ADVERTISEMENT

ಎಸ್ಸೆಸ್ಸೆಲ್ಸಿ, ಪಿಯು ಪರೀಕ್ಷೆ ರದ್ದತಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 4 ಜೂನ್ 2021, 3:34 IST
Last Updated 4 ಜೂನ್ 2021, 3:34 IST
ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ಸಂಘಟನೆ ಮುಖಂಡರು ಪರೀಕ್ಷೆ ರದ್ದತಿಗೆ ಒತ್ತಾಯಿಸಿದರು
ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ಸಂಘಟನೆ ಮುಖಂಡರು ಪರೀಕ್ಷೆ ರದ್ದತಿಗೆ ಒತ್ತಾಯಿಸಿದರು   

ಕಲಬುರ್ಗಿ: ಸಿಬಿಎಸ್‌ಇ ಮಾದರಿಯಲ್ಲೇ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯು ಪರೀಕ್ಷೆಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಓ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ಆನ್‌ಲೈನ್ ಚಳವಳಿ ನಡೆಸಿದರು.

‘ಕೋವಿಡ್ ಎರಡನೇ ಅಲೆಯ ತೀವ್ರತೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಿಬಿಎಸ್‌ಇ ಹತ್ತನೇ ಮತ್ತು ಹನ್ನೆರಡನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿದೆ. ನಮ್ಮ ರಾಜ್ಯ ಸರ್ಕಾರ ಇನ್ನೂ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳನ್ನು ಸದ್ಯಕ್ಕೆ ಮುಂದೂಡಿದ್ದು, ಇನ್ನೂ ಪರೀಕ್ಷೆ ಕುರಿತು ನಿರ್ದಿಷ್ಟ ನಿರ್ಧಾರ ಕೈಗೊಂಡಿಲ್ಲ. ಪರೀಕ್ಷೆಗಳ ಸಿಬಿಎಸ್‌ಇ ಮಾದರಿಯಲ್ಲಿಯೇ ರಾಜ್ಯ ಸರ್ಕಾರ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದುಗೊಳಿಸಬೇಕು’ ಎಂದು ವಿದ್ಯಾರ್ಥಿನಿ ಶ್ರೇಯಾ ತಿಳಿಸಿದರು.

‘ಪರೀಕ್ಷೆಯ ಬಗೆಗಿನ ಗೊಂದಲ ವಿದ್ಯಾರ್ಥಿಗಳ ಮನಸ್ಸಿನ ಮೇಲೆ ಒತ್ತಡ ಹೇರುತ್ತದೆ. ಜೊತೆಗೆ, ಕೋವಿಡ್ ಸಾಂಕ್ರಾಮಿಕ ಇದೀಗ ಗ್ರಾಮಗಳಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಸಾವಿನ ಸಂಖ್ಯೆ ಸಹ ಹೆಚ್ಚುತ್ತಲೇ ಇದೆ. ಮುಂದಿನ ದಿನಗಳಲ್ಲಿ ಸರ್ಕಾರ ಪರೀಕ್ಷೆ ನಡೆಸಲು ನಿರ್ಧರಿಸಿದರೂ ಕೆಲವು ದಿನಗಳು ತರಗತಿ ನಡೆಸಿಯೇ ಪರೀಕ್ಷೆ ನಡೆಸಬೇಕು. ಆದರೆ ಮುಂದೆ ಮೂರನೇ ಅಲೆಯ ಅಪಾಯವನ್ನು ಗಮನದಲ್ಲಿ ಇಟ್ಟುಕೊಂಡು, ತರಗತಿ ಅಥವಾ ಪರೀಕ್ಷೆ ನಡೆಸುವುದು ಕಷ್ಟಸಾಧ್ಯ. ಅನುಭವಿ ಶಿಕ್ಷಕರು ಹಾಗೂ ಶಿಕ್ಷಣ ತಜ್ಞರ ಸಲಹೆ ಮೇರೆಗೆ ಒಂದು ವೈಜ್ಞಾನಿಕ ಮೌಲ್ಯಮಾಪನ ಪದ್ಧತಿ ರಚಿಸಿ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಸಂಘಟನೆಯ ಜಿಲ್ಲಾ ಅಧ್ಯಕ್ಷ ಹಣಮಂತ ಎಚ್‌.ಎಸ್‌, ಕಾರ್ಯದರ್ಶಿ ಈರಣ್ಣ ಇಸಬಾ, ಉಪಾಧ್ಯಕ್ಷೆ ಸ್ನೇಹಾ ಕಟ್ಟಿಮನಿ ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.