ನವದೆಹಲಿ: ಜೆನ್ಸೋಲ್ ಎಂಜಿನಿಯರಿಂಗ್ ಕಂಪನಿಯ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್‌ಒ) ಜಬೀರ್‌ಮಹೇಂದಿ ಮೊಹಮ್ಮದ್‌ರಜಾ ಅಗಾ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಕಂಪನಿಯು ಪ್ರಸ್ತುತ ಸವಾಲುಗಳನ್ನು ಎದುರಿಸುತ್ತಿದ್ದು, ತನಿಖಾ ಸಂಸ್ಥೆಗಳಿಂದ ವಿಚಾರಣೆ ನಡೆಯುತ್ತಿದೆ. ಅಲ್ಲದೆ, ಕಂಪನಿಯ ಪ್ರವರ್ತಕರು ಸಹ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಮುಖ ಮಾಹಿತಿ ಮತ್ತು ಒಗ್ಗಟ್ಟಿನ ಕೊರತೆಯಿಂದಾಗಿ ವಿಚಾರಣೆಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುವ ಸಾಮರ್ಥ್ಯಕ್ಕೆ ಅಡ್ಡಿಯಾಗುತ್ತಿದೆ. ಇದು ನನ್ನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಷೇರುಪೇಟೆಗೆ ಸಲ್ಲಿಸಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಕಂಪನಿಯ ಪ್ರವರ್ತಕರಾದ ಅನ್ಮೋಲ್ ಸಿಂಗ್ ಜಗ್ಗಿ ಮತ್ತು ಪುನೀತ್ ಸಿಂಗ್ ಜಗ್ಗಿ ಅವರು ಕಂಪನಿಯ ಹಣವನ್ನು ವೈಯಕ್ತಿಕ ಕೆಲಸಕ್ಕೆ ಬಳಕೆ ಮಾಡಿಕೊಂಡಿದ್ದು, ಆರ್ಥಿಕ ಅವ್ಯವಹಾರ ನಡೆಸಿದ್ದಾರೆ ಎಂದು ಇವರನ್ನು ಏಪ್ರಿಲ್‌ನಲ್ಲಿ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯು (ಸೆಬಿ), ಷೇರುಪೇಟೆ ವಹಿವಾಟಿನಿಂದ ನಿಷೇಧಿಸಿತ್ತು. ಇತ್ತೀಚೆಗೆ ಸೆಬಿ ಮಧ್ಯಂತರ ಆದೇಶದಂತೆ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.
ಅನ್ಮೋಲ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಪುನೀತ್ ಪೂರ್ಣಕಾಲಿಕ ನಿರ್ದೇಶಕರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.