ADVERTISEMENT

ಮೂರು ಮನೆ ಆಗಲಿದೆ ಕಾಂಗ್ರೆಸ್‌: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2021, 19:31 IST
Last Updated 15 ಅಕ್ಟೋಬರ್ 2021, 19:31 IST
ಬಿ.ವೈ.ವಿಜಯೇಂದ್ರ
ಬಿ.ವೈ.ವಿಜಯೇಂದ್ರ   

ಚಿತ್ರದುರ್ಗ: ಕಾಂಗ್ರೆಸ್‌ ಮುಗಿಸಲು ಇತರ ಪಕ್ಷಗಳು ಬೇಕಿಲ್ಲ. ಆ ಪಕ್ಷದ ಆಂತರಿಕ ಬೇಗುದಿ ನಿರ್ಣಾಯಕ ಹಂತ ತಲುಪಿದೆ. ಕಾಂಗ್ರೆಸ್‌ ಶೀಘ್ರವೇ ಒಡೆದು ಮೂರು ಮನೆ ಆಗಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಇಲ್ಲಿಯ ಮುರುಘಾಮಠದಲ್ಲಿ ನಡೆಯುತ್ತಿರುವ ಶರಣ ಸಂಸ್ಕೃತಿ ಉತ್ಸವದಲ್ಲಿ ಗುರುವಾರ ಭಾಗಿಯಾಗಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

‘ಕಾಂಗ್ರೆಸ್‌ ಕೆಲವು ರಾಜ್ಯಗಳಲ್ಲಿ ಮಾತ್ರ ಅವಶೇಷಗಳ ಮಾದರಿಯಲ್ಲಿ ಉಳಿದುಕೊಂಡಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ತಿರುಕನ ಕನಸು ಕಾಣುತ್ತಿದೆ. ಏಷ್ಟೇ ಅಬ್ಬರಿಸಿದರೂ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ’ ಎಂದು ಹೇಳಿದರು.

ADVERTISEMENT

‘ಗುತ್ತಿಗೆದಾರರ ಮೇಲೆ ನಡೆದ ದಾಳಿಗೂ ಬಿ.ಎಸ್‌.ಯಡಿಯೂರಪ್ಪ ಅವರಿಗೂ ಯಾವುದೇ ಸಂಬಂಧವಿಲ್ಲ. ಸಿದ್ದರಾಮಯ್ಯ ಹಾಗೂ ಬಿ.ಎಸ್‌.ಯಡಿಯೂರಪ್ಪ ಭೇಟಿಯಾಗಿದ್ದಾರೆ ಎಂಬ ಎಚ್‌.ಡಿ.ಕುಮಾರಸ್ವಾಮಿ ಅವರ ಆರೋಪದಲ್ಲಿ ಹುರುಳಿಲ್ಲ. ಇದೊಂದು ರಾಜಕೀಯ ಪ್ರೇರಿತ ಹೇಳಿಕೆ. ಶುದ್ಧ ಸುಳ್ಳು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ವಿಜಯೇಂದ್ರ–ಡಿಕೆಶಿ ಮಾತುಕತೆ: ಮುರುಘಾ ಮಠದ ಯುವ ಮೇಳದ ವೇದಿಕೆಯ ಮೇಲೆ ಅಕ್ಕ–ಪಕ್ಕ ಕುಳಿತಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆಪ್ತವಾಗಿ ಮಾತುಕತೆ ನಡೆಸಿದರು.

ಸಮಾರಂಭವನ್ನು ಉದ್ದೇಶಿಸಿ ಗಣ್ಯರು ಮಾತನಾಡುತ್ತಿರುವ ಸಂದರ್ಭದಲ್ಲಿ ಇಬ್ಬರು ನಾಯಕರು ಪರಸ್ಪರ ವಿಚಾರ ವಿನಿಮಯ ಮಾಡಿಕೊಂಡರು. ಆಪ್ತವಾಗಿ ನಡೆದ ಈ ಮಾತುಕತೆ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.