ADVERTISEMENT

ತಗ್ಗಿದ ಕೋವಿಡ್ ಪ್ರಕರಣ: ದೇಗುಲಗಳಿಗೆ ವಿಧಿಸಿದ್ದ ನಿರ್ಬಂಧ ತೆರವು

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2021, 4:29 IST
Last Updated 19 ಸೆಪ್ಟೆಂಬರ್ 2021, 4:29 IST
ಕುಕ್ಕೆ ಸುಬ್ರಹ್ಮಣ್ಯಕ್ಕೆ ಶನಿವಾರ ಭಕ್ತರು ಭೇಟಿ ನೀಡಿ, ದೇವರ ದರ್ಶನ ಪಡೆದರು.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಶನಿವಾರ ಭಕ್ತರು ಭೇಟಿ ನೀಡಿ, ದೇವರ ದರ್ಶನ ಪಡೆದರು.   

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಕಡಿಮೆಯಾಗುತ್ತಿರುವ ಕಾರಣ ಪ್ರಮುಖ ದೇವಾಲಯಗಳಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ. ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಹಾಗೂ ಸೇವೆಗಳನ್ನು ನಡೆಸಲು ಜಿಲ್ಲಾಡಳಿತ ಅನುಮತಿ ನೀಡಿದೆ.

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಮತ್ತಿತರ ದೇವಾಲಯಗಳಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆಯಾ ದೇವಾಲಯದ ಆಡಳಿತ ಮಂಡಳಿ ಇದಕ್ಕೆ ಹೊಣೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಶನಿವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಆಡಳಿತ ಮಂಡಳಿ, ಅರ್ಚಕರು, ಸಿಬ್ಬಂದಿ ಪ್ರತಿ 15 ದಿನಗಳಿಗೊಮ್ಮೆ ಕೋವಿಡ್ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿ, ನೆಗೆಟಿವ್ ವರದಿಯನ್ನು ಹೊಂದಿರಬೇಕು. ದೇವಾಲಯಗಳಿಗೆ ಸೇವೆಗೆ ಬರುವ ಭಕ್ತರು ಎರಡು ಡೋಸ್ ಕೋವಿಡ್ ತಡೆ ಲಸಿಕೆ ಪಡೆದಿದ್ದರೂ ಸಹ ಕಡ್ಡಾಯವಾಗಿ 72 ಗಂಟೆಗಳಿಗಿಂತ ಮುಂಚಿತವಾಗಿ ಪರೀಕ್ಷೆ ಮಾಡಿಸಿಕೊಂಡಿರುವ ಕೋವಿಡ್ ನೆಗೆಟಿವ್ ವರದಿ ಹೊಂದಿರಬೇಕು. ಇದು ಇದ್ದಲ್ಲಿ ಮಾತ್ರ ಸೇವೆಗೆ ಅವಕಾಶ ನೀಡಬೇಕು ಎಂದು ಆದೇಶದಲ್ಲಿ ಸೂಚಿಸಿದ್ದಾರೆ.

ADVERTISEMENT

ದೇವಾಲಯಗಳಿಗೆ ಬರುವ ಭಕ್ತರಿಗೆ ಕೋವಿಡ್ ತಡೆ ಲಸಿಕೆಯನ್ನು ಪಡೆಯುವ ಬಗ್ಗೆ ಸಲಹೆ ನೀಡುವ ಕುರಿತು ಹಾಗೂ ಜಾಗೃತಿಯನ್ನು ಮೂಡಿಸುವ ಸಲುವಾಗಿ ಅಲ್ಲಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು. ದೇವಾಲಯಕ್ಕೆ ಬರುವ ಸಾರ್ವಜನಿಕರು ಕೋವಿಡ್ ಲಸಿಕೆ ಪಡೆಯದಿದ್ದಲ್ಲಿ, ಅಂತಹವರಿಗೆ ಲಸಿಕೆ ನೀಡಲು ಅನುಕೂಲವಾಗುವಂತೆ ಸಂಬಂಧಪಟ್ಟ ತಾಲ್ಲೂಕು ಆರೋಗ್ಯಾಧಿಕಾರಿಯೊಂದಿಗೆ ಸಮನ್ವಯ ಸಾಧಿಸಿ ದೇವಾಲಯಗಳಲ್ಲಿ ಕೋವಿಡ್ ಲಸಿಕಾ ಕೇಂದ್ರಗಳನ್ನು ತೆರೆಯಲು ಹಾಗೂ ಜನಸಂದಣಿಯಾಗದಂತೆ ಲಸಿಕೆ ನೀಡಲು ಕ್ರಮವಹಿಸಬೇಕು ಎಂದು ಸಲಹೆ ಮಾಡಿದ್ದಾರೆ.

ಮದ್ಯದಂಗಡಿ: ಮೇಲಿನ ನಿರ್ಬಂಧ ತೆರವು

ಕೇರಳದ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ತಾಲ್ಲೂಕು 5 ಕಿ.ಮೀ ವ್ಯಾಪ್ತಿಯಲ್ಲಿರುವ 19 ಗ್ರಾಮಗಳ ಮದ್ಯದಂಗಡಿಗಳಿಗೆ ಸೆ.21ರಿಂದ ಮುಂದಿನ ಆದೇಶದವರೆಗೆ ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರಗೆ ಕೆಲವು ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಿ ವ್ಯವಹಾರ ನಡೆಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅವರು ಆದೇಶ
ಹೊರಡಿಸಿದ್ದಾರೆ.

ಮದ್ಯ ಮಾರಾಟ ಮಳಿಗೆಯ ನೌಕರರು ಹಾಗೂ ಮದ್ಯ ಖರೀದಿಗೆ ಬರುವ ಗ್ರಾಹಕರುಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸ್ಥಳದಲ್ಲಿ ಸ್ಯಾನಿಟೈಸರ್ ಇಟ್ಟು, ಗ್ರಾಹಕರು ಅದನ್ನು ಬಳಸುವಂತೆ ಸೂಚನಾ ಫಲಕ ಅಳವಡಿಸಬೇಕು.
ಕೇರಳ ರಾಜ್ಯದ ಗಡಿಭಾಗಗಳಿಂದ ಆರ್‌ಟಿಪಿಸಿಆರ್ ವರದಿಯಿಲ್ಲದೆ, ಸಕಾರಣವಿಲ್ಲದೆ, ಅಕ್ರಮವಾಗಿ ಕೇರಳ ರಾಜ್ಯದ ವಾಸಿಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸಿ, ಮದ್ಯ ಮಾರಾಟ ಮಳಿಗೆಗಳಲ್ಲಿ ಮದ್ಯ ಸೇವಿಸುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಆದೇಶದಲ್ಲಿ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.