ನವದೆಹಲಿಯಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಅರ್ಥಶಾಸ್ತ್ರಜ್ಞರು ಹಾಗೂ ವಿವಿಧ ವಲಯದ ತಜ್ಞರೊಟ್ಟಿಗೆ ಬಜೆಟ್ ಪೂರ್ವ ಸಮಾಲೋಚನೆ ನಡೆಸಿದರು. ಸಚಿವೆ ನಿರ್ಮಲಾ ಸೀತಾರಾಮನ್ ಹಾಜರಿದ್ದರು
–ಪಿಟಿಐ ಚಿತ್ರ
ನವದೆಹಲಿ: ಉದ್ಯೋಗ ಸೃಷ್ಟಿ, ಕೃಷಿ ಉತ್ಪಾದಕತೆ ಹೆಚ್ಚಳ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ಸಾರ್ವಜನಿಕ ಬಂಡವಾಳ ಸಂಗ್ರಹಕ್ಕೆ ಒತ್ತು ನೀಡಬೇಕು ಎಂದು ಅರ್ಥಶಾಸ್ತ್ರಜ್ಞರು, ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
2025–26ನೇ ಸಾಲಿನ ಬಜೆಟ್ ಅಂಗವಾಗಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ನೀತಿ ಆಯೋಗದ ಕಚೇರಿಯಲ್ಲಿ ಅರ್ಥಶಾಸ್ತ್ರಜ್ಞರು ಹಾಗೂ ವಿವಿಧ ವಲಯದ ತಜ್ಞರೊಟ್ಟಿಗೆ ಸಮಾಲೋಚನೆ ನಡೆಸಿದರು.
ಜಾಗತಿಕ ಮಟ್ಟದಲ್ಲಿ ತಲೆದೋರಿರುವ ಬಿಕ್ಕಟ್ಟು ಹಾಗೂ ಅದರಿಂದ ಭಾರತದ ಆರ್ಥಿಕತೆ ಬೆಳವಣಿಗೆಯ ಮೇಲೆ ಆಗುವ ಪರಿಣಾಮಗಳ ಬಗ್ಗೆ ಅರ್ಥಶಾಸ್ತ್ರಜ್ಞರು ಮಾಹಿತಿ ಹಂಚಿಕೊಂಡರು. ಎಲ್ಲಾ ವಲಯದಲ್ಲೂ ಉದ್ಯೋಗ ಸೃಷ್ಟಿಗೆ ಸರ್ಕಾರ ಕ್ರಮವಹಿಸಬೇಕು. ಆ ಮೂಲಕ ಯುವಜನರ ಸಬಲೀಕರಣಕ್ಕೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.
ಉದ್ಯೋಗ ಸೃಷ್ಟಿಗೆ ಪೂರಕವಾಗಿ ಶಿಕ್ಷಣ ಮತ್ತು ಕೌಶಲ ತರಬೇತಿ ನೀಡಬೇಕು. ಕೃಷಿ ಚಟುವಟಿಕೆಗಳ ಹೆಚ್ಚಳಕ್ಕೆ ಅಗತ್ಯವಿರುವ ಕಾರ್ಯಕ್ರಮ ರೂಪಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಗೆ ಸುಸ್ಥಿರ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.