ADVERTISEMENT

ದಕ್ಷಿಣ ಕನ್ನಡ, ಉಡುಪಿ ಸೇರಿ 4 ಜಿಲ್ಲೆಗಳಲ್ಲಿ ನಾರಾಯಣ ಗುರು ವಸತಿ ಶಾಲೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಮಾರ್ಚ್ 2022, 10:51 IST
Last Updated 4 ಮಾರ್ಚ್ 2022, 10:51 IST
ನಾರಾಯಣ ಗುರುಗಳು
ನಾರಾಯಣ ಗುರುಗಳು   

ಬೆಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ‘ನಾರಾಯಣ ಗುರು’ ವಸತಿ ಶಾಲೆ ಆರಂಭಿಸುವ ಬಗ್ಗೆ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದರಂತೆ ನಾರಾಯಣ ಗುರು ವಸತಿ ಶಾಲೆ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಇಷ್ಟೇ ಅಲ್ಲದೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ ಮಕ್ಕಳಿಗಾಗಿ ₹250 ಕೋಟಿ ವೆಚ್ಚದಲ್ಲಿ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ 1000 ಸಾಮರ್ಥ್ಯದ ಬಹುಮಹಡಿಯ ‘ದೀನಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ ಸಮುಚ್ಛಯ’ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕೇರಳದ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡದೇ ಇದ್ದ ವಿಚಾರ ರಾಜ್ಯದಲ್ಲಿ ಭಾರಿ ಚರ್ಚೆಯಾಗಿತ್ತು. ಕಾಂಗ್ರೆಸ್ ಮತ್ತು ಬಿಜೆಪಿ ನಡುವಣ ವಾಕ್ಸಮರಕ್ಕೆ ಕಾರಣವಾಗಿತ್ತು. ತಳಸಮುದಾಯದ ಮಹಾಪುರುಷರ ಬಗ್ಗೆ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಪೂರ್ವಗ್ರಹ ಮತ್ತು ತಿರಸ್ಕಾರ ಧೋರಣೆ ಹೊಂದಿದೆ ಎಂದು ಕಾಂಗ್ರೆಸ್ ಟೀಕಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.