ಮುಂಬೈ: ಐ.ಟಿ, ಆಟೊ ವಲಯದ ಷೇರುಗಳ ಖರೀದಿ ಹೆಚ್ಚಳದಿಂದ ದೇಶದ ಷೇರು ಸೂಚ್ಯಂಕಗಳು ಸೋಮವಾರದ ವಹಿವಾಟಿನಲ್ಲಿ ಏರಿಕೆಯಾಗಿವೆ.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 455 ಅಂಶ ಹೆಚ್ಚಳವಾಗಿ, 82,176ಕ್ಕೆ ಅಂತ್ಯಗೊಂಡಿದೆ. ವಹಿವಾಟಿನ ವೇಳೆ 771 ಅಂಶ ಏರಿಕೆಯಾಗಿತ್ತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 148 ಏರಿಕೆಯಾಗಿ, 25,001ಕ್ಕೆ ಕೊನೆಗೊಂಡಿದೆ.
ಜಪಾನ್ ದೇಶವನ್ನು ಹಿಂದಿಕ್ಕಿರುವ ಭಾರತವು ಜಾಗತಿಕ ಮಟ್ಟದಲ್ಲಿ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಐರೋಪ್ಯ ಒಕ್ಕೂಟದ ದೇಶಗಳ ಆಮದು ಸರಕುಗಳ ಮೇಲೆ ಶೇ 50ರಷ್ಟು ಸುಂಕವನ್ನು ಜುಲೈ 9ರ ವರೆಗೆ ಮುಂದೂಡಿದ್ದಾರೆ. ಇದು ದೇಶದ ಷೇರು ಸೂಚ್ಯಂಕಗಳ ಏರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಮಹೀಂದ್ರ ಆ್ಯಂಡ್ ಮಹೀಂದ್ರ, ಎಚ್‌ಸಿಎಲ್ ಟೆಕ್, ಟಾಟಾ ಮೋಟರ್ಸ್, ನೆಸ್ಲೆ, ಐಟಿಸಿ, ಹಿಂದುಸ್ತಾನ್ ಯೂನಿಲಿವರ್, ಲಾರ್ಸೆನ್ ಆ್ಯಂಡ್ ಟೊಬ್ರೊ ಮತ್ತು ಟೆಕ್ ಮಹೀಂದ್ರ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ. ಎಟರ್ನಲ್, ಅಲ್ಟ್ರಾಟೆಕ್ ಸಿಮೆಂಟ್, ಪವರ್ ಗ್ರಿಡ್, ಟಾಟಾ ಸ್ಟೀಲ್ ಮತ್ತು ಕೋಟಕ್ ಮಹೀಂದ್ರ ಬ್ಯಾಂಕ್‌ನ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ.
ಏಷ್ಯಾದ ಮಾರುಕಟ್ಟೆಯಲ್ಲಿ ದಕ್ಷಿಣ ಕೊರಿಯಾ, ಜಪಾನ್ ಸಕಾರಾತ್ಮಕ ವಹಿವಾಟಿನಲ್ಲಿ ಅಂತ್ಯಗೊಂಡಿವೆ. ಶಾಂಘೈ ಮತ್ತು ಹಾಂಗ್ ಕಾಂಗ್ ನಕಾರಾತ್ಮಕ ವಹಿವಾಟಿನಲ್ಲಿ ಅಂತ್ಯಗೊಂಡಿವೆ. ಶುಕ್ರವಾರದ ವಹಿವಾಟಿನಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್‌ಐಐ) ₹1,794 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ.
ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 0.17ರಷ್ಟು ಏರಿಕೆಯಾಗಿದೆ. ಪ್ರತೀ ಬ್ಯಾರೆಲ್ 64.89 ಡಾಲರ್ (₹5,523) ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.