ಬೆಂಗಳೂರು: ಇಲ್ಲಿನ ಅಮಾನತ್ ಸಹಕಾರಿ ಬ್ಯಾಂಕನ್ನು ಕೆನರಾ ಬ್ಯಾಂಕ್ ಜೊತೆ ವಿಲೀನಗೊಳಿಸುವುದರಿಂದ ಕೆನರಾ ಬ್ಯಾಂಕ್‌ನ ಲಾಭಾಂಶದ ಮೇಲೆ ಆಗುವ ಪರಿಣಾಮ ಸೇರಿದಂತೆ ವಿವಿಧ ಅಂಶಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ಗುರುವಾರ ತಿಳಿಸಿದೆ.
ವಿಲೀನದ ನಂತರ ಕೆನರಾ ಬ್ಯಾಂಕ್ನಿಂದ ಕೇಂದ್ರ ಸರ್ಕಾರ ಪಡೆಯಬಹುದಾದ ಡಿವಿಡೆಂಡ್ ಕುರಿತೂ ಪರಿಶೀಲಿಸಲಾಗುತ್ತಿದೆ. ಆದರೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಕೇಂದ್ರ ಹಣಕಾಸು ಸಚಿವಾಲಯಕ್ಕೆ ಹೆಚ್ಚಿನ ಸಮಯ ಬೇಕು ಎಂದು ಕೇಂದ್ರ ಸರ್ಕಾರ ಪರ ವಕೀಲರು ವಿವರಿಸಿದರು.
ನ್ಯಾಯಾಲಯಕ್ಕೆ ಸಂಬಂಧಿಸಿದ ವಿಚಾರಗಳಲ್ಲಿ ಮಾದರಿ ನೀತಿ ಸಂಹಿತೆ ಅನ್ವಯ ಆಗದು. ಈ ವಿಚಾರ ಕುರಿತು ಕೇಂದ್ರದ ನಿಮ್ಮ ನಿಲುವು ತಿಳಿಸಬೇಕು ಎಂದು ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಸೂಚಿಸಿದರು. ವಿಚಾರಣೆಯನ್ನು ಏಪ್ರಿಲ್ 7ಕ್ಕೆ ಮುಂದೂಡಲಾಗಿದೆ.
ಅಮಾನತ್ ಬ್ಯಾಂಕಿನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಕುರಿತು ಸಿಬಿಐ ತನಿಖೆ ನಡೆಸುವಂತೆ ಕಾಂಗ್ರೆಸ್ ಮುಖಂಡ ಸಿ.ಕೆ. ಜಾಫರ್ ಷರೀಫ್ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅಮಾನತ್ ಬ್ಯಾಂಕನ್ನು ಕೆನರಾ ಬ್ಯಾಂಕ್ ಜೊತೆ ವಿಲೀನ ಮಾಡಬೇಕು ಎಂದು ಕೋರಿ ಅಮಾನತ್ ಬ್ಯಾಂಕ್ ಸದಸ್ಯರ ಕಲ್ಯಾಣ ಸಂಘದ ಅಧ್ಯಕ್ಷ ಮಹಮ್ಮದ್ ವಜೀರ್ ಬೇಗ್ ಅವರು ಅರ್ಜಿ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.