ADVERTISEMENT

ಇದೇ 16 ರಿಂದ ಒಂದು‌ ವಾರ ದಕ್ಷಿಣ ಕನ್ನಡ ಲಾಕ್‌‌ಡೌನ್

​ಪ್ರಜಾವಾಣಿ ವಾರ್ತೆ
Published 13 ಜುಲೈ 2020, 9:38 IST
Last Updated 13 ಜುಲೈ 2020, 9:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಕೊರೊನಾ ಸೋಂಕು ಆತಂಕಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಇದೇ 16 ರಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್‌ಡೌನ್ ಜಾರಿಗೆ ತರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಸೋಮವಾರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಸೇರಿದಂತೆ ಹಲವು ಅಧಿಕಾರಿಗಳು ಮತ್ತೊಂದು ಸುತ್ತಿನ ಚರ್ಚೆ ನಡೆಸಿ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಕೋಟ ಸ್ಪಷ್ಟಪಡಿಸಿದ್ದಾರೆ.

'ನಮ್ಮ ಜಿಲ್ಲೆಯಲ್ಲಿ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಕೊರೊನಾ ನಿಯಂತ್ರಣಕ್ಕಾಗಿ ಒಂದಷ್ಟು ದಿನಗಳ ಕಾಲ ಮತ್ತೆ ಲಾಕ್ ಡೌನ್ ಸೂಕ್ತ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ 16 ರಿಂದ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೊಳಿಸಲಾಗುವುದು. ಈ ಹಿನ್ನಲೆಯಲ್ಲಿ ನಾನು ಜಿಲ್ಲೆಯ ಎಲ್ಲಾ ಜನರಲ್ಲಿ ವಿನಂತಿಸುತ್ತಿದ್ದು, ಇನ್ನು ಎರಡು ದಿನಗಳ ಕಾಲಾವಕಾಶ ಇರುವುದರಿಂದ ವಾರಗಳಿಗೆ ಅಗತ್ಯವಿರುವ ದಿನಸಿ ಸಾಮಗ್ರಿ ಹಾಗೂ ಮೂಲಭೂತ ಅವಶ್ಯಕತೆಗಳನ್ನು ಖರೀದಿ ಮಾಡಿಟ್ಟುಕೊಳ್ಳಬೇಕು" ಎಂದು ಸಚಿವ ಕೋಟ ಮನವಿ ಮಾಡಿದ್ದಾರೆ.

ADVERTISEMENT

ಜಿಲ್ಲಾಡಳಿತ ನಿರ್ಧರಿತ ಲಾಕ್ ಡೌನ್ ನ ಕುರಿತ ಮಾರ್ಗಸೂಚಿ ಮತ್ತು ನಿಯಮಗಳನ್ನು ಜಿಲ್ಲಾಧಿಕಾರಿಗಳು ಪ್ರಕಟಿಸಲಿದ್ದು, ಜಿಲ್ಲೆಯ ಜನರು ಲಾಕ್ ಡೌನ್ ಹಾಗೂ ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಇದೇ ವೇಳೆ ಸಚಿವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.