ADVERTISEMENT

ಅತಿಥಿ ಉಪನ್ಯಾಸಕರ ಕಾಯಂಗೆ ಒತ್ತಾಯ; ಜೆಡಿಎಸ್‌ ಸದಸ್ಯರ ಸಭಾತ್ಯಾಗ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2021, 16:43 IST
Last Updated 20 ಸೆಪ್ಟೆಂಬರ್ 2021, 16:43 IST
ವಿಧಾನ ಪರಿಷತ್‌ ಕಲಾಪದಲ್ಲಿ ಸೋಮವಾರ ಪಾಲ್ಗೊಂಡ ಜೆಡಿಎಸ್‌ನ ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ     –ಪ್ರಜಾವಾಣಿ ಚಿತ್ರ
ವಿಧಾನ ಪರಿಷತ್‌ ಕಲಾಪದಲ್ಲಿ ಸೋಮವಾರ ಪಾಲ್ಗೊಂಡ ಜೆಡಿಎಸ್‌ನ ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ     –ಪ್ರಜಾವಾಣಿ ಚಿತ್ರ   

ಬೆಂಗಳೂರು: ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಿಸಲು ಮತ್ತು ಕಾಯಂಗೊಳಿಸಲು ಸರ್ಕಾರಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ದೂರಿದ ಜೆಡಿಎಸ್‌ ಸದಸ್ಯರು ಸೋಮವಾರ ವಿಧಾನ ಪರಿಷತ್‌ನಲ್ಲಿ ಸಭಾತ್ಯಾಗ ಮಾಡಿದರು.

ಪ್ರಶ್ನೋತ್ತರ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಜೆಡಿಎಸ್‌ನ ಮರಿತಿಬ್ಬೇಗೌಡ ಅವರು, ‘ಅತಿಥಿ ಉಪನ್ಯಾಸಕರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸರ್ಕಾರ ಇವರನ್ನು ಕಾಯಂ ಮಾಡಿಕೊಳ್ಳಲು ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಕೆಲವು ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರಿಗೆ ₹50 ಸಾವಿರದವರೆಗೂ ಗೌರವ ಧನ ನೀಡಲಾಗುತ್ತಿದೆ. ಬೋಧಕೇತರ ಸಿಬ್ಬಂದಿಯನ್ನಾಗಿಯಾದರೂ ನೇಮಿಸಿಕೊಳ್ಳುವ ಮೂಲಕ ಸೇವಾ ಭದ್ರತೆ ಒದಗಿಸಬೇಕು ಮತ್ತು ಗೌರವ ಧನವನ್ನು ಪರಿಷ್ಕರಿಸಬೇಕು. ಕಾಲಮಿತಿ ಒಳಗೆ ಈ ಬಗ್ಗೆ ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ADVERTISEMENT

ಈ ಬಗ್ಗೆ ಪ್ರತಿಕ್ರಿಯಿಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ‘ಗೌರವ ಧನ ಪರಿಷ್ಕರಿಸುವ ಬಗ್ಗೆ ಪರಿಶೀಲಿಸಲಾಗುವುದು ಮತ್ತು ಈಗಿರುವ ಅತಿಥಿ ಉಪನ್ಯಾಸಕರನ್ನೇ ಮುಂದುವರಿಸಲಾಗುವುದು.ಆದರೆ, ಕಾಯಂಗೊಳಿಸುವ ಪ್ರಸ್ತಾವ ಸದ್ಯಕ್ಕೆ ಸರ್ಕಾರದ ಮುಂದೆ ಇಲ್ಲ’ ಎಂದು ಹೇಳಿದರು.

‘ಸಚಿವರು ನಿರಾಶಾದಾಯಕ ಉತ್ತರ ನೀಡಿದ್ದಾರೆ. ಅತಿಥಿ ಉಪನ್ಯಾಸಕರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ ಜೆಡಿಎಸ್‌ ಸದಸ್ಯರು ಸಭಾತ್ಯಾಗ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.