ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಗ್ರಾಮೀಣ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ₹ 5,200 ವೆಚ್ಚದಲ್ಲಿ 'ಪ್ರಗತಿ ಪಥ' ರಸ್ತೆ ಯೋಜನೆ ಅನುಷ್ಠಾನಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
2025–26ನೇ ಸಾಲಿನ ಕರ್ನಾಟಕ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ, ಮಾರ್ಚ್ 7) ಮಂಡಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ ಹಲವು ಘೋಷಣೆಗಳನ್ನು ಮಾಡಿದ್ದಾರೆ.
'ಪ್ರಗತಿ ಪಥ' ರಸ್ತೆ ಯೋಜನೆ ಕಳೆದ ಆಯವ್ಯಯದಲ್ಲಿ ಘೋಷಿಸಲಾಗಿತ್ತು. ಅದನ್ನು ಈ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ʻಕಲ್ಯಾಣ ಪಥʼ ಯೋಜನೆಯಡಿ ₹1,000 ಕೋಟಿ ಮೊತ್ತದ 286 ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸುವುದಾಗಿ ಭರವಸೆ ನೀಡಿರುವ ಸಿಎಂ, 'ಜಲ ಜೀವನ್ ಮಿಷನ್'ಗೆ ಪ್ರಸಕ್ತ ಸಾಲಿನಲ್ಲಿ ₹ 6,050 ಕೋಟಿ ಅನುದಾನ ನೀಡುವುದಾಗಿ ಹೇಳಿದ್ದಾರೆ
ಗ್ರಾಮ ಪಂಚಾಯತಿ ಮಟ್ಟದ ಅರಿವು ಕೇಂದ್ರಗಳಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಸಾಮರ್ಥ್ಯ ಅಭಿವೃದ್ಧಿ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ, ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಸೋಲಾರ್ ಮೈಕ್ರೋ–ಗ್ರಿಡ್‌ಗಳ ಸ್ಥಾಪನೆ ಮಾಡಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಿದ್ದಾರೆ.
'ಇ-ಸ್ವತ್ತು ಅಭಿಯಾನ' ಆರಂಭ ಮತ್ತು ಪಂಚತಂತ್ರ ತಂತ್ರಾಂಶವನ್ನು ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೂ ವಿಸ್ತರಿಸಲಾಗುವುದು. ಹಿರಿಯ ಅಧಿಕಾರಿಗಳಿಂದ 'ಗ್ರಾಮ ಪಂಚಾಯತಿ ದತ್ತು' ಕಾರ್ಯಕ್ರಮ ಆರಂಭಿಸಲಾಗುವುದು. ನೀರು ಸರಬರಾಜು ಮೂಲಭೂತ ಸೌಕರ್ಯ ನಿರ್ವಹಣೆಗೆ ಭೌಗೋಳಿಕ ಮಾಹಿತಿ ವ್ಯವಸ್ಥೆ (GIS) ಆಧಾರಿತ ಮೊಬೈಲ್ ಮತ್ತು ವೆಬ್ ತಂತ್ರಾಂಶ ಅಭಿವೃದ್ಧಿಪಡಿಸಲಾಗುವುದು ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.