ADVERTISEMENT

Karnataka Budget 2025 | ಪಶುಸಂಗೋಪನೆ: 50 ನೂತನ ಪಶು ಚಿಕಿತ್ಸಾಲಯ ಪ್ರಾರಂಭ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2025, 6:13 IST
Last Updated 7 ಮಾರ್ಚ್ 2025, 6:13 IST
   

ಬೆಂಗಳೂರು: ಪಶುಸಂಗೋಪನೆ ಕ್ಷೇತ್ರದ ಅಭಿವೃದ್ಧಿಗೆ ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ.

ಅನುಗ್ರಹ ಯೋಜನೆಯ ಪರಿಹಾರ ಮೊತ್ತ ಏರಿಕೆ

ಮುಖ್ಯವಾಗಿ ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ 'ಅನುಗ್ರಹ' ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಡಿ ಹಸು, ಎಮ್ಮೆ ಮತ್ತು ಎತ್ತುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು ₹10,000ಗಳಿಂದ ₹15,000 ಗಳಿಗೆ, ಕುರಿ/ಮೇಕೆಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು ₹5,000ಗಳಿಂದ ₹7,500ಗಳಿಗೆ ಹಾಗೂ 3-6 ತಿಂಗಳ ಕುರಿ/ಮೇಕೆ ಮರಿಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು ₹3,500ಗಳಿಂದ ₹5,000ಗೆ ಹೆಚ್ಚಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

50 ನೂತನ ಪಶು ಚಿಕಿತ್ಸಾಲಯ ಪ್ರಾರಂಭ

ಕಳೆದ ಎರಡು ವರ್ಷಗಳಲ್ಲಿ 60 ಹೊಸ ಪಶು ಚಿಕಿತ್ಸಾಲಯಗಳನ್ನು ಕಾರ್ಯಾರಂಭಗೊಳಿಸಲಾಗಿದ್ದು, 2025-26ನೇ ಸಾಲಿನಲ್ಲಿ 50 ನೂತನ ಪಶು ಚಿಕಿತ್ಸಾಲಯಗಳನ್ನು ಪ್ರಾರಂಭಿಸಲಾಗುವುದು.

ADVERTISEMENT

2025-26ನೇ ಸಾಲಿನಲ್ಲಿ 100 ಪಶು ವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡಗಳನ್ನು ನಬಾರ್ಡ್‌ ಸಹಯೋಗದೊಂದಿಗೆ ನಿರ್ಮಿಸಲಾಗುವುದು.

ಮೇವಿನ ಮರಗಳ ನೆಡುತೋಪು ಅಭಿವೃದ್ಧಿ

ಅಮೃತ್‌ ಮಹಲ್‌ ಕಾವಲುಗಳಲ್ಲಿನ ಭೂ ಒತ್ತುವರಿ ತಡೆಯಲು ಹಾಗೂ ಅಮೃತ್‌ ಮಹಲ್‌ ರಾಸುಗಳಿಗೆ ಮೇವು ಲಭ್ಯವಾಗುವಂತೆ ಮಾಡಲು, ಅರಣ್ಯ ಇಲಾಖೆ ಹಾಗೂ ನರೇಗಾ ಸಹಯೋಗದೊಂದಿಗೆ ಮೇವಿನ ಮರಗಳ ನೆಡುತೋಪು ಅಭಿವೃದ್ಧಿಗೊಳಿಸಲಾಗುವುದು.

ರಾಜ್ಯದ ಹೆಮ್ಮೆಯ ದೇಶಿ ದನದ ತಳಿಗಳಾದ ಹಳ್ಳಿಕಾರ್‌, ಕಿಲಾರಿ, ಅಮೃತ್‌ ಮಹಲ್‌ ಹಾಗೂ ಬಂಡೂರು ಕುರಿ ತಳಿಯ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ ₹2 ಕೋಟಿ ಒದಗಿಸಲಾಗುವುದು.

ವಲಸೆ ಕುರಿಗಾರರಿಗೆ ತರಬೇತಿ

ಆಧುನಿಕ ಕುರಿ ಸಾಕಾಣಿಕೆ ಪದ್ಧತಿಗಳು ಮತ್ತು ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವಲಸೆ ಕುರಿಗಾರರಿಗೆ ಕರ್ನಾಟಕ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ತರಬೇತಿ ನೀಡಲಾಗುವುದು.

ನಮ್ಮ ಸರ್ಕಾರವು ಅಸ್ತಿತ್ವಕ್ಕೆ ಬಂದ ನಂತರ 'ನಂದಿನಿ' ಬ್ರ್ಯಾಂಡ್‌ನ ಮಾರುಕಟ್ಟೆಯನ್ನು ವಿಸ್ತರಿಸಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದೆ. 2024-25ನೇ ಸಾಲಿನಲ್ಲಿ ಪ್ರತಿ ಒಂದು ಕೋಟಿಗೂ ಹೆಚ್ಚು ಲೀಟರ್‌ ಹಾಲನ್ನು ಶೇಖರಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.