
ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರ ಪರಿಷ್ಕರಣೆ ಹಾಗೂ ಹಬ್ಬಗಳ ಸಂದರ್ಭದಲ್ಲಿನ ಬೇಡಿಕೆ ಹೆಚ್ಚಳವು ತಯಾರಿಕಾ ವಲಯದ ಮೇಲೆ ಸಕಾರಾತ್ಮಕ ಪರಿಣಾಮ ಉಂಟುಮಾಡಿದೆ. ತಯಾರಿಕಾ ವಲಯದಲ್ಲಿ ಉತ್ತಮ ಪ್ರಮಾಣದ ಚಟುವಟಿಕೆ ಕಂಡುಬಂದ ಕಾರಣದಿಂದಾಗಿ ದೇಶದ ಕೈಗಾರಿಕಾ ಉತ್ಪಾದನೆಯ ಬೆಳವಣಿಗೆ ಪ್ರಮಾಣವು ಸೆಪ್ಟೆಂಬರ್‌ನಲ್ಲಿ ಶೇಕಡ 4ರಷ್ಟು ಆಗಿದೆ.
ಹಿಂದಿನ ವರ್ಷದ ಸೆಪ್ಟೆಂಬರ್‌ನಲ್ಲಿ ಕೈಗಾರಿಕಾ ಉತ್ಪಾದನೆಯ ಸೂಚ್ಯಂಕವು (ಐಐಪಿ) ಶೇ 3.2ರಷ್ಟು ಬೆಳವಣಿಗೆ ಕಂಡಿತ್ತು ಎಂದು ಕೇಂದ್ರ ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ಮಂಗಳವಾರ ಬಿಡುಗಡೆ ಮಾಡಿರುವ ಅಂಕಿ–ಅಂಶಗಳು ಹೇಳುತ್ತಿವೆ.
‘ಜಿಎಸ್‌ಟಿ ದರದಲ್ಲಿ ಆಗಿರುವ ಪರಿಷ್ಕರಣೆ, ಹಬ್ಬಗಳ ಋತು ಬೇಗನೆ ಶುರುವಾಗಿದ್ದುದು ಒಟ್ಟಾರೆ ಬೇಡಿಕೆಯನ್ನು ಹೆಚ್ಚಿಸಿರುವಂತಿವೆ. ಅಕ್ಟೋಬರ್ ತಿಂಗಳಲ್ಲಿಯೂ ತಯಾರಿಕಾ ವಲಯದ ಚಟುವಟಿಕೆಗಳು ಹೆಚ್ಚಿನ ಮಟ್ಟದಲ್ಲಿ ಇರುವ ನಿರೀಕ್ಷೆ ಇದೆ’ ಎಂದು ಐಸಿಆರ್‌ಎ ಸಂಸ್ಥೆಯ ಮುಖ್ಯ ಅರ್ಥಶಾಸ್ತ್ರಜ್ಞೆ ಅದಿತಿ ನಾಯರ್ ಹೇಳಿದ್ದಾರೆ.
ಜಿಎಸ್‌ಟಿ ದರ ಪರಿಷ್ಕರಣೆಯು ಸಣ್ಣ ಮೊತ್ತದ, ದಿನಬಳಕೆಯ ಉತ್ಪನ್ನಗಳಿಗೆ ಬೇಡಿಕೆಯನ್ನು ಉತ್ತಮ ಮಟ್ಟದಲ್ಲಿ ಇರಿಸುತ್ತದೆ. ಆದರೆ ಹೆಚ್ಚಿನ ಬೆಲೆಯ ಉತ್ಪನ್ನಗಳಿಗೆ ಬೇಡಿಕೆಯು ಉಳಿದುಕೊಳ್ಳುತ್ತದೆಯೇ ಎಂಬುದನ್ನು ಕಾದುನೋಡಬೇಕಿದೆ ಎಂದು ನಾಯರ್ ಹೇಳಿದ್ದಾರೆ.
ಸೆಪ್ಟೆಂಬರ್‌ನಲ್ಲಿ ಐಐಪಿ ಹೆಚ್ಚಳ ಕಂಡಿದ್ದರೂ, ಪ್ರಸಕ್ತ ಹಣಕಾಸು ವರ್ಷದ ಮೊದಲಾರ್ಧದಲ್ಲಿ (ಏಪ್ರಿಲ್–ಸೆಪ್ಟೆಂಬರ್ ಅವಧಿ) ಕೈಗಾರಿಕಾ ಉತ್ಪಾದನೆಯು ಶೇ 3ರಷ್ಟು ಮಾತ್ರ ಬೆಳವಣಿಗೆ ಕಂಡಿದೆ. ಹಿಂದಿನ ವರ್ಷದ ಮೊದಲಾರ್ಧದಲ್ಲಿ ಇದು ಶೇ 4.1ರಷ್ಟು ಬೆಳವಣಿಗೆ ದಾಖಲಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.