ADVERTISEMENT

ಮಡಿಕೇರಿ: ಡಿಸಿಸಿ ಬ್ಯಾಂಕ್‌ ಶತಮಾನೋತ್ಸವ ಕಾರ್ಯಕ್ರಮ

ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ, ವಿವಿಧ ಗಣ್ಯರು ಭಾಗಿ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2021, 14:51 IST
Last Updated 18 ಆಗಸ್ಟ್ 2021, 14:51 IST
ಮಡಿಕೇರಿಯಲ್ಲಿ ಬುಧವಾರ ಡಿ.ಸಿ.ಸಿ ಬ್ಯಾಂಕ್‌ ಅಧ್ಯಕ್ಷ ಕೊಡಂದೇರ ಪಿ. ಗಣಪತಿ ಅವರು ಮಾತನಾಡಿದರು
ಮಡಿಕೇರಿಯಲ್ಲಿ ಬುಧವಾರ ಡಿ.ಸಿ.ಸಿ ಬ್ಯಾಂಕ್‌ ಅಧ್ಯಕ್ಷ ಕೊಡಂದೇರ ಪಿ. ಗಣಪತಿ ಅವರು ಮಾತನಾಡಿದರು   

ಮಡಿಕೇರಿ: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ಗೆ 100 ವರ್ಷ ತುಂಬಿದ್ದು, ಬ್ಯಾಂಕ್‍ನ ಶತಮಾನೋತ್ಸವ ಕಾರ್ಯಕ್ರಮ ಆ.20ರಂದು ನಗರದ ಕ್ರಿಸ್ಟಲ್ ಕೋರ್ಟ್‍ನಲ್ಲಿ ಆಯೋಜಿಸಲಾಗಿದೆ ಎಂದು ಬ್ಯಾಂಕ್‍ನ ಅಧ್ಯಕ್ಷ ಕೊಡಂದೇರ ಪಿ. ಗಣಪತಿ ತಿಳಿಸಿದರು.

ಅಂದು ಬೆಳಿಗ್ಗೆ 10ಕ್ಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಶತಮಾನೋತ್ಸವ ಅಂಗವಾಗಿ ಸುಮಾರು ₹7 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಶತಮಾನೋತ್ಸವದ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಭಾಗವಹಿಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.

ಸಭಾ ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದು, ಸಂಸದ ಪ್ರತಾಪ್ ಸಿಂಹ 21 ವಿವಿಧ ಬರಹಗಾರರ 200 ಪುಟಗಳನ್ನೊಳಗೊಂಡ ‘ಸಹಕಾರ ಸಿರಿ’ ಸ್ಮರಣ ಸಂಚಿಕೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮೊಬೈಲ್ ಬ್ಯಾಂಕಿಂಗ್ ವಾಹನವನ್ನು ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ADVERTISEMENT

ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಹಿರಿಯ ಸಹಕಾರಿ ಎಂ.ಸಿ.ನಾಣಯ್ಯ, ರಾಜ್ಯ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಮತ್ತು ಶಾಸಕ ಬೆಳ್ಳಿಪ್ರಕಾಶ್, ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ರವಿ ಕುಶಾಲಪ್ಪ, ಕರ್ನಾಟಕ ಸಹಕಾರ ಸಂಘಗಳ ನಿಬಂಧಕ ಎಸ್.ಜಿಯಾಹುಲ್ಲಾ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ರಾಜ್ಯ ಅಪೆಕ್ಸ್ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಎನ್.ದೇವರಾಜ್, ಸಹಕಾರ ಸಂಘಗಳ ಹೆಚ್ಚುವರಿ ನಿಬಂಧಕ ಎ.ಸಿ. ದಿವಾಕರ್, ಮೈಸೂರು ಪ್ರಾಂತದ ಜಂಟಿ ನಿಬಂಧಕ ಪ್ರಕಾಶ್ ರಾವ್ ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭ ಬ್ಯಾಂಕಿನ ಶತಮಾನೋತ್ಸವ ಅಂಗವಾಗಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಕಂಪ್ಯೂಟರ್‌ಗಳನ್ನು ಕೊಡುಗೆಯಾಗಿ ನೀಡಲಾಗುತ್ತಿದ್ದು, ಬ್ಯಾಂಕಿನ ಎಲ್ಲಾ ಸದಸ್ಯ ಸಹಕಾರ ಸಂಘಗಳಿಗೆ ನೆನಪಿನ ಕಾಣಿಕೆಯನ್ನು ನೀಡಲಾಗುತ್ತ್ತಿದೆ ಎಂದು ಮಾಹಿತಿ ನೀಡಿದರು.

ಶತಮಾನೋತ್ಸವದ ಸಮಾರಂಭದಲ್ಲಿ ಸರ್ಕಾರದ ಸೂಚನೆಯನ್ವಯ ಕೋವಿಡ್ ನಿಯಮಗಳನ್ನು ಪಾಲಿಸಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸರ್ವರಿಗೂ ಮಾಸ್ಕ್ ನೀಡಲಾಗುತ್ತಿದೆ. ದೇಹ ತಾಪಮಾನ ಪರೀಕ್ಷೆಯೊಂದಿಗೆ ಸ್ಯಾನಿಟೈಸರ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದರು.

ಬ್ಯಾಂಕಿನ ಉಪಾಧ್ಯಕ್ಷ ಕೆಟೋಳೀರ ಹರೀಶ್ ಪೂವಯ್ಯ, ನಿರ್ದೇಶಕರಾದ ಬಿ.ಕೆ.ಚಿಣ್ಣಪ್ಪ, ಪಟ್ರಪಂಡ ಬಿ. ರಘುನಾಣಯ್ಯ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಕೆ.ಸಲೀಂ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.