
ಬೆಂಗಳೂರು: ವಾಣಿಜ್ಯ ತೆರಿಗೆ ಸಂಗ್ರಹಕ್ಕೆ ನೀಡಲಾಗಿದ್ದ ಗುರಿಯಲ್ಲಿ ಶೇ 10ರಷ್ಟು ಕೊರತೆಯಾಗಿದ್ದು, ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಶೇ 100ರಷ್ಟು ಗುರಿಯನ್ನು ಸಾಧಿಸಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಕೀತು ಮಾಡಿದ್ದಾರೆ.
ವಾಣಿಜ್ಯ ತೆರಿಗೆ ಇಲಾಖೆ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳ ಜತೆಗೆ ವಿಧಾನಸೌಧದಲ್ಲಿ ಶುಕ್ರವಾರ ಅವರು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಅಧಿಕಾರಿಗಳು ನೀಡಿದ ಅಂಕಿ–ಅಂಶಗಳನ್ನು ಪರಿಶೀಲಿಸಿದ ಅವರು, ಅಸಮಾಧಾನ ವ್ಯಕ್ತಪಡಿಸಿದರು ಎಂದು ಗೊತ್ತಾಗಿದೆ.
2025–26ನೇ ಆರ್ಥಿಕ ವರ್ಷದಲ್ಲಿ ₹1.20 ಲಕ್ಷ ಕೋಟಿ ವಾಣಿಜ್ಯ ತೆರಿಗೆ ಸಂಗ್ರಹ ಗುರಿ ನೀಡಲಾಗಿದೆ. ನವೆಂಬರ್ ಅಂತ್ಯದ ವೇಳೆಗೆ ₹80,000 ಕೋಟಿ ಸಂಗ್ರಹಿಸಬೇಕಿತ್ತು. ಆದರೆ ನವೆಂಬರ್ ಅಂತ್ಯದವರೆಗೆ ₹72,131 ಕೋಟಿ ಮಾತ್ರ ಸಂಗ್ರಹವಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು. ಈ ಪ್ರಕಾರ, ನಿಗದಿತ ಗುರಿಯಲ್ಲಿ ₹7,869 ಕೋಟಿ ಕೊರತೆಯಾಗಿದೆ.
ಏಪ್ರಿಲ್‌ನಿಂದ ಆಗಸ್ಟ್‌ವರೆಗೆ ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಶೇ 12ರಷ್ಟು ಪ್ರಗತಿ ಸಾಧಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರವು ಜಿಎಸ್‌ಟಿ ದರಗಳಲ್ಲಿ ಬದಲಾವಣೆ ಮಾಡಿದ್ದರಿಂದ ನಂತರದ ತಿಂಗಳುಗಳಲ್ಲಿ ತೆರಿಗೆ ಸಂಗ್ರಹ ಇಳಿಮುಖವಾಗಿದೆ. ಶೇ 12ರಷ್ಟು ಇದ್ದ ಬೆಳವಣಿಗೆ ದರವು ಸೆಪ್ಟೆಂಬರ್‌ನಿಂದ ನವೆಂಬರ್ ಅವಧಿಯಲ್ಲಿ ಶೇ 3ರಷ್ಟಕ್ಕೆ ಕುಸಿದಿದೆ. ಪರಿಣಾಮವಾಗಿ ಒಟ್ಟು ತೆರಿಗೆ ಸಂಗ್ರಹ ಗುರಿಯಲ್ಲಿ ಶೇ 10ರಷ್ಟು ಕೊರತೆಯಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ವಿವರಣೆ ನೀಡಿದ್ದಾರೆ.
ತೆರಿಗೆ ವಂಚನೆ ಪ್ರಕರಣಗಳು ಮತ್ತು ನಕಲಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ಐಟಿಸಿ) ಕ್ಲೇಮುಗಳ ಕಾರಣದಿಂದ ತೆರಿಗೆ ಸಂಗ್ರಹ ಕೊರತೆಯಾಗಿದೆ. ಇದನ್ನು ತಡೆಯಲು ತಪಾಸಣಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಈ ಅವಧಿಯಲ್ಲಿ ಒಟ್ಟು 13,000 ತಪಾಸಣೆಗಳನ್ನು ನಡೆಸಿ, ₹3,183 ಕೋಟಿ ತೆರಿಗೆ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತೆರಿಗೆ ವಂಚನೆಯ ಮಾರ್ಗಗಳನ್ನು ಪತ್ತೆ ಮಾಡಿ, ಇದನ್ನು ತಡೆಯಲು ತಂತ್ರಜ್ಞಾನ ಬಳಕೆ ಮಾಡಿಕೊಳ್ಳಿ. ನಕಲಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ಕ್ಲೇಮುಗಳನ್ನು ಮಾಡುತ್ತಿರುವವರ ವಿರುದ್ಧ ಅಪರಾಧ ಪ್ರಕರಣ ದಾಖಲಿಸಿ. ತೆರಿಗೆ ವಂಚನೆಯನ್ನು ಗರಿಷ್ಠ ಪ್ರಮಾಣದಲ್ಲಿ ತಡೆಗಟ್ಟಿ ಎಂದು ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.