ADVERTISEMENT

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿದ ಅರ್ಜಿ: 12ಕ್ಕೆ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 2 ಜನವರಿ 2023, 23:05 IST
Last Updated 2 ಜನವರಿ 2023, 23:05 IST
   

ಬೆಂಗಳೂರು: ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್‌.ವಸ್ತ್ರದ ಅವರನ್ನು ಶ್ರೀ ಜಗದ್ಗುರು ಮುರುಘರಾಜೇಂದ್ರ (ಎಸ್‌ಜೆಎಂ) ಬೃಹನ್ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಇದೇ 12ಕ್ಕೆ ಮುಂದೂಡಿದೆ.

ಈ ಸಂಬಂಧ ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ, ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್‌.ಪಾಟೀಲ್‌, ರಿಟ್‌ ಅರ್ಜಿ ತಿದ್ದುಪಡಿಗೆ ಮನವಿ ಮಾಡಿದರು. ಸರ್ಕಾರದ ಪರ ವಕೀಲರು, ಅಡ್ವೊಕೇಟ್‌ ಜನರಲ್‌ ಹಾಜರಿಲ್ಲದ ಕಾರಣ ಸಮಯ ಕೋರಿದರು. ಪ್ರತಿವಾದಿ ಆಡಳಿತಾಧಿಕಾರಿ ಪಿ.ಎಸ್‌.ವಸ್ತ್ರದ ಪರ ಎಚ್‌.ಸುನಿಲ್‌ ಕುಮಾರ್ ವಕಾಲತ್ತು ಸಲ್ಲಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆ ಮುಂದೂಡಿತು. ಪಿ.ಎಸ್.ವಸ್ತ್ರದ ಅವರನ್ನು 2022ರ ಡಿಸೆಂಬರ್ 13ರಂದು ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ಸರ್ಕಾರ ನೇಮಕ ಮಾಡಿತ್ತು. ಅವರು 2022ರ ಡಿಸೆಂಬರ್ 15ರಂದು ಅಧಿಕಾರ ಸ್ವೀಕರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.