ADVERTISEMENT

ಅರಣ್ಯ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ: ತನಿಖೆಗೆ ಆದೇಶ

ಭ್ರಷ್ಟಾಚಾರ ಆರೋಪ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2021, 16:37 IST
Last Updated 20 ಸೆಪ್ಟೆಂಬರ್ 2021, 16:37 IST
ಉಮೇಶ್‌ ಕತ್ತಿ
ಉಮೇಶ್‌ ಕತ್ತಿ   

ಬೆಂಗಳೂರು: ಅರಣ್ಯ ಇಲಾಖೆಯ ವಿವಿಧ ಹುದ್ದೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮ ಕುರಿತು ಆಂತರಿಕ ತನಿಖೆ ಕೈಗೊಳ್ಳಲಾಗಿದೆ ಎಂದು ಅರಣ್ಯಸಚಿವ ಉಮೇಶ ಕತ್ತಿ ಸೋಮವಾರ ವಿಧಾನಪರಿಷತ್‌ನಲ್ಲಿ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್‌ನನಸೀರ್‌ ಅಹ್ಮದ್ ಅವರು ಈ ಬಗ್ಗೆ ವಿಷಯ ಪ್ರಸ್ತಾಪಿಸಿ,ಅರಣ್ಯ ವೀಕ್ಷಕ, ಅರಣ್ಯ ರಕ್ಷಕ, ಉಪವಲಯ ಅರಣ್ಯಾಧಿಕಾರಿ ಮತ್ತು ವಲಯ ಅರಣ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮಗಳು ನಡೆದಿರುವ ಬಗ್ಗೆ ಆರೋಪಗಳಿವೆ ಎಂದು ಹೇಳಿದರು.

ಈ ಅಕ್ರಮಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಅಧಿಕಾರಿಗಳೇ ಪ್ರಭಾವಿ ಹುದ್ದೆಯಲ್ಲಿ ಮುಂದುವರಿದಿದ್ದಾರೆ. ಇದರಿಂದ, ಸಾಕ್ಷ ನಾಶ ಮಾಡಬಹುದು. ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಕತ್ತಿ,ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರು ಜುಲೈ 27ರಂದು ಪತ್ರ ಬರೆದು ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ತನಿಖೆ ನಡೆಸಲು ಪೂರ್ವಾನುಮತಿ ನೀಡುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರನ್ನು ಕೋರಿದ್ದಾರೆ. ಆದರೆ, ಇಲಾಖೆಯ ಜಾಗೃತ ದಳಕ್ಕೆ ಪ್ರಾಥಮಿಕ ತನಿಖೆ ನಡೆಸುವಂತೆ ಈಗಾಗಲೇ ಆದೇಶಿಸಲಾಗಿದೆ.15 ದಿನಗಳಲ್ಲಿ ಈ ವರದಿ ಲಭ್ಯವಾಗಲಿದೆ. ವರದಿ ಪರಿಶೀಲಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಪ್ರಕರಣದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗಿಯಾಗಿರುವುದು ಕಂಡು ಬಂದಲ್ಲಿ ತಕ್ಷಣವೇ ಅಮಾನತು ಮಾಡಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.