ADVERTISEMENT

ಕೃಷಿ ತಿದ್ದುಪಡಿ ಕಾಯ್ದೆ ರದ್ದುಗೊಳಿಸಲು ಒತ್ತಾಯ

ರಾಜ್ಯರೈತ ಸಂಘ–ಹಸಿರುಸೇನೆ ಐಕ್ಯ ಹೋರಾಟ ಸಮಿತಿಯಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2021, 3:23 IST
Last Updated 27 ಮಾರ್ಚ್ 2021, 3:23 IST
ಚಿಕ್ಕಮಗಳೂರಿನಲ್ಲಿ ರಾಜ್ಯರೈತ ಸಂಘ–ಹಸಿರುಸೇನೆ ಐಕ್ಯ ಹೋರಾಟ ಸಮಿತಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಚಿಕ್ಕಮಗಳೂರಿನಲ್ಲಿ ರಾಜ್ಯರೈತ ಸಂಘ–ಹಸಿರುಸೇನೆ ಐಕ್ಯ ಹೋರಾಟ ಸಮಿತಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.   

ಚಿಕ್ಕಮಗಳೂರು: ಕೃಷಿ ತಿದ್ದುಪಡಿ ಕಾಯ್ದೆ ರದ್ದುಗೊಳಿಸಬೇಕು. ಕನಿಷ್ಠ ಬೆಂಬಲ ಬೆಲೆಗೆ ಕಾನೂನಾತ್ಮಕ ರಕ್ಷಣೆ ನೀಡಬೇಕು ಎಂದು ರಾಜ್ಯರೈತ ಸಂಘ–ಹಸಿರುಸೇನೆ ಐಕ್ಯ ಹೋರಾಟ ಸಮಿತಿ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ರೈತ ಸಂಘ–ಹಸಿರುಸೇನೆ, ದಲಿತ ಸಂಘರ್ಷ ಸಮಿತಿ, ಜನಶಕ್ತಿ ಸಂಘದ ಕಾರ್ಯಕರ್ತರು ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಜಮಾಯಿಸಿದರು. ಹನುಮಂತಪ್ಪ ವೃತ್ತ, ಎಂ.ಜಿ.ರಸ್ತೆ ಮಾರ್ಗವಾಗಿ ಆಜಾದ್‌ ಪಾರ್ಕ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಎಪಿಎಂಸಿ, ಕೃಷಿ, ವಿದ್ಯುತ್ ತಿದ್ದುಪಡಿ ಕಾಯ್ದೆಗಳ ಪ್ರತಿಗಳನ್ನು ದಹಿಸಿದರು. ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

‘ಬಂಡವಾಳಶಾಹಿ ಕಂಪೆನಿಗಳಿಗೆ ಅನುಕೂಲವಾಗುವಂತೆ ಕೃಷಿ, ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿಗೊಳಿಸಲಾಗಿದೆ. ಒಪ್ಪಂದ ಆಧಾರಿತ ಕೃಷಿಯಲ್ಲಿ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರೆಯುವುದಿಲ್ಲ. ರೈತರಿಗೆ ಅನ್ಯಾಯವಾಗುತ್ತದೆ. ಎಪಿಎಂಸಿ ವ್ಯವಸ್ಥೆಯನ್ನು ದುರ್ಬಲಗೊಳಿಸಲು, ರೈತರನ್ನು ಗುಲಾಮಗಿರಿಗೆ ತಳ್ಳಲು ಕೇಂದ್ರ ಸರ್ಕಾರ ಹುನ್ನಾರ ನಡೆಸುತ್ತಿದೆ’ಎಂದು ಪ್ರತಿಭಟನಕಾರರು ದೂರಿದರು.

ADVERTISEMENT

ರಾಜ್ಯ ರೈತ ಸಂಘ–ಹಸಿರುಸೇನೆ ಜಿಲ್ಲಾಘಟಕದ ಅಧ್ಯಕ್ಷ ಡಿ.ಆರ್.ದುಗ್ಗಪ್ಪಗೌಡ ಮಾತನಾಡಿ, ಕೃಷಿ ತಿದ್ದುಪಡಿ ಕಾಯ್ದೆ ರದ್ದುಗೊಳಿಸಬೇಕು. ಕನಿಷ್ಠ ಬೆಂಬಲ ಬೆಲೆಗೆ ಕಾನೂನಾತ್ಮಕ ರಕ್ಷಣೆ ನೀಡುವಂತೆ ದೆಹಲಿಯ ಮೂರು ಗಡಿಗಳಲ್ಲಿ ರೈತರು ಮೂರು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ರೈತರ ಪ್ರತಿಭಟನೆಯನ್ನು ಕಡೆಗಣಿಸಿದೆ. ಶಿವಮೊಗ್ಗ, ಹಾವೇರಿಯಲ್ಲಿ ಆಯೋಜಿಸಿದ್ದ ಜನಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರೈತ ಮುಖಂಡ ರಾಕೇಶ್‌ ಟಿಕಾಯತ್ ವಿರುದ್ಧ ಪೊಲೀಸರು ‍ಪ್ರಕರಣ ದಾಖಲಿಸಿದ್ದಾರೆ. ರಾಜ್ಯ ಸರ್ಕಾರ ರೈತರ ಹೋರಾಟ ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ರಾಜ್ಯ ರೈತ ಸಂಘದ ಮುಖಂಡ ಕೆ.ಕೆ.ಕೃಷ್ಣೇಗೌಡ ಮಾತನಾಡಿ, 'ಪೆಟ್ರೊಲ್, ಡಿಸೇಲ್, ಬೇಳೆಕಾಳು, ಅಡುಗೆ ಎಣ್ಣೆ ಸಹಿತ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ಬೇಸಿಗೆಯಾಗಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಕೂಲಿ ಕೆಲಸವೂ ದೊರೆಯುತ್ತಿಲ್ಲ. ಬಡಜನರು ಬದುಕು ಸಾಗಿಸುವುದೇ ಕಷ್ಟಕರವಾಗಿದೆ. ಕೇಂದ್ರ ಸರ್ಕಾರ ಬಡಜನರ ಜೀವನ ಸುಧಾರಣೆಗೆ ಪೂರಕವಾಗಿ ಕಾಯ್ದೆಗಳಿಗೆ ತಿದ್ದುಪಡಿ ತರುತ್ತಿಲ್ಲ. ದೇಶದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ' ಎಂದು ದೂಷಿಸಿದರು.

ರಾಜ್ಯ ರೈತ ಸಂಘ ಜಿಲ್ಲಾಘಟಕದ ಅಧ್ಯಕ್ಷ ಎಂ.ಸಿ.ಬಸವರಾಜ್, ಜನಶಕ್ತಿ ಸಂಘದ ಅಧ್ಯಕ್ಷ ಗೌಸ್‌ಮೊಹಿಯುದ್ದೀನ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಮರ್ಲೆ ಅಣ್ಣಯ್ಯ, ಮುಖಂಡರಾದ ನಿರಂಜನ್‌ಮೂರ್ತಿ, ಪ್ರಸನ್ನಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.