ADVERTISEMENT

ಬೃಹತ್ ಲಸಿಕಾ ಅಭಿಯಾನ ನಾಳೆ

ಜಿಲ್ಲೆಯಲ್ಲಿ 1.25ಲಕ್ಷ ಲಸಿಕೆ ಹಾಕುವ ಗುರಿ– ಡಾ. ಬಗಾದಿ ಗೌತಮ್

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 6:39 IST
Last Updated 16 ಸೆಪ್ಟೆಂಬರ್ 2021, 6:39 IST
ಬೃಹತ್ ಲಸಿಕಾ ಅಭಿಯಾನದ ಪ್ರಯುಕ್ತ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿದರು
ಬೃಹತ್ ಲಸಿಕಾ ಅಭಿಯಾನದ ಪ್ರಯುಕ್ತ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿದರು   

ಮೈಸೂರು: ಸೆ. 17ರಂದು ನಡೆಯಲಿರುವ ಬೃಹತ್ ಕೋವಿಡ್ ಲಸಿಕಾ ಅಭಿಯಾನದಲ್ಲಿ ಜಿಲ್ಲೆಯಲ್ಲಿ ₹ 1.25 ಲಕ್ಷ ಕೋವಿಡ್‌ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.

ಹಿಂದೆ ನಡೆದ ಲಸಿಕಾ ಅಭಿಯಾನಗಳಲ್ಲಿ ಜಿಲ್ಲೆಯಲ್ಲಿ ಒಂದೇ ದಿನ ಗರಿಷ್ಠ 60 ಸಾವಿರದವರೆಗೆ ಲಸಿಕೆ ಹಾಕಲಾಗಿದೆ. ಈಗಿನ ಗುರಿ 1.25 ಲಕ್ಷವಾಗಿದ್ದು, ಗುರಿ ಮುಟ್ಟಲೇಬೇಕು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಬುಧವಾರ ತಾಲ್ಲೂಕುಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೊ ಸಂವಾದದಲ್ಲಿ ಸೂಚನೆ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಜಿಲ್ಲೆಯಲ್ಲಿ ಸುಮಾರು 600 ಲಸಿಕಾ ಕೇಂದ್ರಗಳನ್ನು ಗುರುತಿಸಿದ್ದಾರೆ. ಇಷ್ಟು ಕೇಂದ್ರಗಳಲ್ಲೂ ಲಸಿಕೆ ನೀಡಬೇಕು. ಇದಕ್ಕಾಗಿ ತಹಶೀಲ್ದಾರ್, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕು ವೈದ್ಯಾಧಿಕಾರಿ ಮತ್ತಿತರ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಲಸಿಕಾ ಕೇಂದ್ರಗಳಿಗೆ ತೆರಳಿ ಪರಿಶೀಲಿಸಬೇಕು ಎಂದರು.

ADVERTISEMENT

ಚುನಾವಣಾ ಕೆಲಸದ ಮಾದರಿಯಲ್ಲಿಯೇ ಅಧಿಕಾರಿಗಳು ಈ ಅಭಿಯಾನವನ್ನು ಪರಿಗಣಿಸಿ, ಚುರುಕಾಗಿ, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಅಧಿಕಾರಿಗಳು ಸೇರಿದಂತೆ ಇತರೆ ಆರೋಗ್ಯ ಸಿಬ್ಬಂದಿ ಕಳೆದ ಬಾರಿಗಿಂತ ಹೆಚ್ಚಿನ ಶ್ರಮ ಹಾಕಿ ಕೆಲಸ ಮಾಡಬೇಕು.ಜಿಲ್ಲೆಯಲ್ಲಿ ಈಗ ಕೋವಿಡ್ ಪರಿಸ್ಥಿತಿ ನಿಯಂತ್ರಣದಲ್ಲಿರುವುದರ ಶ್ರೇಯಸ್ಸು ಕ್ಷೇತ್ರಮಟ್ಟದಲ್ಲಿ ಕೆಲಸ ನಿರ್ವಹಿಸಿದ ಎಲ್ಲಾ ಅಧಿಕಾರಿಗಳಿಗೆ ಸಲ್ಲುತ್ತದೆ ಎಂದು ಶ್ಲಾಘಿಸಿದರು.

ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ.ಎಂ.ಯೋಗೀಶ್, ಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥಸ್ವಾಮಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಚ್.ಪ್ರಸಾದ್, ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಮಹದೇವ ಪ್ರಸಾದ್, ಆರ್‌ಸಿಹೆಚ್ ಅಧಿಕಾರಿ ಡಾ.ಜಯಂತ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವಪ್ರಸಾದ್, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಪಿ.ನಂಜರಾಜ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಷಾದ್ ರೆಹಮಾನ್ ಶರೀಫ್, ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.