ADVERTISEMENT

ಬೆಲೆ ಏರಿಕೆ: ಸೈಕಲ್ ಏರಿದ ‘ಕೈ’ ಪಡೆ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2021, 20:19 IST
Last Updated 20 ಸೆಪ್ಟೆಂಬರ್ 2021, 20:19 IST
ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸೋಮವಾರ ಬೆಂಗಳೂರಿನಲ್ಲಿ ಕಾಂಗ್ರೆಸ್ ನಡೆಸಿದ ಸೈಕಲ್ ಜಾಥಾದಲ್ಲಿ ಶಾಸಕರಾದ ಎನ್.ಎ. ಹ್ಯಾರಿಸ್‌, ನಾರಾಯಣ ಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕ ಯು.ಬಿ. ವೆಂಕಟೇಶ್‌ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪಾಲ್ಗೊಂಡಿದ್ದರು – ಪ್ರಜಾವಾಣಿ ಚಿತ್ರ
ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸೋಮವಾರ ಬೆಂಗಳೂರಿನಲ್ಲಿ ಕಾಂಗ್ರೆಸ್ ನಡೆಸಿದ ಸೈಕಲ್ ಜಾಥಾದಲ್ಲಿ ಶಾಸಕರಾದ ಎನ್.ಎ. ಹ್ಯಾರಿಸ್‌, ನಾರಾಯಣ ಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕ ಯು.ಬಿ. ವೆಂಕಟೇಶ್‌ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪಾಲ್ಗೊಂಡಿದ್ದರು – ಪ್ರಜಾವಾಣಿ ಚಿತ್ರ   

ಬೆಂಗಳೂರು: ತೈಲ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ವಾರದ ಹಿಂದೆ ಎತ್ತಿನ ಗಾಡಿಯಲ್ಲಿ ವಿಧಾನಸೌಧಕ್ಕೆ ಹೋಗಿದ್ದ ಕಾಂಗ್ರೆಸ್‌ ನಾಯಕರು, ಸೋಮವಾರ ಸೈಕಲ್‌ ಏರಿ ಹೋದರು. ಆ ಮೂಲಕ, ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಮತ್ತೆ ಬಿಸಿ ಮುಟ್ಟಿಸಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ನೇತೃತ್ವದಲ್ಲಿ ಶಾಸಕರು, ಮುಖಂಡರು ಕೆಪಿಸಿಸಿ ಕಚೇರಿಯಿಂದ ವಿಧಾನಸೌಧವರೆಗೆ ಸೈಕಲ್‌ ಜಾಥಾ ನಡೆಸಿದರು.

ಜಾಥಾದಲ್ಲಿ ಸೈಕಲ್ ತುಳಿದ ಕಾರ್ಯಕರ್ತರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ‘ಜನಪರ ಕಾಳಜಿ ಇಲ್ಲದ ಸರ್ಕಾರ ಇದು’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ, ‘ಅಗತ್ಯ ವಸ್ತುಗಳು ಹಾಗೂ ಅಡುಗೆ ಅನಿಲ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಟಪಡುತ್ತಿದ್ದಾರೆ. ಅಡುಗೆ ಅನಿಲ ಮೇಲಿನ ಸಹಾಯಧನವನ್ನೂ ರದ್ದುಪಡಿಸಲಾಗಿದೆ. ಕೇಂದ್ರ ಸರ್ಕಾರ ಯಾವುದೇ ತೆರಿಗೆಯನ್ನೂ ಕಡಿಮೆ ಮಾಡುತ್ತಿಲ್ಲ’ ಎಂದು ಕಿಡಿಕಾರಿದರು.

ಡಿ.ಕೆ.ಶಿವಕುಮಾರ್ ಮಾತನಾಡಿ, ‘ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ‘ಪಿಕ್ ಪಾಕೆಟ್’ ಸರ್ಕಾರ. ಬಡಜನರ ಜೇಬಿಗೆ ಕತ್ತರಿ ಹಾಕುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗುತ್ತಿದೆ. ಅಷ್ಟಾದರೂ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗುತ್ತಿಲ್ಲ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರುತ್ತಿದೆ. ಈ ಬಗ್ಗೆ ಸರ್ಕಾರಕ್ಕೆ ಕಾಳಜಿಯೇ ಇಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಕೋವಿಡ್ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಇವೆಲ್ಲವನ್ನು ಜನರಿಗೆ ಮುಟ್ಟಿಸುವ ಉದ್ದೇಶದಿಂದ ಸದನದ ಒಳಗೆ ಹಾಗೂ ಹೊರಗೆ ಪ್ರತಿಭಟನೆ ಮಾಡಲಿದ್ದೇವೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.