ಪಂಡಿತ್ ಛನ್ನುಲಾಲ್ ಮಿಶ್ರಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ
ಮಿರ್ಜಾಪುರ: ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಪಂಡಿತ್ ಛನ್ನುಲಾಲ್ ಮಿಶ್ರಾ (89) ಅವರು ಗುರುವಾರ ನಿಧನರಾಗಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ತಂದೆಯವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಿಗ್ಗೆ 4 ಗಂಟೆಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಮಿಶ್ರಾ ಅವರ ಮಗಳು ನಮ್ರತಾ ಮಿಶ್ರಾ ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಮಿಶ್ರಾ ಅವರು ಕಿರಿಯ ಮಗಳೊಂದಿಗೆ ಮಿರ್ಜಾಪುರದಲ್ಲಿ ವಾಸಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ಛನ್ನುಲಾಲ್ ಮಿಶ್ರಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಗಣ್ಯರು ಸಾಮಾಜಿಕ ಮಾಧ್ಯಮಗಳಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.
‘ಖ್ಯಾತ ಶಾಸ್ತ್ರೀಯ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ಅವರ ನಿಧನದಿಂದ ದುಃಖವಾಗಿದೆ. ಮಿಶ್ರಾ ಅವರು ಭಾರತೀಯ ಕಲೆ ಮತ್ತು ಸಂಸ್ಕೃತಿಯ ಪುಷ್ಟೀಕರಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಶಾಸ್ತ್ರೀಯ ಸಂಗೀತವನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ಯುವಲ್ಲಿ ಮತ್ತು ಭಾರತೀಯ ಸಂಪ್ರದಾಯವನ್ನು ವಿಶ್ವ ವೇದಿಕೆಯಲ್ಲಿ ಸ್ಥಾಪಿಸುವಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ನಾನು ಅವರ ಪ್ರೀತಿ ಮತ್ತು ಆಶೀರ್ವಾದವನ್ನು ಪಡೆದಿರುವುದು ನನ್ನ ಅದೃಷ್ಟ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಓಂ ಶಾಂತಿ’ ಎಂದು ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
1936ರಲ್ಲಿ ಅಜಂಗಢದಲ್ಲಿ ಜನಿಸಿದ ಮಿಶ್ರಾ ಅವರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯಕರಾಗಿ ಅಪಾರ ಖ್ಯಾತಿ ಗಳಿಸಿದ್ದಾರೆ. ಜತೆಗೆ, ಖಯಾಲ್, ಠುಮ್ರಿ, ದಾದ್ರಾ, ಕಜ್ರಿ ಮತ್ತು ಇತರ ಪ್ರಕಾರಗಳಲ್ಲೂ ಅಪಾರ ಕೊಡುಗೆ ನೀಡಿದ್ದಾರೆ.
ಮಿಶ್ರಾ ಅವರಿಗೆ 2010ರಲ್ಲಿ ಪದ್ಮಭೂಷಣ, 2020ರಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.