ADVERTISEMENT

‘ಭ್ರಷ್ಟಾಚಾರದಲ್ಲಿ ಮುಳುಗಿದ ಬಿಜೆಪಿ’

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2023, 5:52 IST
Last Updated 21 ಮಾರ್ಚ್ 2023, 5:52 IST
ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಬಸ್ ನಿಲ್ದಾಣದ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಮಾತನಾಡಿದರು
ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಬಸ್ ನಿಲ್ದಾಣದ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಮಾತನಾಡಿದರು   

ಬಂಗಾರಪೇಟೆ: ‘ಬಿಜೆಪಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ಪ್ರತಿ ಕೆಲಸಕ್ಕೂ 40 ಪರ್ಸೆಂಟ್ ಲಂಚ ಕೊಡುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಆರೋಪಿಸಿದರು.

ತಾಲ್ಲೂಕಿನ ಕಾಮಸಮುದ್ರ ಬಸ್ ನಿಲ್ದಾಣದ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದರು.

ಭ್ರಷ್ಟ ಬಿಜೆಪಿ ಸರ್ಕಾರವನ್ನು 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನರು ತಿರಸ್ಕರಿಸಲಿದ್ದಾರೆ. ಕಾಂಗ್ರೆಸ್ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದರು.

ADVERTISEMENT

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಬಡವರ, ರೈತರ, ಕಾರ್ಮಿಕರ ಅಲ್ಪಸಂಖ್ಯಾತರ ವಿರೋಧ ಧೋರಣೆ ಅನುಸರಿಸುತ್ತಿವೆ. ಜಿಎಸ್‌ಟಿ ಎಂಬ ಅವೈಜ್ಞಾನಿಕ ತೆರಿಗೆ ನೀತಿ ಜಾರಿಗೆ ತಂದು ರಾಜ್ಯದ ಜನರನ್ನು ಲೂಟಿ ಮಾಡುತ್ತಿದೆ. ಕೃಷಿ ಪರಿಕರಗಳು, ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ ಎಂದು ದೂರಿದರು.

ನರೇಂದ್ರ ಮೋದಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ವಿದೇಶದಲ್ಲಿರುವ ಕಪ್ಪು ಹಣವನ್ನು ತಂದು ದೇಶದ ಪ್ರತಿಯೊಬ್ಬರ ಖಾತೆಗೆ ₹ 15 ಲಕ್ಷ ಹಾಕುವುದಾಗಿ ತಿಳಿಸಿದ್ದರು. ಅದೆಲ್ಲಾ ಹುಸಿಯಾಗಿದೆ ಎಂದರು.

ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರೂ ಬಡವರ, ರೈತರ ಬಗ್ಗೆ ಕಾಳಜಿವಹಿಸಲಿಲ್ಲ. 2018ರ ವಿಧಾನಸಭಾ ಚುನಾವಣೆಯಲ್ಲಿ ರೈತರ, ಮಹಿಳಾ ಸಂಘಗಳ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. 60 ವರ್ಷ ಮೇಲ್ಪಟ್ಟವರಿಗೆ ₹ 5 ಸಾವಿರ ಪಿಂಚಣಿ ನೀಡುವುದಾಗಿ ತಿಳಿಸಿದ್ದರು. ಆದ್ಯಾವುದೂ ಜಾರಿ ಮಾಡಿಲ್ಲ ಏಕೆ ಎಂದು ಪ್ರಶ್ನಿಸಿದರು.

ಪ್ರಚಾರ ಸಮಿತಿ ಅಧ್ಯಕ್ಷ ರಘುನಾಥ್ ಮಾತನಾಡಿ, ಶಾಸಕರು ಒಕ್ಕಲಿಗರ ವಿರೋಧಿ ಎಂದು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಬಿಂಬಿಸುತ್ತಿವೆ. ಆದರೆ, ಒಕ್ಕಲಿಗರು ಈ ಬಾರಿ ಕಾಂಗ್ರೆಸ್ ಪರ ಇದ್ದಾರೆ ಎಂದರು.

ತೊಪ್ಪನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮೀನಾರಾಯಣ, ಮುಖಂಡ ಆದಿನಾರಾಯಣ ಕುಟ್ಟಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಗೋವಿಂದ ರಾಜು, ಮುಖಂಡರಾದ ಗೋಪಾಲ ರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜು, ಮಹದೇವಪ್ಪ, ಲಕ್ಷ್ಮೀ ನಾ ರಾಯಣ ಪ್ರಸಾದ್, ಮೇಸ್ತ್ರಿ ಸೀನಪ್ಪ, ರಂಗನಾಥನಾಯ್ಡು, ಚಂದ್ರಪ್ಪ, ಕುಪೇಂದ್ರ, ಸಂಪಂಗಿ ಗೌಡ, ರಾಮೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.