ADVERTISEMENT

15 ದಿನ ರಜೆ ಇಲ್ಲ: ಅಧಿಕಾರಿಗಳಿಗೆ ಸಿಎಂ ಸೂಚನೆ

​ಪ್ರಜಾವಾಣಿ ವಾರ್ತೆ
Published 21 ಮೇ 2022, 17:54 IST
Last Updated 21 ಮೇ 2022, 17:54 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ‘ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸುವುದು ಮತ್ತು ಸಂತ್ರಸ್ತರಿಗೆ ತುರ್ತಾಗಿ ಪರಿಹಾರ ಒದಗಿಸುವ ಉದ್ದೇಶದಿಂದ ಎಲ್ಲ ಹಂತದ ಅಧಿಕಾರಿಗಳು ಮುಂದಿನ 15 ದಿನ ರಜೆ ಪಡೆಯದೇ ಕೆಲಸ ಮಾಡಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದರು.

ಮಳೆಹಾನಿ ಕುರಿತು ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಜತೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಶನಿವಾರ ಸಭೆ ನಡೆಸಿದ ಅವರು, ‘ಮಳೆಯಿಂದ ಆಗಿರುವ ಪ್ರಾಣ ಹಾನಿ, ಆಸ್ತಿ ಹಾನಿ, ಬೆಳೆ ಹಾನಿ, ಮನೆ ಕುಸಿತ ಕುರಿತು ತ್ವರಿತವಾಗಿ ಪರಿಶೀಲನೆ ನಡೆಸಿ, ವರದಿ ಸಲ್ಲಿಸಬೇಕು’ ಎಂದು ನಿರ್ದೇಶನ ನೀಡಿದರು.

ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು. ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಛಾಯಾಗ್ರಾಹಕರ ಜತೆ ಮನೆ ಕುಸಿದಿರುವ ಸ್ಥಳಕ್ಕೆ ಭೇಟಿ ನೀಡಿ, ಫೋಟೊ ಸಹಿತ ವರದಿ ಮಾಡಬೇಕು. ಪೂರ್ಣ ಹಾನಿಯಾಗಿರುವ ಮನೆಗಳಿಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ಮಾರ್ಗಸೂಚಿ ಪ್ರಕಾರ ತಕ್ಷಣ ಪರಿಹಾರವೇ ಬಿಡುಗಡೆ ಮಾಡಬೇಕು ಎಂದು ಸೂಚಿಸಿದರು.

ADVERTISEMENT

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿಗಳು ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಮೂರು ದಿನಗಳೊಳಗೆ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಬೇಕು. ಬಳಿಕ ಮುಖ್ಯ ಕಾರ್ಯದರ್ಶಿಯವರಿಗೆ ಕಡ್ಡಾಯವಾಗಿ ವರದಿ ಸಲ್ಲಿಸಬೇಕು. ಜಿಲ್ಲಾಧಿಕಾರಿಗಳ ವೈಯಕ್ತಿಕ (ಪಿ.ಡಿ) ಖಾತೆಯಲ್ಲಿ ₹ 728.85 ಕೋಟಿ ಲಭ್ಯವಿದ್ದು, ಸಂತ್ರಸ್ತರಿಗೆ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸಲು ಬಳಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ತಾಕೀತು ಮಾಡಿದರು.

ಮುನ್ನೆಚ್ಚರಿಕೆಗೆ ಸೂಚನೆ: ಅಣೆಕಟ್ಟೆಗಳಿಂದ ಹೆಚ್ಚುವರಿ ನೀರನ್ನು ಹೊರ ಬಿಡುವ ಮುನ್ನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅಣೆಕಟ್ಟೆಯ ಕೆಳಭಾಗದ ಪ್ರದೇಶಗಳಲ್ಲಿ ದ್ವೀಪಗಳಾಗುವ ಗ್ರಾಮಗಳ ಜನರಿಗೆ ಸರಿಯಾಗಿ ಮಾಹಿತಿ ನೀಡಬೇಕು ಎಂದು ನಿರ್ದೇಶನ ನೀಡಿದರು.

ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಭೂಕುಸಿತ ಸಂಭವಿಸಬಹುದಾದ ಪ್ರದೇಶಗಳನ್ನು ಗುರುತಿಸಿ ಅಲ್ಲಿನ ಜನರನ್ನು ಸ್ಥಳಾಂತರಿಸುವ ಮೂಲಕ ಸಾವು, ನೋವು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಪ್ರವಾಹ, ಭೂಕುಸಿತ ಉಂಟಾದ ಸ್ಥಳಗಳಲ್ಲಿ ಪರಿಹಾರ ಕಾರ್ಯಾಚರಣೆಗೆ ರಾಜ್ಯ ವಿಪತ್ತು ನಿರ್ವಹಣಾ ತಂಡದ ಎರಡು ಹೆಚ್ಚುವರಿ ತಂಡ ರಚಿಸಬೇಕು. ಮಳೆಹಾನಿ, ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಎಲ್ಲ ಇಲಾಖೆಗಳೂ ಸಮನ್ವಯದಿಂದ ಕೆಲಸ ಮಾಡಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.