ADVERTISEMENT

ಮೈಷುಗರ್ಸ್‌: ರೈತರಿಗೆ ರೂ 2400 ಮುಂಗಡ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2013, 19:59 IST
Last Updated 7 ಸೆಪ್ಟೆಂಬರ್ 2013, 19:59 IST

ಬೆಂಗಳೂರು: ಮಂಡ್ಯದ ಮೈಷುಗರ್ಸ್‌ ಮತ್ತು ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸುವ ರೈತರಿಗೆ ಪ್ರತಿ ಟನ್ ಕಬ್ಬಿಗೆ ರೂ2,400  ಮುಂಗಡ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಉನ್ನತಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದೆ.

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ವಸತಿ ಸಚಿವ ಎಂ.ಎಚ್.ಅಂಬರೀಷ್, ಸಕ್ಕರೆ ಸಚಿವ ಪ್ರಕಾಶ್ ಹುಕ್ಕೇರಿ, ಸಂಸದೆ ರಮ್ಯಾ, ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮತ್ತಿತರರು ಭಾಗವಹಿಸಿದ್ದರು. ಅಂಬರೀಷ್, ರಮ್ಯಾ ಮತ್ತು ಮಂಡ್ಯ ಜಿಲ್ಲೆಯ ಸ್ಥಳೀಯ ಶಾಸಕರು ಇತ್ತೀಚೆಗೆ ಮಂಡ್ಯದಲ್ಲಿ ರೈತರ ಜೊತೆ ನಡೆಸಿದ ಮಾತುಕತೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳು, ಬೇಡಿಕೆಗಳ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಗಿದೆ.

`ಎರಡೂ ಕಾರ್ಖಾನೆಗಳಿಗೆ ಕಬ್ಬು ಪೂರೈಸುವ ರೈತರಿಗೆ ಪ್ರತಿ ಟನ್‌ಗೆ ರೂ2,400 ಮುಂಗಡ ನೀಡಲು ನಿರ್ಧರಿಸಲಾಗಿದೆ. ಕಬ್ಬು ದರ ನಿಗದಿ ಸಮಿತಿಯು ಶೀಘ್ರದಲ್ಲೇ ಪ್ರತಿ ಟನ್ ಕಬ್ಬಿನ ದರವನ್ನು ನಿಗದಿ ಮಾಡಲಿದೆ. ನಂತರ ವ್ಯತ್ಯಾಸದ ಮೊತ್ತವನ್ನು ಹೊಂದಾಣಿಕೆ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ' ಎಂದು ಸಭೆಯ ಬಳಿಕ ಅಂಬರೀಷ್ ಅವರು ಪತ್ರಕರ್ತರಿಗೆ ತಿಳಿಸಿದರು.

ಮೈಷುಗರ್ಸ್‌ ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ. ಎರಡೂ ಕಾರ್ಖಾನೆಗಳಲ್ಲಿ ಅಗತ್ಯವಾಗಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವರದಿಗೆ ಸೂಚನೆ
ಕಬ್ಬು ಪೂರೈಸಿರುವ ರೈತರಿಗೆ ನೀಡಬೇಕಿರುವ ಬಾಕಿ ಮೊತ್ತದ ಬಗ್ಗೆಯೂ ವಿವರ ನೀಡುವಂತೆ ನಿರ್ದೇಶನ ನೀಡಿದ್ದಾರೆ. ಪಾಂಡವಪುರ ಸಕ್ಕರೆ ಕಾರ್ಖಾನೆ ಕುರಿತು ವಾಸ್ತವಿಕ ಅಂಶಗಳನ್ನು ಒಳಗೊಂಡ ವರದಿಯೊಂದನ್ನು ಸಲ್ಲಿಸುವಂತೆ ಮುಖ್ಯಮಂತ್ರಿಯವರು ಸಕ್ಕರೆ ಆಯುಕ್ತರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.