ADVERTISEMENT

karnataka budget| ಆರೋಗ್ಯ ಕ್ಷೇತ್ರದ ಉನ್ನತಿಗೆ ಬಿಎಸ್‌ವೈ ಯೋಜನೆ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2020, 10:56 IST
Last Updated 5 ಮಾರ್ಚ್ 2020, 10:56 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಇಂದಿನ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.

ಟೆಲಿಮೆಡಿಸನ್ ಸೇವೆ ವಿಸ್ತರಣೆ, ತೀವ್ರ ನಿಗಾ ಘಟಕ ನಿರ್ವಹಣೆ, ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರ ಚಿಕಿತ್ಸೆಗೆ ಅನುದಾನ, ಉಚಿತ ಪೆರಿಟೋನಿಯಲ್ ಡಯಾಲಿಸಿಸ್ ಸೇವೆ, ಕ್ಯಾತ್‍ಲ್ಯಾಬ್ ಸ್ಥಾಪನೆ ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಯಡಿಯೂರಪ್ಪ ಮಾತನಾಡಿದ್ದಾರೆ.

ಆರೋಗ್ಯ ಕ್ಷೇತ್ರಕ್ಕೆ ಅಭಿವೃದ್ಧಿಗೆ ಬಿಎಸ್‌ವೈ ಯೋಜನೆಗಳು

ADVERTISEMENT

* ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ / ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಹಂತ ಹಂತವಾಗಿ 19 ಕೋಟಿ ರೂ. ವೆಚ್ಚದಲ್ಲಿ ಟೆಲಿಮೆಡಿಸನ್ ಸೇವೆ ವಿಸ್ತರಣೆ.

* ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲ್ಲೂಕು ಸರ್ಕಾರಿ ಆಸ್ಪತ್ರೆ 200 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೆ.

* ಆರು ವರ್ಷದೊಳಗಿನ ಮಕ್ಕಳಲ್ಲಿ ಜನ್ಮಜಾತ ಕಿವುಡುತನ ಪತ್ತೆ ಹಚ್ಚಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರ ಚಿಕಿತ್ಸೆ ನಡೆಸಿ, ಶ್ರವಣಯಂತ್ರ ಒದಗಿಸಿ ಗುಣಪಡಿಸುವ ಯೋಜನೆಗೆ 28 ಕೋಟಿ ರೂ. ಅನುದಾನ.

* ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಪ್ರಾಯೋಗಿಕವಾಗಿ ಎರಡು ಜಿಲ್ಲೆಗಳಲ್ಲಿ ತಾಲ್ಲೂಕು ಆಸ್ಪತ್ರೆಗಳ ತೀವ್ರ ನಿಗಾ ಘಟಕ ನಿರ್ವಹಣೆ.

* ರಾಜ್ಯದ ಆಯ್ದ ಐದು ಜಿಲ್ಲೆಗಳಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ಬಡ ರೋಗಿಗಳಿಗೆ ಉಚಿತ ಪೆರಿಟೋನಿಯಲ್ ಡಯಾಲಿಸಿಸ್ ಸೇವೆ.

* ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಇತರೆ ಐದು ಆಸ್ಪತ್ರೆಗಳ ತುರ್ತು ವೈದ್ಯಕೀಯ ಚಿಕಿತ್ಸಾ ವಿಭಾಗಗಳನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸಿ ಉತ್ಕಂಷ್ಟತಾ ಕೇಂದ್ರಗಳನ್ನಾಗಿ (Centre of Excellence) ಅಭಿವೃದ್ಧಿಪಡಿಸಲು ಐದು ಕೋಟಿ ರೂ. ಅನುದಾನ.

* ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಸಿ.ವಿ. ರಾಮನ್ ಆಸ್ಪತ್ರೆಗಳಲ್ಲಿ ಹೃದಯ ರೋಗದ ಚಿಕಿತ್ಸೆಗಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ ಕ್ಯಾತ್‍ಲ್ಯಾಬ್ ಸ್ಥಾಪನೆ.

* ಹಾವೇರಿ ಜಿಲ್ಲೆಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ 20 ಹಾಸಿಗೆಗಳ ಆಯುಷ್ ಸಂಯುಕ್ತ ಆಸ್ಪತ್ರೆ ಪ್ರಾರಂಭ. ಐದು ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು.

* ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬುಡಕಟ್ಟು ಜನರ ಪಾರಂಪರಿಕ ವೈದ್ಯಪದ್ಧತಿ ಮತ್ತು ಆಚರಣೆಗಳ ದಾಖಲೀಕರಣ ಮತ್ತು ಆಯ್ದ ಔಷಧಿಗಳ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಎರಡು ಕೋಟಿ ರೂ. ಅನುದಾನ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.