ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ) 2025–26ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಸಿನಿಮಾ ಕ್ಷೇತ್ರಕ್ಕೆ ಹಲವು ಕೊಡುಗೆಗಳನ್ನು ಸರ್ಕಾರ ಘೋಷಿಸಿದೆ.
ಸಿನಿಮಾ ಕ್ಷೇತ್ರವನ್ನು ಉದ್ಯಮವೆಂದು ಪರಿಗಣಿಸಿ, ಕೈಗಾರಿಕಾ ನೀತಿಯಡಿ ಒದಗಿಸಲಾಗುವ ಸೌಲಭ್ಯಗಳನ್ನು ನಮ್ಮ ಸರ್ಕಾರವು ಸಿನಿಮಾ ಕ್ಷೇತ್ರಕ್ಕೆ ಒದಗಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದ ಮಲ್ಟಿಪ್ಲೆಕ್ಸ್‌ಗಳೂ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ಪ್ರತಿ ಪ್ರದರ್ಶನಕ್ಕೆ ಪ್ರವೇಶ ದರವನ್ನು ₹200ಕ್ಕೆ ಸೀಮಿತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ.
ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಚಲನಚಿತ್ರ ಅಕಾಡೆಮಿಯು ಹೊಂದಿರುವ 2.5 ಎಕರೆ ನಿವೇಶನದಲ್ಲಿ ಬಹುಪರದೆಗಳಿರುವ ಚಿತ್ರಮಂದಿರ ಸಮುಚ್ಚಯವನ್ನು ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಅಂತರರಾಷ್ಟ್ರೀಯ ದರ್ಜೆಯ ಚಿತ್ರನಗರಿಯನ್ನು ಪಿಪಿಪಿ ಮಾದರಿಯಲ್ಲಿ ಅಂದಾಜು ₹500 ಕೋಟಿ ವೆಚ್ಚದಲ್ಲಿ ಮೈಸೂರಿನಲ್ಲಿ ಸ್ಥಾಪಿಸಲು 150 ಎಕರೆ ಜಮೀನನ್ನು ಕಾಯ್ದಿರಿಸಲಾಗಿದೆ. ಮುಂದಿನ ವರ್ಷಗಳಲ್ಲಿ ಚಿತ್ರನಗರಿಯನ್ನು ಸ್ಥಾಪಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಸಾಮಾಜಿಕ, ಚಾರಿತ್ರಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬಿಂಬಿಸುವ ಕನ್ನಡ ಚಲನಚಿತ್ರಗಳನ್ನು ಡಿಜಿಟಲ್ ಹಾಗೂ ನಾನ್-ಡಿಜಿಟಲ್ ಮಾದರಿಯಲ್ಲಿ ಸಂರಕ್ಷಿಸಲು ₹3 ಕೋಟಿ ವೆಚ್ಚದಲ್ಲಿ ಚಲನಚಿತ್ರ ಭಂಡಾರವನ್ನು ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.