ADVERTISEMENT

ಆರ್ಥಿಕ ಬಿಕ್ಕಟ್ಟು: ಐಎಂಎಫ್ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2011, 19:30 IST
Last Updated 21 ಸೆಪ್ಟೆಂಬರ್ 2011, 19:30 IST

ವಾಷಿಂಗ್ಟನ್ (ಪಿಟಿಐ): ಅಮೆರಿಕದ ಸಾಲ ಯೋಗ್ಯತೆ ಮಟ್ಟ ಕುಸಿದಿರುವುದು ಮತ್ತು ಯೂರೋಪ್ ಒಕ್ಕೂಟದಲ್ಲಿ ಸಾಲದ ಬಿಕ್ಕಟ್ಟು ಮುಂದುವರೆದಿರುವುದು ಜಾಗತಿಕ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು, ಮತ್ತೊಂದು ಸುತ್ತಿನ ಆರ್ಥಿಕ ಹಿಂಜರಿತದ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಎಚ್ಚರಿಕೆ ನೀಡಿದೆ.

ಜಾಗತಿಕ ಆರ್ಥಿಕ ಸ್ಥಿರತೆ ಮೇಲೆ ಪರಿಣಾಮ ಬೀರುವ ಸಂಗತಿಗಳು ಇತ್ತೀಚಿನ ತಿಂಗಳುಗಳಲ್ಲಿ ಹೆಚ್ಚಿದೆ. ನೈಜ ಆರ್ಥಿಕತೆ ಮತ್ತು ಬ್ಯಾಂಕಿಂಗ್ ವ್ಯವಸ್ಥೆಯ ನಡುವಿನ ಲೋಪವೇ ಯೂರೋಪ್ ಒಕ್ಕೂಟದ ಸಾಲದ ಬಿಕ್ಕಟ್ಟು ಉಲ್ಬಣಗೊಳ್ಳಲು ಕಾರಣ ಎಂದು `ಐಎಂಎಫ್~ ತನ್ನ `ಜಾಗತಿಕ ಆರ್ಥಿಕ ಸ್ಥಿರತೆ~ ವರದಿಯಲ್ಲಿ ಹೇಳಿದೆ.

ಬಡವರ ಸಂಖ್ಯೆ ಹೆಚ್ಚಳ: ಜಾಗತಿಕ ಆರ್ಥಿಕ ಅಸ್ಥಿರತೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡವರ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ ಎಂದು `ಐಎಂಎಫ್~ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟೀನ್ ಲಗಾರ್ಡೆ ಹೇಳಿದ್ದಾರೆ.

ಕಳೆದ ಒಂದು ವರ್ಷದಲ್ಲಿ ಹೆಚ್ಚುವರಿಯಾಗಿ 44 ದಶಲಕ್ಷ ಜನರು ಬಡತನ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. 2008ರ ಆಹಾರ ಮತ್ತು ತೈಲ ಬಿಕ್ಕಟ್ಟಿನ ನಂತರ ಇದೀಗ ಅಗತ್ಯ ಸರಕುಗಳ ಬೆಲೆ ಏರಿಕೆ ಜನಸಾಮಾನ್ಯರನ್ನು ತೀವ್ರವಾಗಿ ಬಾಧಿಸಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.