ನವದೆಹಲಿ/ ಪಟ್ನಾ/ಅಮರಾವತಿ: ಎನ್‌ಡಿಎ ಮೈತ್ರಿಯ ಪ್ರಮುಖ ಮಿತ್ರಪಕ್ಷಗಳಾದ ಜೆಡಿಯು ಮತ್ತು ಟಿಡಿಪಿ ಅಧಿಕಾರದಲ್ಲಿರುವ ಬಿಹಾರ ಮತ್ತು ಆಂಧ್ರ ಪ್ರದೇಶಗಳಿಗೆ ಕೇಂದ್ರದ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಮಹತ್ವದ ಕೊಡುಗೆಗಳು ದೊರೆತಿವೆ.
ಸರ್ಕಾರಕ್ಕೆ ನಿರ್ಣಾಯಕ ಬೆಂಬಲ ನೀಡಿರುವ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮತ್ತು ಚಂದ್ರಬಾಬು ನಾಯ್ಡು ಅವರ ಟಿಡಿಪಿ ಪಕ್ಷಗಳನ್ನು ಓಲೈಸುವ ಕಾರ್ಯವನ್ನು ಕೇಂದ್ರ ಸರ್ಕಾರ ಈ ಮೂಲಕ ಮಾಡಿದೆ.
ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರಕ್ಕೆ ಸುಮಾರು ₹60,000 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ನಿರ್ಮಲಾ ಸೀತಾರಾಮನ್ ಅವರು ಪ್ರಸ್ತಾಪಿಸಿದ್ದಾರೆ. ಅಲ್ಲದೆ ಆಂಧ್ರ ಪ್ರದೇಶದ ರಾಜಧಾನಿ ಅಮರಾವತಿ ಅಭಿವೃದ್ಧಿಗೆ ಪ್ರಸ್ತಕ ಸಾಲಿನಲ್ಲಿ ವಿವಿಧ ಮೂಲಗಳಿಂದ ₹15,000 ಕೋಟಿ ಒದಗಿಸುವುದಾಗಿ ಹೇಳಿದ್ದಾರೆ.
ಬಿಹಾರಕ್ಕೆ ಹೂಡಿಕೆ ಮತ್ತು ಸಬ್ಸಿಡಿ ರೂಪದಲ್ಲಿ ಹಾಗೂ ಆಂಧ್ರ ಪ್ರದೇಶಕ್ಕೆ ವಿವಿಧ ಏಜೆನ್ಸಿಗಳ ಮೂಲಕ ಆರ್ಥಿಕ ನೆರವು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಬಿಹಾರದ ರಸ್ತೆಗಳಿಗೆ ₹26 ಸಾವಿರ ಕೋಟಿ: ಬಿಹಾರದಲ್ಲಿ ಹಲವು ರಸ್ತೆಗಳ ನಿರ್ಮಾಣಕ್ಕೆ ₹26,000 ಕೋಟಿ ಅನುದಾನವನ್ನು ಬಜೆಟ್‌ನಲ್ಲಿ ನೀಡಲಾಗಿದೆ. ಬಿಹಾರದಲ್ಲಿ ವಿಮಾನ ನಿಲ್ದಾಣಗಳು, ವೈದ್ಯಕೀಯ ಕಾಲೇಜುಗಳು ಮತ್ತು ಕ್ರೀಡೆಗೆ ಅನುಕೂಲವಾಗುಂಥ ಮೂಲಸೌಕರ್ಯಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ‘ಪೂರ್ವೋದಯ’ ಯೋಜನೆಯನ್ನು ಕೇಂದ್ರ ರೂಪಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮೂರನೇ ಅವಧಿಗೆ ಅಧಿಕಾರಕ್ಕೆ ಬರಲು ಜೆಡಿಯು ಮತ್ತು ಟಿಡಿಪಿ ಮಹತ್ವದ ಪಾತ್ರವಹಿಸಿದೆ.
ನಿತೀಶ್, ನಾಯ್ಡು ಸಂತಸ: ‘ಬಿಹಾರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಲು ಸಾಧ್ಯವಾಗದಿದ್ದರೆ ವಿಶೇಷ ಆರ್ಥಿಕ ಪ್ಯಾಕೇಜನ್ನಾದರೂ ಘೋಷಿಸಿ ಎಂದು ನಾವು ಕೇಂದ್ರಕ್ಕೆ ಮನವಿ ಮಾಡಿದ್ದೆವು. ನಮ್ಮ ಮನವಿಯನ್ನು ಬಜೆಟ್‌ನಲ್ಲಿ ಈಡೇರಿಸಲಾಗಿದೆ’ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸುದ್ದಿಗಾರರ ಜತೆ ಅವರು ಮಾತನಾಡಿದರು. ರಾಜ್ಯಕ್ಕೆ ವಿಶೇಷ ಸ್ಥಾನಮಾನದ ಪ್ರಸ್ತಾವವನ್ನು ಕೈಬಿಡುತ್ತೀರಾ ಎಂಬ ಪ್ರಶ್ನೆಗೆ ಅವರು ಉತ್ತರಿಸಲಿಲ್ಲ. ಕೇಂದ್ರ ಬಜೆಟ್ ಕುರಿತು ತೃಪ್ತಿ ಇದೆಯಾ ಎಂಬ ಪ್ರಶ್ನಗೆ, ‘ಹೌದು’ ಎಂದು ಪ್ರತಿಕ್ರಿಯಿಸಿದರು.
‘ಆಂಧ್ರ ಪ್ರದೇಶದ ಅಗತ್ಯಗಳನ್ನು ಗುರುತಿಸಿ, ಅಭಿವೃದ್ಧಿ ಯೋಜನೆಗಳೆಡೆಗೆ ಗಮನ ಹರಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ’ ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.