ADVERTISEMENT

ಟೆಂಡರ್‌ ಪ್ರಕ್ರಿಯೆ ಸ್ಥಗಿತಕ್ಕೆ ಕಾಂಗ್ರೆಸ್‌ ಆಗ್ರಹ: ಚುನಾವಣಾ ಆಯೋಗಕ್ಕೆ ಪತ್ರ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2023, 19:30 IST
Last Updated 31 ಮಾರ್ಚ್ 2023, 19:30 IST
   

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಕೇಂದ್ರ ಸರ್ಕಾರದ ಅನುದಾನದಲ್ಲಿ ರಾಜ್ಯದಲ್ಲಿ ಕೈಗೆತ್ತಿಕೊಳ್ಳಲಿರುವ ₹ 20,000 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳ ಟೆಂಡರ್‌ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೇಂದ್ರ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳ ಮೂಲಕ ಆಯೋಗಕ್ಕೆ ಶುಕ್ರವಾರ ಪತ್ರ ಬರೆದಿರುವ ಅವರು, ‘ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಕಾಮಗಾರಿಗಳಲ್ಲಿ ಶೇಕಡ 40ರಷ್ಟು ಲಂಚ ಪಡೆಯುತ್ತಿರುವ ಆರೋಪವಿದೆ. ಚುನಾವಣೆ ಸಮಯದಲ್ಲಿ ₹ 20,000 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳ ಟೆಂಡರ್‌ ಅಂತಿಮಗೊಳಿಸಿ, ಅದರಿಂದ ಲಂಚ ಪಡೆದು ಚುನಾವಣೆಯಲ್ಲಿ ವೆಚ್ಚ ಮಾಡಲು ಪ್ರಯತ್ನಿಸಲಾಗುತ್ತಿದೆ. ಲೋಕೋಪಯೋಗಿ, ಜಲ ಸಂಪನ್ಮೂಲ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ರೈಲ್ವೆ ಸೇರಿದಂತೆ ಪ್ರಮುಖ ಇಲಾಖೆಗಳ ಟೆಂಡರ್‌ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸುವಂತೆ ನಿರ್ದೇಶನ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.

ಶಿರಾಡಿ ಘಾಟಿ ಹೆದ್ದಾರಿ ಕಾಮಗಾರಿ, ಹಲವು ರೈಲ್ವೆ ಮಾರ್ಗಗಳ ಕಾಮಗಾರಿಗಳು, ಹೆದ್ದಾರಿ ಕಾಮಗಾರಿಗಳು, ವಸತಿ ಯೋಜನೆಗಳು ಸೇರಿದಂತೆ ಬೃಹತ್‌ ಮೊತ್ತದ ಕಾಮಗಾರಿಗಳ ಟೆಂಡರ್‌ ಪ್ರಕ್ರಿಯೆ ನಡೆಸದಂತೆ ನಿರ್ದೇಶನ ನೀಡಬೇಕು. ಟೆಂಡರ್‌ ಪ್ರಕ್ರಿಯೆ ಅಂತಿಮಗೊಳಿಸಿ ಕಮಿಷನ್‌ ಪಡೆದು ಅದನ್ನು ಚುನಾವಣೆಯಲ್ಲಿ ಬಳಕೆ ಮಾಡದಂತೆ ತಡೆಯಬೇಕು ಎಂದು ಮನವಿ ಮಾಡಿದ್ದಾರೆ.

ADVERTISEMENT

‘ಕಾಮಗಾರಿಗಳಲ್ಲಿ ಶೇ 40ರಷ್ಟು ಲಂಚ ಪಡೆಯಲಾಗುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದರು. ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷರೂ ಆಗಿದ್ದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರನ್ನು ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಅವರ ಮನೆ ಹಾಗೂ ಕಚೇರಿಗಳಲ್ಲಿ ₹ 8 ಕೋಟಿಗೂ ಹೆಚ್ಚು ನಗದು ಪತ್ತೆಯಾಗಿದೆ. ಈ ಎಲ್ಲವನ್ನೂ ಪರಿಗಣಿಸಿ ಟೆಂಡರ್‌ ಪ್ರಕ್ರಿಯೆ ನಡೆಸದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.

ಚುನಾವಣೆ ಸಮೀಪಿಸಿದಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೃಹತ್‌ ಮೊತ್ತದ ಕಾಮಗಾರಿಗಳಿಗೆ ಟೆಂಡರ್‌ ಪ್ರಕ್ರಿಯೆ ಆರಂಭಿಸಿವೆ. ಅವುಗಳನ್ನು ಚುನಾವಣಾ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಳ್ಳುವ ಅನುಮಾನವಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಲು ಅವಕಾಶ ಕಲ್ಪಿಸುವುದಕ್ಕಾಗಿ ಟೆಂಡರ್ ಪ್ರಕ್ರಿಯೆಯನ್ನು ತಡೆ ಹಿಡಿಯಬೇಕು ಎಂದು ಕೋರಿದ್ದಾರೆ.

ಅಧಿಕಾರಿಗಳ ವರ್ಗಾವಣೆಗೆ ಒತ್ತಾಯ

ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಉಪ ಮುಖ್ಯ ಚುನಾವಣಾಧಿಕಾರಿ ಹಾಗೂ ಜಂಟಿ ಮುಖ್ಯ ಚುನಾವಣಾಧಿಕಾರಿ ಹುದ್ದೆಗಳಲ್ಲಿ ಐದು ವರ್ಷಗಳಿಗಿಂತ ಹೆಚ್ಚು ಕಾಲದಿಂದ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನು ತಕ್ಷಣವೇ ವರ್ಗಾವಣೆ ಮಾಡುವಂತೆ ಕೇಂದ್ರ ಚುನಾವಣಾ ಆಯೋಗವನ್ನು ಕಾಂಗ್ರೆಸ್‌ ಒತ್ತಾಯಿಸಿದೆ.

ಆಯೋಗಕ್ಕೆ ಪತ್ರ ಬರೆದಿರುವ ಡಿ.ಕೆ. ಶಿವಕುಮಾರ್‌ ಮತ್ತು ಸಿದ್ದರಾಮಯ್ಯ, ‘ದೀರ್ಘ ಕಾಲದಿಂದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಕೆಲವು ಅಧಿಕಾರಿಗಳು ಆಡಳಿತಾರೂಢ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಜತೆ ನಿಕಟ ನಂಟು ಹೊಂದಿದ್ದಾರೆ. ಅವರು ಇತರ ಪಕ್ಷಗಳ ಮೇಲೆ ಹೊಂದಿರುವ ಪೂರ್ವಗ್ರಹವು ಚುನಾವಣಾ ಪ್ರಕ್ರಿಯೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ಅವರನ್ನು ಮುಖ್ಯ ಚುನಾವಣಾಧಿಕಾರಿಯವರ ಕಚೇರಿಯಿಂದ ವರ್ಗಾವಣೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

ಪತ್ರದಲ್ಲಿ ಕೆಲವು ಅಧಿಕಾರಿಗಳ ಹೆಸರುಗಳನ್ನೂ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.