ADVERTISEMENT

ವಿದೇಶಿ ಬಂಡವಾಳ ಹೂಡಿಕೆ ₹ 5,177 ಕೋಟಿ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2020, 17:19 IST
Last Updated 9 ಫೆಬ್ರುವರಿ 2020, 17:19 IST

ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಫೆಬ್ರುವರಿ 3 ರಿಂದ 7ರವರೆಗೆ ಬಂಡವಾಳ ಮಾರುಕಟ್ಟೆಯಲ್ಲಿ
₹5,177 ಕೋಟಿ ಹೂಡಿಕೆ ಮಾಡಿದ್ದಾರೆ.

ಈ ವಾರದಲ್ಲಿ ಸಾಲಪತ್ರಗಳ ಖರೀದಿಗೆ ಆಸಕ್ತಿ ತೋರಿದ್ದು, ಷೇರುಪೇಟೆಯಲ್ಲಿ ಮಾರಾಟಕ್ಕೆ ಗಮನ ನೀಡಿದ್ದಾರೆ. ₹ 6,350 ಕೋಟಿ ಮೌಲ್ಯದ ಸಾಲಪತ್ರಗಳನ್ನು ಖರೀದಿಸಿದ್ದರೆ,₹ 1,172 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ಚೀನಾದ ಕೊರೊನಾ ವೈರಸ್‌ ಜಾಗತಿಕ ಷೇರುಪೇಟೆಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ. ಇದರಿಂದಾಗಿ ಭಾರತದಂತಹ ಪ್ರವರ್ಧಮಾನಕ್ಕೆ ಬರುತ್ತಿರುವ ದೇಶಗಳಲ್ಲಿ ಬಂಡವಾಳ ತೊಡಗಿಸಲು ಹೂಡಿಕೆದಾರರು ಹಿಂಜರಿಯುತ್ತಿದ್ದಾರೆ ಎಂದು ತಜ್ಞರು ಹೇಳಿದ್ದಾರೆ.

ADVERTISEMENT

ಬಜೆಟ್‌ನಲ್ಲಿ ಘೋಷಿಸಿರುವ ಸುಧಾರಣಾ ಕ್ರಮಗಳಿಂದಾಗಿ ಮುಂದಿನ ದಿನಗಳಲ್ಲಿ ಬಂಡವಾಳ ಒಳಹರಿವು ಹೆಚ್ಚಾಗುವ ನಿರೀಕ್ಷೆ ಇದೆ ಎಂದೂ ಹೇಳಿದ್ದಾರೆ. ಕಾರ್ಪೊರೇಟ್‌ ಬಾಂಡ್‌ಗಳಲ್ಲಿ ಎಫ್‌ಪಿಐ ಹೂಡಿಕೆ ಮಿತಿಯನ್ನು ಶೇ 9 ರಿಂದ ಶೇ 15ಕ್ಕೆ ಹೆಚ್ಚಿಸಲು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಇದರಿಂದಾಗಿ ಹೂಡಿಕೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.