ADVERTISEMENT

ಎನ್‌ಎಚ್‌ಎಂ ನೌಕರರ ವಜಾಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2023, 23:14 IST
Last Updated 23 ಮಾರ್ಚ್ 2023, 23:14 IST

ಬೆಂಗಳೂರು: ‘ಎಚ್ಚರಿಕೆ ನೋಟಿಸ್ ನೀಡಿದರೂ 48 ಗಂಟೆಯೊಳಗೆ ಕರ್ತವ್ಯಕ್ಕೆ ಹಾಜರಾಗದ ಪ್ರತಿಭಟನಾನಿರತ ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್‌ಎಚ್‌ಎಂ) ಸಿಬ್ಬಂದಿಯನ್ನು ವಜಾಗೊಳಿಸಿ, ತೆರವಾದ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಬೇಕು’ ಎಂದು ಎನ್‌ಎಚ್‌ಎಂ ನಿರ್ದೇಶಕರು ಸೂಚಿಸಿದ್ದಾರೆ.

ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ತುರ್ತು ಸಭೆ ನಡೆಸಿ, ಸಿಬ್ಬಂದಿಯನ್ನು ವಜಾಗೊಳಿಸುವ ಕುರಿತು ನಿರ್ಣಯ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

ಪ್ರತಿಭಟನೆಯನ್ನು ನಿಲ್ಲಿಸಿ, 48 ಗಂಟೆಯೊಳಗೆ ಕರ್ತವ್ಯಕ್ಕೆ ಹಾಜರಾಗುವಂತೆ ಮಾ.16ರಂದು ಎಚ್ಚರಿಕೆ ನೋಟಿಸ್ ನೀಡಲಾಗಿತ್ತು. ಮುಷ್ಕರ ಮುಂದುವರಿಸಿದ ಕಾರಣ ಸಾರ್ವಜನಿಕ ಹಿತದೃಷ್ಟಿಯಿಂದ ಎಸ್ಮಾ ಕಾಯ್ದೆ ಜಾರಿಗೊಳಿಸುವಂತೆ ಸೂಚನೆ ನೀಡಲಾಗಿತ್ತು. ಕೆಲವು ಜಿಲ್ಲೆಗಳ ನೌಕರರು ಪೂರ್ಣ ಪ್ರಮಾಣದಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

ADVERTISEMENT

ಎನ್‌ಎಚ್ಎಂ ಅಡಿ 30,574 ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಒಳಗುತ್ತಿಗೆ ನೌಕರರ ಸಂಘವು ವಿವಿಧ ಬೇಡಿಕೆಗಳ ಸಂಬಂಧ ಫೆ.13ರಿಂದಲೂ ಪ್ರತಿಭಟನೆ ನಡೆಸುತ್ತಿದೆ. ಶೇ 15ರಷ್ಟು ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ. ಆದರೂ ಕಾಯಂಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಿಚಾರವಾಗಿ ಬೇರೆ ರಾಜ್ಯಗಳನ್ನು ಸಂಪರ್ಕಿಸಿದಾಗ, ಮಣಿಪುರ ಹೊರತುಪಡಿಸಿ ಬೇರೆ ಯಾವುದೇ ರಾಜ್ಯದಲ್ಲಿ ನೌಕರರನ್ನು ಕಾಯಂಗೊಳಿಸಿಲ್ಲ ಎಂದು ಅವರು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.