ADVERTISEMENT

ವಾರದ ವಹಿವಾಟು ನಕಾರಾತ್ಮಕ ಅಂತ್ಯ: ಕರಗಿತು ₹ 2.93 ಲಕ್ಷ ಕೋಟಿ ಸಂಪತ್ತು

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2021, 14:00 IST
Last Updated 24 ಏಪ್ರಿಲ್ 2021, 14:00 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ದೇಶದ ಷೇರುಪೇಟೆಗಳ ವಾರದ ವಹಿವಾಟು ನಕಾರಾತ್ಮಕವಾಗಿ ಅಂತ್ಯವಾಗಿದೆ. ಕೋವಿಡ್‌–19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು, ರೂಪಾಯಿ ಮೌಲ್ಯ ಇಳಿಕೆ ಹಾಗೂ ವಿದೇಶಿ ಬಂಡವಾಳ ಹೊರಹರಿವಿನ ಕಾರಣಗಳಿಂದಾಗಿ ವಹಿವಾಟು ಇಳಿಕೆ ಕಾಣುವಂತಾಗಿದೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ವಾರದ ವಹಿವಾಟಿನಲ್ಲಿ 954 ಅಂಶ ಇಳಿಕೆ ಆಗಿ 47,878 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ. ಹೂಡಿಕೆದಾರರ ಸಂಪತ್ತು ₹ 2.93 ಲಕ್ಷ ಕೋಟಿಗಳಷ್ಟು ಕರಗಿದ್ದು, ಷೇರುಪೇಟೆಯ ಬಂಡವಾಳ ಮೌಲ್ಯ ₹ 205.30 ಲಕ್ಷ ಕೋಟಿಗಳಿಂದ ₹ 202.37 ಲಕ್ಷ ಕೋಟಿಗಳಿಗೆ ಇಳಿಕೆಯಾಗಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 276 ಅಂಶ ಇಳಿಕೆಯಾಗಿ 14,341 ಅಂಶಗಳಿಗೆ ತಲುಪಿದೆ.

ದೇಶದಲ್ಲಿ ಕೋವಿಡ್‌–19 ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಇದರಿಂದಾಗಿ ಹಲವು ರಾಜ್ಯಗಳಲ್ಲಿ ಹೊಸದಾಗಿ ಲಾಕ್‌ಡೌನ್‌ ಮತ್ತು ನಿರ್ಬಂಧಗಳನ್ನು ಜಾರಿಗೊಳಿಸಲಾಗುತ್ತಿದೆ. ಈ ಬೆಳವಣಿಗೆಯು ಬೇಡಿಕೆ ಮತ್ತು ವಾಣಿಜ್ಯ ವಹಿವಾಟುಗಳ ಮೇಲೆ ಪರಿಣಾಮ ಉಂಟುಮಾಡುತ್ತಿದೆ. ಇದರಿಂದಾಗಿ ಒಟ್ಟಾರೆ ಆರ್ಥಿಕ ಬೆಳವಣಿಗೆಯ ಮೇಲೆ ನಕಾರಾತ್ಮಕ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ.

ADVERTISEMENT

ಕೋವಿಡ್‌ ಪ್ರಕರಣಗಳ ಹೆಚ್ಚಳವು ವಿದೇಶಿ ಬಂಡವಾಳ ಹೂಡಿಕೆದಾರರಲ್ಲಿ ಆತಂಕ ಮೂಡಿಸಿದ್ದು, ಷೇರುಪೇಟೆಯಿಂದ ಬಂಡವಾಳ ಹಿಂದಕ್ಕೆ ಪಡೆಯುವಂತೆ ಮಾಡಿದೆ ಎಂದೂ ತಿಳಿಸಿದ್ದಾರೆ.

ವಾರದ ವಹಿವಾಟಿನಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ 66 ಪೈಸೆ ಇಳಿಕೆ ಆಗಿ ಒಂದು ಡಾಲರ್‌ಗೆ ₹ 75.02ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.