ನವದೆಹಲಿ: ಕೇಂದ್ರ ಬಜೆಟ್ ಅನ್ನು ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ, ಇದು ದೇಶದ ಉತ್ತಮ ಬೆಳವಣಿಗೆ ಹಾಗೂ ಉಜ್ವಲ ಭವಿಷ್ಯಕ್ಕೆ ನಾಂದಿ ಹಾಡಿದೆ ಎಂದು ಪ್ರತಿಪಾದಿಸಿದ್ದಾರೆ.
ಇಂದು (ಮಂಗಳವಾರ) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024–25ನೇ ಸಾಲಿನ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಲೋಕಸಭೆಯಲ್ಲಿ ಮಂಡಿಸಿದರು.
‘ದೇಶವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡುವಲ್ಲಿ ಬಜೆಟ್ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ. ಅಭಿವೃದ್ಧಿ ಹೊಂದಿದ ಭಾರತಕ್ಕೆ ಭದ್ರ ಬುನಾದಿ ಹಾಕುತ್ತದೆ. ಈ ಬಾರಿಯ ಬಜೆಟ್ ದೇಶದ ಯುವಕರು, ಹಿಂದುಳಿದ ವರ್ಗಗಳು, ಮಹಿಳೆಯರು ಹಾಗೂ ಮಧ್ಯಮ ವರ್ಗದವರ ಮೇಲೆ ಹೆಚ್ಚು ಗಮನ ಹರಿಸಿದೆ. ಜತೆಗೆ ಉತ್ಪಾದನೆ ಮತ್ತು ಮೂಲಸೌಕರ್ಯ ಕ್ಷೇತ್ರಗಳಿಗೆ ಒತ್ತು ನೀಡಿದೆ. ಉದ್ಯೋಗ ಸಂಬಂಧಿತ ಪ್ರೋತ್ಸಾಹ ಯೋಜನೆಗಳು ಕೋಟಿಗಟ್ಟಲೆ ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತವೆ’ ಎಂದು ಅವರು ಪ್ರತಿಪಾದಿಸಿದ್ದಾರೆ.
‘ಈ ದೂರದೃಷ್ಟಿಯ ಬಜೆಟ್ ಸಮಾಜದ ಪ್ರತಿಯೊಂದು ಸ್ತರವನ್ನು ಉನ್ನತೀಕರಿಸುತ್ತದೆ ಹಾಗೂ ಸಬಲಗೊಳಿಸುತ್ತದೆ. ಅಲ್ಲದೆ, ದೇಶದ ಎಲ್ಲರಿಗೂ ಉಜ್ವಲ ಭವಿಷ್ಯಕ್ಕೆ ದಾರಿ ಮಾಡಿಕೊಡುತ್ತದೆ‘ ಎಂದು ಹೇಳಿದ್ದಾರೆ.
ಯುವಕರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ, ಮುಂದಿನ ಐದು ವರ್ಷಗಳಲ್ಲಿ 500 ಉನ್ನತ ಕಂಪನಿಗಳಲ್ಲಿ ಒಂದು ಕೋಟಿ ಯುವ ಜನರಿಗೆ ಇಂಟರ್ನ್‌ಶಿಪ್ ಅವಕಾಶ ಒದಗಿಸುವ ಯೋಜನೆಯನ್ನು ಘೋಷಿಸಲಾಗಿದೆ. ಈ ಯೋಜನೆಯಡಿಯಲ್ಲಿ ಉನ್ನತ ಕಂಪನಿಗಳಲ್ಲಿ ಕೆಲಸ ಮಾಡುವುದರಿಂದ, ಯುವಜನತೆ ಉದ್ಯೋಗ ಸಾಧ್ಯತೆಗಳ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಾರೆ ಎಂದು ಮೋದಿ ತಿಳಿಸಿದ್ದಾರೆ.
‘ಮುದ್ರಾ ಯೋಜನೆಯಡಿ ನೀಡಲಾಗುತ್ತಿರುವ ಸಾಲವನ್ನು ₹10 ಲಕ್ಷದಿಂದ ₹20 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಇದರಿಂದ ಸಣ್ಣ ಉದ್ಯಮಿಗಳು, ಮಹಿಳೆಯರು, ದಲಿತರು, ಹಿಂದುಳಿದ ವರ್ಗ ಮತ್ತು ಉದ್ಯೋಗ ವಂಚಿತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಬಿಹಾರ, ಜಾರ್ಖಂಡ್ , ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗಾಗಿ ‘ಪೂರ್ವೋದಯ’ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಈ ಮೂಲಕ ಪೂರ್ವ ರಾಜ್ಯಗಳ ಅಭಿವೃದ್ಧಿಗೆ ಹೊಸ ವೇಗ ಮತ್ತು ಶಕ್ತಿ ದೊರೆಯಲಿದೆ’ ಎಂದು ಅವರು ಹೇಳಿದ್ದಾರೆ.
ದೇಶದಲ್ಲಿನ ಹೆದ್ದಾರಿಗಳು, ಜಲ ಯೋಜನೆಗಳು ಮತ್ತು ವಿದ್ಯುತ್ ಯೋಜನೆಗಳಂತಹ ಪ್ರಮುಖ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹೊಸ ಉತ್ತೇಜನ ನೀಡಲಾಗುವುದು ಎಂದು ಪ್ರತಿಪಾದಿಸಿದ್ದಾರೆ.
ಕೇಂದ್ರ ಬಜೆಟ್ ಮಧ್ಯಮ ವರ್ಗವನ್ನು ಬಲಿಷ್ಠಗೊಳಿಸುವ ಗುರಿಯನ್ನು ಹೊಂದಿದೆ. ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಗೆ ಹೊಸ ಆಯಾಮವನ್ನು ಒದಗಿಸಲಿದೆ. ಬುಡಕಟ್ಟು ಜನಾಂಗ, ದಲಿತರು ಹಾಗೂ ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಈ ಬಾರಿಯ ಬಜೆಟ್‌ನಲ್ಲಿ ಪ್ರಮುಖ ಯೋಜನೆಗಳನ್ನು ಘೋಷಿಸಲಾಗಿದೆ. ಮಹಿಳೆಯರ ಸಬಲೀಕರಣ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಿಳೆಯರು ಹಾಗೂ ಹೆಣ್ಣುಮಕ್ಕಳಿಗೆ ಅನುಕೂಲವಾಗುವ ಯೋಜನೆಗಳಿಗೆ ₹3 ಲಕ್ಷ ಕೋಟಿಯನ್ನು ಮೀಸಲಿಡಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.