಡಿ ಮುಕ್ತ ಗ್ರಾಮವನ್ನಾಗಿಸುವ ಗುರಿ ಹೊಂದಲಾಗಿದೆ. ಈ ಪೈಕಿ 35 ಗ್ರಾಮಗಳಲ್ಲಿ ಪೋಡಿ ಮುಗಿದಿದೆ ಎಂದರು.
‘ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಮೂಡಿಗೆರೆ ತಾಲ್ಲೂಕಿನ ಕಳಸದಲ್ಲಿ ₹ 2.6 ಕೋಟಿ ಕಾಮಗಾರಿ ಪೂರ್ಣಗೊಂಡಿದೆ. ತರೀಕೆರೆ ತಾಲ್ಲೂಕಿನ ಕರಕುಚ್ಚಿ ಹಾಗೂ ಸುತ್ತಲಿನ ಗ್ರಾಮಗಳಿಗೆ ₹5.15 ಕೋಟಿ, ಬೇಲೇನಹಳ್ಳಿ ಸುತ್ತಲಿನ ಇಪ್ಪತ್ತು ಗ್ರಾಮಗಳ ಕುಡಿಯುವ ನೀರಿಗೆ ₹130 ಕೋಟಿ ಬಿಡುಗಡೆಯಾಗಿದೆ’ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಂಜಿನಿಯರ್ ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ 524 ನ್ಯಾಯ ಬೆಲೆ ಅಂಗಡಿಗಳಿವೆ. ಈ ಪೈಕಿ 508 ನ್ಯಾಯಬೆಲೆ ಅಂಗಡಿಗಳಲ್ಲಿ ಪಿಒಎಸ್ ಮೂಲಕ ಪಡಿತರ ವಿತರಿಸಲಾಗುತ್ತಿದೆ. ಶೃಂಗೇರಿ, ಕೊಪ್ಪ, ಚಿಕ್ಕಮಗಳೂರಿನ 16 ನ್ಯಾಯ ಬೆಲೆ ಅಂಗಡಿಗಳಲ್ಲಿ ಇಂಟರ್‌ನೆಟ್ ಸಮಸ್ಯೆ ಇದೆ. ಫಲಾನುಭವಿಗಳ ಸಹಿ ಪಡೆದು ಅವರಿಗೆ ಪಡಿತರ ವಿತರಿಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರು ಹೇಳಿದರು.
ಜಿಲ್ಲಾಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್.ಪೂವಿತಾ, ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್‌ಎಂ.ಹಾಕೆ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್.ರೂಪಾ, ತರೀಕೆರೆ ಉಪವಿಭಾಗಾಧಿಕಾರಿ ರೇಣುಕಾಪ್ರಸಾದ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.