ADVERTISEMENT

ದ್ವಿತೀಯ ಪಿಯು ಭೌತಿಕ ತರಗತಿಗೆ ಅನುಮತಿ;ತರಗತಿ ನಡೆಸಲು ಡಿಸಿ ಸೂಚನೆ

ಸೆ.1ರಿಂದ ಕೋವಿಡ್ ಮಾರ್ಗಸೂಚಿ ಪಾಲಿಸಿ ತರಗತಿ ನಡೆಸಲು ಡಿಸಿ ಸೂಚನೆ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2021, 17:03 IST
Last Updated 28 ಆಗಸ್ಟ್ 2021, 17:03 IST
   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 1ರಿಂದ ದ್ವಿತೀಯ ಪಿಯುಸಿ ಭೌತಿಕ ತರಗತಿಗಳನ್ನು ಪ್ರಾರಂಭಿಸಲು ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ 2ಕ್ಕಿಂತ ಹೆಚ್ಚಿರುವ ಕಾರಣ, ಕಾಲೇಜುಗಳು ಕಟ್ಟುನಿಟ್ಟಿನ ಮಾರ್ಗಸೂಚಿ ಅನುಸರಿಸುವಂತೆ ಅವರು ಆದೇಶದಲ್ಲಿ ಸೂಚಿಸಿದ್ದಾರೆ.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪೂರ್ವಾನುಮತಿಯೊಂದಿಗೆ ಪ್ರಥಮ ಪಿಯುಸಿ ಹಾಗೂ ಕಾಲೇಜು ಜಂಟಿ ನಿರ್ದೇಶಕ ಪೂರ್ವಾನುಮತಿ ಪಡೆದು ಪದವಿ ಹಾಗೂ ಸ್ನಾತಕೋತ್ತರ ಭೌತಿಕ ತರಗತಿಗಳನ್ನು ಸೆಪ್ಟೆಂಬರ್ 15ರ ನಂತರ ಆರಂಭಿಸಬಹುದು ಎಂದು ಅವರು ಆದೇಶಿಸಿದ್ದಾರೆ.

ಕಾಲೇಜುಗಳಿಗೆ ವಿಧಿಸಿರುವ ನಿಯಮಗಳೇನು?: ಕೋವಿಡ್ ನಿಯಮಗಳ ಅನುಷ್ಠಾನದ ಜವಾಬ್ದಾರಿಯನ್ನು ಆಯಾ ಕಾಲೇಜಿನ ಪ್ರಾಚಾರ್ಯರು ವಹಿಸಿಕೊಳ್ಳಬೇಕು. ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ಏಳು ದಿನಗಳ ಕ್ವಾರಂಟೈನ್ ಕಡ್ಡಾಯ. ಸೋಂಕು ತಗುಲಿದ ವಿದ್ಯಾರ್ಥಿಗಳಿಗೆ ಆರೈಕೆ ಮಾಡಲು ಕಾಲೇಜುಗಳಲ್ಲೇ ವಸತಿ ಸಹಿತ ಪ್ರತ್ಯೇಕ ಕೋವಿಡ್ ಆರೈಕೆ ಕೇಂದ್ರಗಳನ್ನು ಕಡ್ಡಾಯವಾಗಿ ತೆರೆಯಬೇಕು. ಏಳು ದಿನಗಳ ಕ್ವಾರಂಟೈನ್ ಮುಗಿಸಿದ ವಿದ್ಯಾರ್ಥಿಗಳು ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ಪ್ರಮಾಣ ಪತ್ರದೊಂದಿಗೆ ತರಗತಿಗೆ ಹಾಜರಾಗಬಹುದು. ಕ್ವಾರಂಟೈನ್‌ನಲ್ಲಿರುವ ವಿದ್ಯಾರ್ಥಿಗಳು ಕೋವಿಡ್ ಆರೈಕೆ ಕೇಂದ್ರದಲ್ಲಿದ್ದು, ಆನ್‌ಲೈನ್ ತರಗತಿಯಲ್ಲಿ ಭಾಗವಹಿಸಬಹುದು.

ADVERTISEMENT

ಜಿಲ್ಲಾಡಳಿತ ಸೂಚಿಸಿರುವ ಕೋವಿಡ್ ಮಾರ್ಗಸೂಚಿ ಪಾಲನೆಯಾಗುತ್ತಿರುವ ಬಗ್ಗೆ ಪರಿಶೀಲಿಸಲು ಡಿಡಿಪಿಯು, ತಾಲ್ಲೂಕು ಆರೋಗ್ಯಾಧಿಕಾರಿ, ಆಯಾ ಕಾಲೇಜಿನ ಪ್ರಾಂಶುಪಾಲರನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ.

ವೈದ್ಯಕೀಯ, ಅರೆ ವೈದ್ಯಕೀಯ, ನರ್ಸಿಂಗ್ ಕಾಲೇಜಿಗೆ ಸಂಬಂಧಿಸಿ ಈಗಾಗಲೇ ನೀಡಿದ ನಿರ್ದೇಶನದಂತೆ ಪ್ರತ್ಯೇಕ ಕೋವಿಡ್ ಆರೈಕೆ ಕೇಂದ್ರ ತೆರೆದು ಒಂದು ವಾರದ ಕ್ವಾರಂಟೈನ್ ಹಾಗೂ ಸೋಂಕಿತ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲು ಕ್ರಮ ವಹಿಸಬೇಕು. ಏಳು ದಿನಗಳ ನಂತರ ಮತ್ತೊಮ್ಮೆ ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಿ ನೆಗೆಟಿವ್ ವರದಿ ಬಂದಲ್ಲಿ ಮಾತ್ರ ಭೌತಿಕ ತರಗತಿ ನಡೆಸಲು ಕ್ರಮ ಜರುಗಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

‘ನೆಗೆಟಿವ್ ಪ್ರಮಾಣಪತ್ರ ಕಡ್ಡಾಯ’

ವಿದ್ಯಾರ್ಥಿಗಳ ಜೀವನದಲ್ಲಿ ಪದವಿಪೂರ್ವ ಶಿಕ್ಷಣ ಅತ್ಯಂತ ಪ್ರಮುಖ ಘಟ್ಟವಾಗಿದೆ. ನೀಟ್, ಜೆ.ಇ.ಇ., ಸಿ.ಇ.ಟಿ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೂಡ ಪಿಯುಸಿ ಅಂಕಗಳು ಮುಖ್ಯವಾಗಿರುತ್ತವೆ. ಕೋವಿಡ್ ಕಾರಣಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ಪಠ್ಯಕ್ರಮಗಳನ್ನು ಪೂರ್ಣ ಪ್ರಮಾಣದಲ್ಲಿ ಅಧ್ಯಯನ ಮಾಡಲು ಕಳೆದ ಬಾರಿ ಸಾಧ್ಯವಾಗಿಲ್ಲದ ಕಾರಣ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗದಂತೆ ಕ್ರಮಕೈಗೊಳ್ಳುವುದು ಅಗತ್ಯವಾಗಿದೆ ಎಂದುಜಿಲ್ಲಾಧಿಕಾರಿ ಡಾ. ರಾಜೇಂದ್ರ ತಿಳಿಸಿದ್ದಾರೆ.

ಎಲ್ಲ ಭೋದಕ ಮತ್ತು ಭೋದಕೇತರ ಸಿಬ್ಬಂದಿ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿ, ನೆಗೆಟಿವ್ ಪ್ರಮಾಣ ಪತ್ರದೊಂದಿಗೆ ಶಿಕ್ಷಣ ಸಂಸ್ಥೆಗೆ ಹಾಜರಾಗಬೇಕು. ವಸತಿ ನಿಲಯದಲ್ಲಿರುವ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರತ್ಯೇಕ ತರಗತಿಗಳನ್ನು ನಡೆಸಬೇಕು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.