ಮುಂಬೈ: ರಿಯಾಲ್ಟಿ, ಐ.ಟಿ ಮತ್ತು ಆಟೊ ಷೇರುಗಳು ಮಾರಾಟದ ಒತ್ತಡಕ್ಕೆ ಸಿಲುಕಿದ್ದರಿಂದ. ಕಳೆದ ವಾರವನ್ನೂ ಒಳಗೊಂಡು ವಹಿವಾಟಿನ ಸತತ ಐದನೇ ದಿನವಾದ ಗುರುವಾರವೂ ದೇಶದ ಷೇರುಪೇಟೆಯಲ್ಲಿ ಕರಡಿ ಕುಣಿತ ಮುಂದುವರಿಯಿತು.
ಆರಂಭಿಕ ವಹಿವಾಟಿನಲ್ಲಿ ಏರಿಕೆ ದಾಖಲಿಸಿದ್ದ ಸೂಚ್ಯಂಕಗಳು ವಹಿವಾಟಿನ ಅಂತ್ಯದಲ್ಲಿ ಇದನ್ನು ಕಾಯ್ದುಕೊಳ್ಳುವಲ್ಲಿ ವಿಫಲವಾದವು.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 200 ಅಂಶ ಇಳಿಕೆ ಕಂಡು, 73,828 ಅಂಶಗಳಲ್ಲಿ ಸ್ಥಿರಗೊಂಡಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 73 ಅಂಶ ಇಳಿಕೆ ಕಂಡು 22,397 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತು.
ಸೆನ್ಸೆಕ್ಸ್ ಗುಚ್ಛದಲ್ಲಿನ ಜೊಮಾಟೊ, ಟಾಟಾ ಮೋಟರ್ಸ್, ಇಂಡಸ್ ಇಂಡ್ ಬ್ಯಾಂಕ್, ಏಷ್ಯನ್ ಪೇಂಟ್ಸ್, ಬಜಾಜ್ ಫೈನಾನ್ಸ್, ಮಾರುತಿ ಸುಜುಕಿ ಇಂಡಿಯಾ, ಅದಾನಿ ಪೋರ್ಟ್ಸ್, ಎಚ್‌ಯುಎಲ್, ರಿಲಯನ್ಸ್ ಇಂಡಸ್ಟ್ರೀಸ್, ಬಜಾಜ್ ಫಿನ್‌ಸರ್ವ್, ಅಲ್ಟ್ರಾಟೆಕ್ ಸಿಮೆಂಟ್ ಮತ್ತು ಇನ್ಫೊಸಿಸ್ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಐಸಿಐಸಿಐ ಬ್ಯಾಂಕ್, ಟಾಟಾ ಸ್ಟೀಲ್, ಎನ್‌ಟಿಪಿಸಿ, ಟಿಸಿಎಸ್, ಪವರ್‌ಗ್ರಿಡ್, ಕೋಟಕ್ ಮಹೀಂದ್ರ ಬ್ಯಾಂಕ್ ಮತ್ತು ಸನ್ ಫಾರ್ಮಾ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.
ಬುಧವಾರದ ವಹಿವಾಟಿನಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ₹1,627 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ. ದೇಶೀಯ ಸಾಂಸ್ಥಿಕ ಹೂಡಿಕೆದಾರರು ₹1,510 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.