ನವದೆಹಲಿ: 2024–25ನೇ ಆರ್ಥಿಕ ವರ್ಷದಲ್ಲಿ ದೇಶದ ಸರಕು ಮತ್ತು ಸೇವೆಗಳ ರಫ್ತು ಮೌಲ್ಯವು ₹70.55 ಲಕ್ಷ ಕೋಟಿ ದಾಟಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ತಿಳಿಸಿದೆ.
2023–24ನೇ ಆರ್ಥಿಕ ವರ್ಷದಲ್ಲಿ ರಫ್ತು ಮೌಲ್ಯ ₹66.94 ಲಕ್ಷ ಕೋಟಿ ಆಗಿತ್ತು. ಜಾಗತಿಕ ಅನಿಶ್ಚಿತ ಸ್ಥಿತಿಯ ನಡುವೆಯೂ ರಫ್ತು ಪ್ರಮಾಣದಲ್ಲಿ ಶೇ 6ರಷ್ಟು ಏರಿಕೆಯಾಗಿದೆ ಎಂದು ಹೇಳಿದೆ.
ಭಾರತದ ಮೇಲೆ ಅಮೆರಿಕ ವಿಧಿಸಿರುವ ಪ್ರತಿ ಸುಂಕ ಹಾಗೂ ಅದರಿಂದ ಆಗುವ ಪರಿಣಾಮಗಳ ಬಗ್ಗೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಅವರು, ರಫ್ತು ಉತ್ತೇಜನಾ ಮಂಡಳಿ ಮತ್ತು ಕೈಗಾರಿಕಾ ಸಂಸ್ಥೆಗಳ ಜೊತೆಗೆ ಚರ್ಚೆ ನಡೆಸುತ್ತಿದ್ದಾರೆ. ದೇಶದ ವ್ಯಾಪಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರವು ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದೆ.
ಕೆಂಪು ಸಮುದ್ರ ಬಿಕ್ಕಟ್ಟು, ಇಸ್ರೇಲ್–ಹಮಾಸ್ ಸಂಘರ್ಷ, ರಷ್ಯಾ–ಉಕ್ರೇನ್ ಬಿಕ್ಕಟ್ಟಿನ ನಡುವೆಯೂ ದೇಶದ ರಫ್ತು ಉತ್ತಮ ಬೆಳವಣಿಗೆ ದಾಖಲಿಸಿದೆ. ಇದೇ ವೇಳೆ ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಪ್ರಗತಿ ಮಂದಗತಿಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.