ADVERTISEMENT

ಭಾರಿ ಮಳೆ; ವೈಷ್ಣೋ ದೇವಿ ಯಾತ್ರೆ ತಾತ್ಕಾಲಿಕ ಸ್ಥಗಿತ

ಪಿಟಿಐ
Published 20 ಆಗಸ್ಟ್ 2022, 1:29 IST
Last Updated 20 ಆಗಸ್ಟ್ 2022, 1:29 IST
ಪ್ರಸಿದ್ಧ ಮಾತಾ ವೈಷ್ಣೋ ದೇವಿ ದೇಗುಲ
ಪ್ರಸಿದ್ಧ ಮಾತಾ ವೈಷ್ಣೋ ದೇವಿ ದೇಗುಲ   

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ತ್ರಿಕೂಟ ಬೆಟ್ಟಗಳ ತಪ್ಪಲಲ್ಲಿರುವ ಪ್ರಸಿದ್ಧ ಮಾತಾ ವೈಷ್ಣೋ ದೇವಿ ದೇಗುಲ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಇದರಿಂದಾಗಿ ವೈಷ್ಣೋದೇವಿ ದೇಗುಲ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಯಾವುದೇ ಸಾವು-ನೋವು ಅಥವಾ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಮಾತಾ ವೈಷ್ಣೋ ದೇವಿ ದೇಗುಲ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನ್ಶುಲ್ ಗಾರ್ಗ್ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಹಲವಾರು ವಿಡಿಯೊಗಳಲ್ಲಿ ವೈಷ್ಣೋ ದೇವಿ ದೇಗುಲಕ್ಕೆ ಹೋಗುವ ಹಾದಿಯಲ್ಲಿ ಪ್ರವಾಹದಂತಹ ಸ್ಥಿತಿ ನಿರ್ಮಾಣವಾಗಿದೆ.

ಕಾತ್ರಾದಲ್ಲಿರುವ ಬೇಸ್ ಕ್ಯಾಂಪ್ ಪ್ರದೇಶದಲ್ಲಿ ಶುಕ್ರವಾರ ಸಂಜೆಯಿಂದಲೇ ಹಲವಾರು ಗಂಟೆಗಳ ಕಾಲ ನಿರಂತರವಾಗಿ ಮಳೆ ಸುರಿದಿದೆ. ಇದರಿಂದಾಗಿ ಸಾವಿರಾರು ಭಕ್ತರಿಗೆ ತೊಂದರೆ ಉಂಟಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಕ್ತರ ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗಿದ್ದು, ಪೊಲೀಸ್ ಹಾಗೂ ಸಿಆರ್‌ಪಿಎಫ್ ಸಿಬ್ಬಂದಿ ನಿಯೋಜಿಸಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಲಾಗುತ್ತಿದೆ ಎಂದು ವೈಷ್ಣೋ ದೇವಿ ದೇಗುಲ ಮಂಡಳಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.