ADVERTISEMENT

ಕೃಷಿಗೆ ಪ್ರತ್ಯೇಕ ಬಜೆಟ್ ಅನಗತ್ಯ: ಶರದ್ ಪವಾರ್

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2011, 19:30 IST
Last Updated 12 ಫೆಬ್ರುವರಿ 2011, 19:30 IST

ಬೆಳಗಾವಿ: ಕೇಂದ್ರದಲ್ಲಿ ಕೃಷಿಗೆ ಪ್ರತ್ಯೇಕ ಬಜೆಟ್ ಮಂಡಿಸುವ ಪ್ರಶ್ನೆ ಇಲ್ಲ. ಕೃಷಿ ಕ್ಷೇತ್ರ ಎಲ್ಲ ಇಲಾಖೆಗಳೊಂದಿಗೆ ನಿಕಟ ಸಂಬಂಧ ಹೊಂದಿದೆ. ಕೃಷಿ ಕ್ಷೇತ್ರವನ್ನು ಪ್ರತ್ಯೇಕವಾಗಿ ಪರಿಗಣಿಸುವುದು ಅಸಾಧ್ಯ. ಹೀಗಾಗಿ ಕೃಷಿಗೆ ಪ್ರತ್ಯೇಕ ಬಜೆಟ್ ಮಂಡಿಸುವ ಉದ್ದೇಶ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಶನಿವಾರ ಇಲ್ಲಿ ತಿಳಿಸಿದರು.

ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಕೃಷಿ ಉತ್ಪನ್ನಗಳ ದರದಲ್ಲಿ ಏರಿಳಿಕೆಯಾದ ಸಂದರ್ಭದಲ್ಲಿ ನೆರವಾಗುವ ಉದ್ದೇಶದಿಂದ ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಉದ್ದೇಶಿಸಿದೆ. ಈ ಕಾಯ್ದೆಯನ್ನು ಜಾರಿಗೊಳಿಸುವುದರಿಂದ ಶೇ 60ರಷ್ಟು ರೈತರಿಗೆ ಹಾಗೂ ಶೇ 40ರಷ್ಟು ಬಡವರಿಗೆ ಅನುಕೂಲವಾಗಲಿದೆ. ಈ ಸಂಬಂಧ ಪ್ರತ್ಯೇಕ ನಿಧಿಯೊಂದನ್ನು ಸ್ಥಾಪಿಸಲಾಗುತ್ತದೆ ಎಂದು ಎಂದು ತಿಳಿಸಿದರು.ಕೃಷಿ ಉತ್ಪನ್ನಗಳ ಮಾರಾಟ ಸಂದರ್ಭದಲ್ಲಿ ಪ್ರಮುಖ ಪಾತ್ರ ವಹಿಸುವ ಮಧ್ಯವರ್ತಿಗಳನ್ನು ತಡೆಗಟ್ಟುವುದು ಕೇಂದ್ರ ಸರ್ಕಾರದ ಕೆಲಸವಲ್ಲ. ಅದನ್ನು ಸ್ಥಳೀಯ ಆಡಳಿತ ವ್ಯವಸ್ಥೆ ನಿಭಾಯಿಸಬೇಕು   ಎಂಬ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

ಬೀಜ ಉತ್ಪಾದನೆ: ‘ರೈತರಿಗೆ ಗುಣಮಟ್ಟದ ಬೀಜ ಪೂರೈಕೆ ಹಾಗೂ ಗೊಬ್ಬರ ಪೂರೈಕೆಗೆ ಕ್ರಮ ತೆಗೆದುಕೊಳ್ಳಲಾಗಿದೆ. ಫುಡ್ ಪಾರ್ಕ್‌ಗಳನ್ನು ಸ್ಥಾಪಿಸುವ ಮೂಲಕ ಬೀಜೋತ್ಪಾದನೆ ಮಾಡಲಾಗುತ್ತದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

ಮುಕ್ತ ಸಕ್ಕರೆ ನೀತಿ: ‘ಮುಕ್ತ ಸಕ್ಕರೆ ನೀತಿ ರೂಪಿಸಲು ಕೇಂದ್ರ ಸರ್ಕಾರ ಉದ್ದೇಶಿಸಿದ್ದು, ಅದಕ್ಕೆ ಗುಜರಾತ್ ಹಾಗೂ ಮಹಾರಾಷ್ಟ್ರ ಸರ್ಕಾರದಿಂದ ಮಾತ್ರ ಒಪ್ಪಿಗೆ ಸಿಕ್ಕಿದೆ. ಸಕ್ಕರೆ ಉತ್ಪಾದಿಸುವ ಪ್ರಮುಖ ರಾಜ್ಯಗಳು ಅದಕ್ಕೆ ಒಪ್ಪಿಗೆ ಕೊಟ್ಟಿಲ್ಲ’ ಎಂದು ಪವಾರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.